ಗಣಪತಿ ಮೆರವಣಿಗೆಯ ವೇಳೆ ಘರ್ಷಣೆ
ಶಿವಮೊಗ್ಗ, ಸೆ. 10: ನಗರದ ಹೊರವಲಯ ಹರಕೆರೆ ಹಾಗೂ ತುಂಗಾ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶುಕ್ರವಾರ ರಾತ್ರಿ ಗಣಪತಿ ವಿಸರ್ಜನಾ ಪೂರ್ವ ಮೆರವಣಿಗೆಯ ವೇಳೆ ಕಲ್ಲು ತೂರಾಟ ಹಾಗೂ ಘರ್ಷಣೆ ನಡೆದು ಎರಡು ಪ್ರಕರಣಗಳನ್ನು ದಾಖಲಿಸಿ ಕೊಂಡು ಏಳು ಮಂದಿಯನ್ನು ಬಂಧಿಸಿರುವ ಘಟನೆ ವರದಿಯಾಗಿದೆ.
ಘಟನೆ ಸಂಬಂಧ ನಗರದ ಮುಕ್ತಿಯಾರ್, ರಫೀಕ್ ಸೇರಿದಂತೆ ಏಳು ಜನರನ್ನು ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ. ಘಟನೆ ಹಿನ್ನೆಲೆ: ನಂದಿ ಬಸವೇಶ್ವರ ಯುವಕರ ಸಂಘದವತಿಯಿಂದ ಪ್ರತಿಷ್ಠಾಪನೆ ಮಾಡಲಾಗಿದ್ದ ಗಣಪತಿಯ ವಿಸರ್ಜನಾ ಪೂರ್ವ ಮೆರವಣಿಗೆಯ ಶುಕ್ರವಾರ ರಾತ್ರಿ ಹರಕೆರೆ ಗ್ರಾಮದ ಮುಖ್ಯ ರಸ್ತೆಯಲ್ಲಿ ನಡೆಯುತ್ತಿತ್ತು. 3ನೆ ತಿರುವಿನ ಸೇವಾಲಾಲ್ ಸರ್ಕಲ್ ಬಳಿ ಮೆರವಣಿಗೆ ಸಾಗುತ್ತಿದ್ದ ವೇಳೆ ಕಟ್ಟಡದ ಮೇಲಿಂದ ಒಂದಿಬ್ಬರು ಯುವಕರು ಕಲ್ಲು ತೂರಾಟ ನಡೆಸಿದ್ದಾರೆ ಎನ್ನಲಾಗಿದೆ. ಈ ಸಂದರ್ಭದಲ್ಲಿ ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿ ಸ್ಥಳೀಯ ಎರಡು ಗುಂಪುಗಳ ನಡುವೆ ಘರ್ಷಣೆ ಏರ್ಪಟ್ಟಿದೆ. ಮಾರಕಾಸ್ತ್ರ, ದೊಣ್ಣೆಗಳಿಂದ ಹೊಡೆದಾಟ ನಡೆದಿದೆ. ಹಲವರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಮತ್ತೊಂದೆಡೆ ಕಲ್ಲು ತೂರಾಟ - ಘರ್ಷಣೆಗೆ ಸಂಬಂಧಿಸಿದಂತೆ ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ದೂರುಗಳು ದಾಖಲಾಗಿವೆ. ಚೇತನ್‌ಕುಮಾರ್ ಎಂಬವರು ನೀಡಿದ ದೂರಿನಂತೆ ಪೊಲೀಸರು ಮುಕ್ತಿಯಾರ್, ರಫೀಕ್ ಸೇರಿದಂತೆ ಏಳು ಜನರನ್ನು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ. ಮತ್ತೊಂದೆಡೆ ರಫೀಕ್ ಎಂಬವರು ಪೊಲೀಸರಿಗೆ ದೂರು ನೀಡಿದ್ದು, ಗಣಪತಿ ವಿಸರ್ಜನೆಯ ಮೆರವಣಿಗೆಯಲ್ಲಿದ್ದ ಸುಮಾರು 8 ರಿಂದ 10 ಮಂದಿ ತನಗೆ ಹಲ್ಲೆ ನಡೆಸಿ ಗಾಯಗೊಳಿಸಿದ್ದಾರೆ. ಆರೋಪಿಗಳ ವಿರುದ್ದ ಸೂಕ್ತ ಕಾನೂನು ಕ್ರಮ ಜರಗಿಸುವಂತೆ ದೂರಿನಲ್ಲಿ ತಿಳಿಸಿದ್ದಾರೆ. ಕಲ್ಲು ತೂರಾಟ ಹಾಗೂ ಘರ್ಷಣೆಗೆ ಸಂಬಂಧಿಸಿದಂತೆ ಎರಡೂ ಕಡೆಯ ಸುಮಾರು 10 ಕ್ಕೂ ಅಧಿಕ ಆರೋಪಿಗಳು ತಲೆಮರೆಸಿಕೊಂಡಿದ್ದು, ಇವರ ಬಂಧನಕ್ಕೆ ಪೊಲೀಸರು ಕಾರ್ಯಾಚರಣೆ ಮುಂದುವರಿಸಿದ್ದಾರೆ.
