ಉಡುಪಿ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟಕ್ಕೆ ಚಾಲನೆ
ಉಡುಪಿ, ಸೆ.10: ಉಡುಪಿ ಜಿಲ್ಲಾಡಳಿತ, ಜಿಪಂ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಶನಿವಾರ ಅಜ್ಜರಕಾಡು ಮಹಾತ್ಮಾಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾದ ಉಡುಪಿ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟಕ್ಕೆ ರಾಜ್ಯ ಮೀನುಗಾರಿಕೆ, ಯುವಜನ ಸಬಲೀಕರಣ ಮತ್ತು ಕ್ರೀಡೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಚಾಲನೆ ನೀಡಿದರು.
ಈ ಬಾರಿಯ ರಾಜ್ಯದ ಕ್ರೀಡಾರತ್ನ ಮತ್ತು ಏಕಲವ್ಯ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಬೆಂಗಳೂರು ವಿಧಾನಸೌಧದ ಬದಲು ಇದೇ ಮೊದಲ ಬಾರಿಗೆ ಮೈಸೂರಿನಲ್ಲಿ ಆಯೋಜಿಸಲಾಗಿದೆ. ದಸರಾ ಸಂದರ್ಭದಲ್ಲಿ ಅ.5 ರಂದು ಮುಖ್ಯಮಂತ್ರಿಗಳು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಮೈಸೂರಿನಲ್ಲಿ ನಡೆಯುವ ರಾಜ್ಯಮಟ್ಟದ ದಸರಾ ಕ್ರೀಡಾಕೂಟದಲ್ಲಿ ಜಿಲ್ಲೆಯ ಕ್ರೀಡಾಪಟುಗಳು ಮತ್ತು ತಂಡಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಸಚಿವ ಪ್ರಮೋದ್ ತಿಳಿಸಿದರು.
ಮುಖ್ಯ ಅತಿಥಿಯಾಗಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು ಮಾತನಾಡಿ, ಈ ಬಾರಿಯ ದಸರಾ ಕ್ರೀಡಾಕೂಟದ ವಿಭಾಗಮಟ್ಟದ ಕ್ರೀಡೆಗಳು ಉಡುಪಿ ಜಿಲ್ಲೆಯಲ್ಲಿಯೇ ನಡೆಯಲಿದ್ದು, ಜಿಲ್ಲೆಯ ಕ್ರೀಡಾಪಟುಗಳು ಉತ್ತಮ ಸಾಧನೆ ತೋರಬೇಕು. ರಾಜ್ಯಮಟ್ಟದ ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ ನೀಡುವ ದಿನಭತ್ಯೆಯನ್ನು 150 ರೂ.ಗೆ ಹೆಚ್ಚಿಸಬೇಕು ಎಂದು ಹೇಳಿದರು.
ನಗರಸಭೆ ಅಧ್ಯಕ್ಷೆ ಮೀನಾಕ್ಷಿ ಮಾಧವ ಬನ್ನಂಜೆ, ಅಜ್ಜರಕಾಡು ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಭಾರ ಪ್ರಾಂಶುಪಾಲ ಜಿ.ಆರ್.ರಾಯ್ಕರ್ ಉಪಸ್ಥಿತರಿದ್ದರು.
ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ.ರೋಶನ್ ಕುಮಾರ್ ಶೆಟ್ಟಿ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.