×
Ad

ಮೂಲಭೂತ ಸೌಲಭ್ಯ ಕಲ್ಪಿ ಸಲು ಒತ್ತಾಯಿಸಿ ಮನವಿ

Update: 2016-08-22 22:33 IST

 ಸಾಗರ, ಆ.22: ನಗರದ ಬಿ.ಎಚ್.ರಸ್ತೆಯಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿನಿ ನಿಲಯದಲ್ಲಿ ಮೂಲಭೂತ ಸೌಲಭ್ಯಗಳನ್ನು ಸರಿಯಾಗಿ ಕಲ್ಪಿಸುವಂತೆ ಒತ್ತಾಯಿಸಿ ವಿದ್ಯಾರ್ಥಿನಿಯರು ಸೋಮವಾರ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ವಿದ್ಯಾರ್ಥಿನಿಯರ ದೂರಿನ ಹಿನ್ನೆಲೆಯಲ್ಲಿ ತಾಲೂಕು ದಲಿತ ಸಂಘರ್ಷ ಸಮಿತಿ ಮುಖಂಡರು ಹಾಸ್ಟೆಲ್‌ಗೆ ಭೇಟಿ ನೀಡಿ ವಿದ್ಯಾರ್ಥಿನಿಯರ ಅಹವಾಲು ಆಲಿಸಿ, ಅಧಿಕಾರಿಗಳಿಗೆ ಮಾಹಿತಿ ನೀಡಿದರು. ವಿದ್ಯಾರ್ಥಿನಿಲಯದಲ್ಲಿ ಶುದ್ಧವಾದ ಕುಡಿಯುವ ನೀರಿನ ಸೌಲಭ್ಯವಿಲ್ಲವಾಗಿದೆ. ಶೌಚಾಲಯದಲ್ಲಿ ಸ್ವಚ್ಛತೆ ಇಲ್ಲದೆ ಇರುವುದರಿಂದ ವಿದ್ಯಾರ್ಥಿನಿಯರು ರೋಗ ರುಜಿನಕ್ಕೆ ತುತ್ತಾಗುತ್ತಿದ್ದಾರೆ ಎಂದು ದೂರಿದರು. ಸರಕಾರದ ನಿಯಮಾವಳಿಗಳ ಪ್ರಕಾರ ಆಹಾರವನ್ನು ನೀಡುತ್ತಿಲ್ಲ. ಸಿದ್ಧಪಡಿಸಿದ ಆಹಾರ ತಿನ್ನಲು ಬರುತ್ತಿಲ್ಲ. ಹಾಸ್ಟೆಲ್ ಅವ್ಯವಸ್ಥೆ ಬಗ್ಗೆ ಅನೇಕ ಬಾರಿ ದೂರು ನೀಡಲಾಗಿದೆ. ಆದರೆ ಅದನ್ನು ಬಗೆಹರಿಸುವ ನಿಟ್ಟಿನಲ್ಲಿ ಕ್ರಮ ತೆಗೆದುಕೊಂಡಿಲ್ಲ ಎಂದು ದೂರಿದ ವಿದ್ಯಾರ್ಥಿನಿಯರು, ಹಾಸ್ಟೆಲ್‌ನ ಶೌಚಾಲಯಕ್ಕೆ ವಿದ್ಯುತ್ ಸೌಲಭ್ಯವಿಲ್ಲ. ರಾತ್ರಿ ಕಾವಲುಗಾರರನ್ನು ನೇಮಿಸದೆ ಇರುವ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು. ಸಿಸಿ ಕ್ಯಾಮರಾ ಅಳವಡಿಸುವುದು, ಟಿವಿ ಅಳವಡಿಸುವುದು ಹಾಗೂ ಕಂಪ್ಯೂಟರ್ ಅಳವಡಿಕೆಗೆ ಅವಕಾಶವಿದ್ದರೂ ಅಧಿಕಾರಿಗಳು ಕ್ರಮ ಕೈಗೊಳ್ಳುತ್ತಿಲ್ಲ. ಜಿಲ್ಲಾಧಿಕಾರಿಗಳ ಸೂಚನೆಯಂತೆ ಸಲಹಾ ಪೆಟ್ಟಿಗೆಯನ್ನು ಹಾಕಲಾಗಿದೆ. ಆದರೆ ಸಮಸ್ಯೆ ಕುರಿತು ಹಾಕಿರುವ ಸಲಹೆಗಳ ಬಗ್ಗೆ ಗಂಭೀರವಾಗಿ ಪರಿಗಣಿಸುತ್ತಿಲ್ಲ. ವಿದ್ಯಾರ್ಥಿನಿನಿಲಯಕ್ಕೆ ತಕ್ಷಣ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಬೇಕು ಎಂದು ಒತ್ತಾಯಿಸಿದರು. ಕಾರ್ಯನಿರ್ವಹಣಾಧಿಕಾರಿಗಳಿಂದ ತರಾಟೆ:

 ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಸಿದ್ದಲಿಂಗಯ್ಯ, ಹಾಸ್ಟೆಲ್ ಅವ್ಯವಸ್ಥೆ ನೋಡಿ ವಾರ್ಡನ್ ಹಾಗೂ ಅಡುಗೆಯವರನ್ನು ತರಾಟೆಗೆ ತೆಗೆದುಕೊಂಡರು. ವಿದ್ಯಾರ್ಥಿಗಳಿಗೆ ಅಗತ್ಯವಾದ ಸೌಲಭ್ಯವನ್ನು ಕಲ್ಪಿಸಲು ಯಾವುದೇ ತೊಂದರೆ ಉಂಟು ಮಾಡಬಾರದು. ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿಗಳು ಹಾಕಿರುವ ಸಲಹೆಗಳನ್ನು ಮೇಲಾಧಿಕಾರಿಗಳಿಗೆ ತಲುಪಿಸಬೇಕು. ಮುಂದಿನ ಒಂದು ವಾರದಲ್ಲಿ ವಿದ್ಯಾರ್ಥಿನಿಯರಿಗೆ ಆಗುತ್ತಿರುವ ತೊಂದರೆಯನ್ನು ನಿವಾರಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಭರವಸೆ ನೀಡಿದರು. ಈ ಸಂದರ್ಭದಲ್ಲಿ ದಲಿತ ಸಂಘರ್ಷ ಸಮಿತಿ ತಾಲೂಕು ಸಂಚಾಲಕ ನಾಗರಾಜ್, ಡಿ.ಎಸ್.ಎಸ್.ಮುಖಂಡ ರೇವಪ್ಪ ಹೊಸಕೊಪ್ಪಮತ್ತಿತರರು ಹಾಜರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News