ಬಂದ್ ಶಾಂತಿಯುತವಾಗಿರಲಿ: ಸಿದ್ದರಾಮಯ್ಯ
ಬೆಂಗಳೂರು, ಸೆ.8: ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡುವಂತೆ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪು ವಿರೋಧಿಸಿ ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಶುಕ್ರವಾರದ ರಾಜ್ಯ ಬಂದ್‌ನ್ನು ಎದುರಿಸಲು ರಾಜ್ಯ ಸರಕಾರ ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಂಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಗೃಹಕಚೇರಿ ಕೃಷ್ಣಾದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿಭಟನೆ ನಡೆಸುವ ಹಕ್ಕು ಎಲ್ಲರಿಗೂ ಇದೆ. ಪ್ರತಿಭಟನೆ ಮಾಡಬೇಡಿ ಎಂದು ನಾವು ಹೇಳುವುದಿಲ್ಲ. ಆದರೆ ಅದು ಶಾಂತಿಯುತವಾಗಿರಲಿ ಎಂದು ಮನವಿ ಮಾಡಿದರು.
ನಾಳಿನ ಬಂದ್‌ಗೆ ಸಂಬಂಧಿಸಿದ ಪರಿಸ್ಥಿತಿಯನ್ನು ಎದುರಿಸಲು ಸರಕಾರ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ಪ್ರತಿಭಟನಕಾರರು ಸಾರ್ವಜನಿಕ ಆಸ್ತಿಪಾಸ್ತಿಗೆ ನಷ್ಟ ಉಂಟು ಮಾಡಬಾರದು ಎಂದು ಸೂಚಿಸಿದ ಅವರು, ಕಾವೇರಿ ವಿಚಾರದಲ್ಲಿ ರಾಜ್ಯ ಸರ್ಕಾರವು ಸಾಕಷ್ಟು ಪ್ರಯತ್ನಗಳನ್ನು ಮಾಡುತ್ತಿದೆ. ಸದ್ಯ ಅನಿವಾರ್ಯವಾಗಿ ನೀರನ್ನು ತಮಿಳುನಾಡಿಗೆ ಬಿಡುತ್ತಿದ್ದೇವೆ. ಆದರೆ ರಾಜ್ಯದ ಜನರ ಹಿತ ಕಾಯಲು ನಮ್ಮ ಸರಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪುನರುಚ್ಚರಿಸಿದರು.