ಪರಿಸ್ಥಿತಿ ನಿಯಂತ್ರಣಕ್ಕೆ
ವಿಷಯ ತಿಳಿಯುತ್ತಿದ್ದಂತೆ ಹೆಚ್ಚಿನ ಸಂಖ್ಯೆಯ ಪೊಲೀಸರು ಸ್ಥಳಕ್ಕಾಗಮಿಸಿ ಪರಿಸ್ಥಿತಿ ತಿಳಿಗೊಳಿಸುವ ಕೆಲಸ ಮಾಡಿದ್ದಾರೆ. ತದನಂತರ ಮೆರವಣಿಗೆಯು ಶಾಂತಿಯುತವಾಗಿ ಮುಂದುವರಿದಿದೆ.
ಸೂಕ್ತ ಕ್ರಮಕ್ಕೆ ಸಚಿವ ಕಾಗೋಡು ಸೂಚನೆ
ಶಿವಮೊಗ್ಗ ನಗರದ ಹೊರವಲಯ ಹರಕೆರೆಯಲ್ಲಿ ಶುಕ್ರವಾರ ರಾತ್ರಿ ಗಣೇಶ ಮೂರ್ತಿ ವಿಸರ್ಜನಾ ಪೂರ್ವ ಮೆರವಣಿಗೆಯ ವೇಳೆ ನಡೆದ ಅಹಿತಕರ ಘಟನೆಗೆ ಸಂಬಂಧಿಸಿದಂತೆ ಜಿಲ್ಲಾ ಉಸ್ತುವಾರಿ ಸಚಿವ ಕಾಗೋಡು ತಿಮ್ಮಪ್ಪ ಅವರು ಶನಿವಾರ ಹಾಡೋನಹಳ್ಳಿ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಧಾರ್ಮಿಕ ಹಬ್ಬ ಹರಿದಿನಗಳಂದು ಜನತೆ ಶಾಂತಿಗೆ ಒತ್ತು ನೀಡಬೇಕು. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಜಿಲ್ಲಾ ರಕ್ಷಾಣಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ.
ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಎಸ್ಪಿ ಎಚ್ಚರಿಕೆ:
ಸಮಾಜದ ಶಾಂತಿ-ಸುವ್ಯವಸ್ಥೆ ಹಾಗೂ ನಾಗರಿಕರ ನೆಮ್ಮದಿಗೆ ಧಕ್ಕೆ ತರುವ ಕಿಡಿಗೇಡಿಗಳ ವಿರುದ್ಧ ನಿರ್ದಾಕ್ಷಿಣ್ಯ ಕಾನೂನು ಕ್ರಮ ಜರಗಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಭಿನವ್ ಖರೆ ಎಚ್ಚರಿಕೆ ನೀಡಿದ್ದಾರೆ. ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾನೂನು ಕೈಗೆತ್ತಿಕೊಳ್ಳುವವರು ಯಾರೇ ಆಗಿರಲಿ ಅವರ ವಿರುದ್ಧ ಕಠಿಣ ಕ್ರಮಕೈಗೊಳ್ಳಲಾಗುವುದು. ಶಾಂತಿ-ಸುವ್ಯವಸ್ಥೆಗೆ ಧಕ್ಕೆ ಉಂಟು ಮಾಡಲು ಯತ್ನಿಸುವ ಕಿಡಿಗೇಡಿಗಳ ಬಗ್ಗೆ ನಾಗರಿಕರು ಪೊಲೀಸರಿಗೆ ಮಾಹಿತಿ ನೀಡುವ ಕೆಲಸ ಮಾಡಬೇಕು ಎಂದು ಮನವಿ ಮಾಡಿದ್ದಾರೆ.
ಶಾಂತ ಪರಿಸ್ಥಿತಿ: ನಗರದ ಹೊರವಲಯ ಹರಕೆರೆ ಗ್ರಾಮದಲ್ಲಿ ಶುಕ್ರವಾರ ರಾತ್ರಿ ಗಣಪತಿ ಮೆರವಣಿಗೆಯ ವೇಳೆ ನಡೆದ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಹಲವರನ್ನು ಬಂಧಿಸಲಾಗಿದೆ. ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ಕೂಡ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಮಾಹಿತಿ ನೀಡಿದ್ದಾರೆ. ಘಟನೆಯ ನಂತರ ಹರಕೆರೆ ಗ್ರಾಮದಲ್ಲಿ ಬಿಗಿ ಪೊಲೀಸ್ ಪಹರೆಯ ವ್ಯವಸ್ಥೆ ಮಾಡಲಾಗಿದೆ. ವ್ಯಾಪಕ ಕಟ್ಟೆಚ್ಚರವಹಿಸಲಾಗಿದೆ. ಪ್ರಸ್ತುತ ಪರಿಸ್ಥಿತಿ ಶಾಂತವಾಗಿದ್ದು, ಜನಜೀವನ ಎಂದಿನಂತೆಯೇ ಇದೆ ಎಂದು ಹೇಳಿದ್ದಾರೆ. ಮುನ್ನೆಚ್ಚರಿಕೆ ಕ್ರಮವಾಗಿ ಎಲ್ಲ ಗಣಪತಿ ಮೆರವಣಿಗೆಗಳಿಗೆ ಬಿಗಿ ಪೊಲೀಸ್ ಪಹರೆಯ ವ್ಯವಸ್ಥೆ ಮಾಡಲಾಗುವುದು. ಪ್ರಮುಖ ಗಣಪತಿಗಳ ವಿಸರ್ಜನಾ ