ರಾಜ್ಯವ್ಯಾಪಿ ಬಿಜೆಪಿ ಸಂಘಟನಾ ಸಮಾವೇಶ: ಯಡಿಯೂರಪ್ಪ

Update: 2016-08-30 18:20 GMT

ಬೆಂಗಳೂರು, ಆ.30: ರಾಜ್ಯವ್ಯಾಪಿ ಬಿಜೆಪಿಯ ವಿವಿಧ ಮೋರ್ಚಾಗಳ ಸಂಘಟನಾ ಸಮಾವೇಶಗಳನ್ನು ಆಯೋಜಿಸಲು ತೀರ್ಮಾನಿಸಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ಮಂಗಳವಾರ ನಗರದ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕೇಂದ್ರ ಕಚೇರಿಯಲ್ಲಿ ವಿವಿಧ ಮೋರ್ಚಾಗಳ ರಾಜ್ಯ ಪದಾಧಿಕಾರಿಗಳ ಸಭೆಯ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು.
ಇವತ್ತು 8 ಮೋರ್ಚಾಗಳ ಪದಾಧಿಕಾರಿಗಳ ಸಭೆ ನಡೆಸ ಲಾಗಿದೆ. ಸೆ.15ರೊಳಗೆ ರಾಜ್ಯ ಕಾರ್ಯಕಾರಿಣಿ ಮಾಡುವಂತೆ ಮೋರ್ಚಾಗಳಿಗೆ ಸೂಚನೆ ನೀಡಲಾಗಿದೆ. ಅ.23ರಂದು ರಾಯಚೂರಿನ ಲಿಂಗಸೂರಿನಲ್ಲಿ ಎಸ್ಟಿ ಸಮಾವೇಶ ಹಾಗೂ ನ.30ರಂದು ಬೆಂಗಳೂರಿನಲ್ಲಿ ಹಿಂದುಳಿದ ವರ್ಗಗಳ ಸಮಾ ವೇಶ ನಡೆಸಲು ತೀರ್ಮಾನಿಸಲಾಗಿದೆ ಎಂದು ಹೇಳಿದರು.
ಕೇಂದ್ರ ಸರಕಾರ ರೈತರಿಗೆ ಶೇ.3ರ ಬಡ್ಡಿದರದಲ್ಲಿ ಸಾಲ ನೀಡಲು 430 ಕೋಟಿ ರೂ.ಬಿಡುಗಡೆ ಮಾಡಿದೆ. ಆದರೆ, ರಾಜ್ಯ ಸರಕಾರ ಈ ಹಣವನ್ನು ರೈತರಿಗೆ ನೀಡದೆ ಉಳಿಸಿಕೊಂಡಿದೆ. ಹಾಲಿನ ಸಬ್ಸಿಡಿ ಹಣ 285 ಕೋಟಿ ರೂ.ಬಾಕಿ ಉಳಿಸಿಕೊಂಡಿದೆ ಎಂದು ಅವರು ಆರೋಪಿಸಿದರು.
ಕೇಂದ್ರ ಸರಕಾರ ಬಿಡುಗಡೆ ಮಾಡಿದ್ದ ಬೆಳೆ ವಿಮೆ ಹಣ 480 ಕೋಟಿ ರೂ.ಗಳನ್ನು ರಾಜ್ಯ ಸರಕಾರ ರೈತರಿಗೆ ವಿತರಣೆ ಮಾಡಿಲ್ಲ. ಈ ಹಣವನ್ನು ತಕ್ಷಣ ವಿತರಣೆ ಮಾಡಲು ಕ್ರಮ ಕೈಗೊಳ್ಳದಿದ್ದರೆ ರಾಜ್ಯ ಸರಕಾರದ ವಿರುದ್ಧ ದೊಡ್ಡ ಪ್ರಮಾಣದ ಹೋರಾಟವನ್ನು ರೂಪಿಸಬೇಕಾಗುತ್ತದೆ ಎಂದು ಯಡಿಯೂರಪ್ಪ ಎಚ್ಚರಿಕೆ ನೀಡಿದರು.
ಕೇಂದ್ರ ಸರಕಾರ ವಿವಿಧ ಯೋಜನೆಗಳಡಿಯಲ್ಲಿ ಬಿಡುಗಡೆ ಮಾಡಿದ್ದ 22 ಸಾವಿರ ಕೋಟಿ ರೂ.ಹಣವನ್ನು ಅಧಿಕಾರಿಗಳು ಬ್ಯಾಂಕ್‌ಖಾತೆಯಲ್ಲಿ ಉಳಿಸಿಕೊಂಡಿದ್ದಾರೆ. ಇದರ ಬಗ್ಗೆಯೂ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಹಿತಿ ನೀಡಬೇಕು ಎಂದು ಅವರು ಆಗ್ರಹಿಸಿದರು.
ಸಂಸದೆ ಶೋಭಾ ಕರಂದ್ಲಾಜೆ, ಸಚಿವ ರಮೇಶ್ ಜಿಗಜಿಣಗಿ ಸೇರಿಂದಂತೆ ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.

ವಿಧಾನಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಸೆ.1ರಂದು ನಡೆಸಲು ಉದ್ದೇಶಿಸಿರುವ ಸಮಾವೇಶದ ಬಗ್ಗೆ ತನಗೆ ಯಾವುದೇ ಮಾಹಿತಿಯಿಲ್ಲ. ಪಕ್ಷ ಆಯೋಜಿಸುವ ಸಮಾವೇಶಗಳನ್ನು ಹೊರತುಪಡಿಸಿ ಬೇರೆ ಯಾವುದೇ ಸಮಾವೇಶಗಳಲ್ಲಿ ತಾನು ಪಾಲ್ಗೊಳ್ಳುವುದಿಲ್ಲ.
 ಬಿ.ಎಸ್.ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News