ದ.ಕ., ಉಡುಪಿ ಜಿಲ್ಲೆಯ ಜನಪ್ರತಿನಿಧಿಗಳಿಂದ ಮುಖ್ಯಮಂತ್ರಿಗಳ ಭೇಟಿ: ಸಮಸ್ಯೆಗಳ ಪರಿಹಾರಕ್ಕೆ ಮನವಿ
ಬೆಂಗಳೂರು, ಆ.27: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಶಾಸಕರು, ವಿವಿಧ ಸಂಘಟನೆಗಳ ಮುಖಂಡರು ಕೇಂದ್ರದ ಮಾಜಿ ಸಚಿವ ಆಸ್ಕರ್ ಫೆರ್ನಾಂಡಿಸ್‌ರ ನೇತೃತ್ವದಲ್ಲಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ವಿವಿಧ ಬೇಡಿಕೆಗಳ ಕುರಿತು ಸಮಾಲೋಚನೆ ನಡೆಸಿದರು.
ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ನಿಯೋಗ, ಕಂದಾಯ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತರಾಜ್, ಮೀನುಗಾರಿಕೆ, ಆಹಾರ ಇಲಾಖೆಗೆ ಸಂಬಂಧಿಸಿದ ಬೇಡಿಕೆಗಳ ಕುರಿತು ಚರ್ಚೆ ನಡೆಸಿತು. ಭೂ ಪರಿವರ್ತಿತ ಜಮೀನು, ಸ್ಥಿರಾಸ್ತಿಗಳ ವಹಿವಾಟಿಗೆ ನಮೂನೆ 9 ಮತ್ತು 11ಎ ಅನ್ನು ಇ-ಸ್ವತ್ತು ಮೂಲಕ ವಿತರಿಸುವ ಸಂದರ್ಭದಲ್ಲಿ ಸಮಸ್ಯೆಗಳಾಗುತ್ತಿವೆ. ಅದನ್ನು ಸರಿಪಡಿಸಬೇಕು ಎಂದು ನಿಯೋಗ ಮನವಿ ಮಾಡಿತು.
ಕರಾವಳಿ ಜಿಲ್ಲೆಗೆ ಪ್ರತ್ಯೇಕ ಮರಳು ನೀತಿ ಜಾರಿಗೆ ತರಬೇಕು ಎಂದು ಕೋರಿತು. ನಾಡದೋಣಿ ಮೂಲಕ ಮೀನುಗಾರಿಕೆ ನಡೆಸುವವರಿಗೂ ಕೆಲವೊಂದು ಸಮಸ್ಯೆಗಳು ಎದುರಾಗಿವೆ. ಅದನ್ನೂ ಸರಿಪಡಿಸಬೇಕು. ಜೊತೆಗೆ ಮೀನುಗಾರರಿಗೆ ವಿತರಿಸುವ ಸೀಮೆಎಣ್ಣೆಯಲ್ಲಿ ಕಡಿತ ಮಾಡಲಾಗಿದೆ. ಬಜೆಟನಲ್ಲಿ ಘೋಷಿಸಿದ ಪ್ರಮಾಣದಲ್ಲಿ ಸೀಮೆಎಣ್ಣೆ ವಿತರಿಸುತ್ತಿಲ್ಲ. ಈ ಸಂಬಂಧ ಆಹಾರ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಬೇಕು ಎಂದು ಮುಖಂಡರು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದರು.
ಉಡುಪಿ ನ್ಯಾಯಾಲಯ ಸಂಕೀರ್ಣದ 3ನೆ ಮಹಡಿ ನಿರ್ಮಾಣಕ್ಕೆ ಹೆಚ್ಚುವರಿ ಅನುದಾನ ಬಿಡುಗಡೆ ಮಾಡುವ ಬಗ್ಗೆ ಮತ್ತು ಚಿಲ್ಲರೆ ಮದ್ಯ ಮಾರಾಟಗಾರರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ನಿಯೋಗ ಮುಖ್ಯಮಂತ್ರಿಗಳ ಗಮನ ಸೆಳೆಯಿತು. ಎಲ್ಲ ಬೇಡಿಕೆಗಳನ್ನು ಆಲಿಸಿದ ಮುಖ್ಯಮಂತ್ರಿಯವರು, ಈ ಕುರಿತು ಶೀಘ್ರವೇ ಪ್ರತ್ಯೇಕ ಸಭೆ ಕರೆದು ಎಲ್ಲ ಸಮಸ್ಯೆಗಳಿಗೆ ಪರಿಹಾರ ಒದಗಿಸುವುದಾಗಿ ತಿಳಿಸಿದರು.
ಸಚಿವರಾದ ರಮಾನಾಥ ರೈ, ಪ್ರಮೋದ್ ಮಧ್ವರಾಜ್, ಟಿ.ಬಿ. ಜಯಚಂದ್ರ, ಮಾಜಿ ಸಚಿವ ಅಭಯ ಚಂದ್ರ ಜೈನ್, ಶಾಸಕರಾದ ಜೆ.ಆರ್. ಲೋಬೊ, ಗೋಪಾಲ ಪೂಜಾರಿ, ವಿಧಾನಪರಿಷತ್ ಸದಸ್ಯ ಪ್ರತಾಪಚಂದ್ರ ಶೆಟ್ಟಿ, ಮಾಜಿ ಶಾಸಕ ಲಾಲಾಜಿ ಆರ್. ಮೆಂಡನ್ ಮತ್ತಿತರರು ಹಾಜರಿದ್ದರು.