×
Ad

ವಿಕಲಚೇತನರಲ್ಲಿ ಆತ್ಮಸ್ಥೈರ್ಯ ವೃದ್ಧಿಸುವ ಕೆಲಸವಾಗಲಿ: ಮಲ್ಲಿಕಾರ್ಜುನ ಹಕ್ರೆ

Update: 2016-09-03 21:40 IST

ಸಾಗರ, ಸೆ.3: ವಿಕಲಚೇತನರಿಗೆ ಅನುಕಂಪ ತೋರಿಸುವುದಕ್ಕಿಂತ ಅವರಲ್ಲಿ ಆತ್ಮಸ್ಥೈರ್ಯ ವೃದ್ಧ್ದಿಸುವ ಕೆಲಸವನ್ನು ಸರಕಾರ ಹಾಗೂ ಸಮಾಜ ಮಾಡಬೇಕು ಎಂದು ತಾಲೂಕು ಪಂಚಾಯತ್ ಅಧ್ಯಕ್ಷ ಮಲ್ಲಿಕಾರ್ಜುನ ಹಕ್ರೆ ಹೇಳಿದರು.

ಇಲ್ಲಿನ ವಿನೋಬಾ ಶಾಲಾವರಣದಲ್ಲಿ ಶನಿವಾರ ಸಾರ್ವಜನಿಕ ಶಿಕ್ಷಣ ಇಲಾಖೆ, ಸರ್ವಶಿಕ್ಷಣ ಅಭಿಯಾನ, ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ ಅಭಿಯಾನ ಹಾಗೂ ಅಂಗವಿಕಲ ಕಲ್ಯಾಣ ಇಲಾಖೆ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಶೇಷ ಚೇತನವುಳ್ಳ ಮಕ್ಕಳ ವೈದ್ಯಕೀಯ ಮೌಲ್ಯಾಂಕನ ಮತ್ತು ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ತಾಲೂಕಿನಲ್ಲಿ ಇಲಾಖೆ 306 ವಿಕಲಚೇತನ ಮಕ್ಕಳನ್ನು ಗುರುತಿಸಿ, ಅವರಿಗೆ ಸೂಕ್ತ ತಪಾಸಣೆ ಹಾಗೂ ಚಿಕಿತ್ಸೆಯನ್ನು ನೀಡುತ್ತಿದೆ. ಪೋಷಕರು ಅಂತಹ ಮಕ್ಕಳನ್ನು ಅತ್ಯಂತ ಸೂಕ್ಷ್ಮವಾಗಿ ನೋಡಿಕೊಳ್ಳಬೇಕು. ಮಕ್ಕಳು ಹೇಗೆ ಇದ್ದರೂ ಅವರು ಕುಟುಂಬಕ್ಕೆ ಹಾಗೂ ಸಮಾಜಕ್ಕೆ ಹೊರೆಯಾಗುವುದಿಲ್ಲ. ವಿಶೇಷ ಅಗತ್ಯವುಳ್ಳ ಮಕ್ಕಳಿಗೆ ಅಗತ್ಯವಿರುವ ಕನ್ನಡಕ, ಶ್ರವಣೋಪಕರಣ, ವೀಲ್‌ಚೇರ್, ಟ್ರೈಸಿಕಲ್, ಎಂ.ಆರ್.ಕಿಟ್ ಸೇರಿದಂತೆ ಅನೇಕ ಸವಲತ್ತುಗಳನ್ನು ಸರ್ವಶಿಕ್ಷಣ ಅಭಿಯಾನದಡಿನೀಡುತ್ತಿದ್ದು, ಮಕ್ಕಳು ಅದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ನಗರಸಭೆ ಅಧ್ಯಕ್ಷ ಆರ್.ಗಣಾಧೀಶ್ ಮಾತನಾಡಿ, ಶಿಬಿರದಲ್ಲಿ 300ಕ್ಕೂ ಹೆಚ್ಚು ಮಕ್ಕಳು ಪಾಲ್ಗೊಳ್ಳುತ್ತಿದ್ದಾರೆ. ಅವರನ್ನು ಸಂಪರ್ಕಿಸಿ, ಕರೆತರುವುದು ಕಷ್ಟದ ಕೆಲಸವಾಗಿದೆ. ವಿಶೇಷ ಚೇತನ ಮಕ್ಕಳಿಗೆ ಸೂಕ್ತ ಚಿಕಿತ್ಸೆ ನೀಡಿ, ಅವರು ಸಮಾಜದ ಮುಖ್ಯವಾಹಿನಿಯಲ್ಲಿ ತೊಡಗಿಸಿಕೊಳ್ಳುವಂತೆ ಮಾಡುವ ಹೊಣೆಗಾರಿಕೆ ಎಲ್ಲರ ಮೇಲೆ ಇದೆ ಎಂದರು. ಸರ್ವಶಿಕ್ಷಣ ಅಭಿಯಾನದ ಜಿಲ್ಲಾ ಯೋಜನಾ ಸಮನ್ವಯಾಧಿಕಾರಿ ಗಣಪತಿ, ಕ್ಷೇತ್ರ ಶಿಕ್ಷಣಾಧಿಕಾರಿ ಪಿ.ಲಿಂಗಪ್ಪ, ಸಮನ್ವಯಾಧಿಕಾರಿ ಎನ್.ಎಚ್.ಯೋಗೀಶ್, ಸರಕಾರಿ ನೌಕರರ ಸಂಘದ ಅಧ್ಯಕ್ಷ ಡಿ.ಗಣಪತಪ್ಪ, ಶಿಕ್ಷಕರ ಸಂಘದ ಅಧ್ಯಕ್ಷೆ ಜ್ಯೋತಿ ರೀನಾ ಅಂದ್ರಾದೆ ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News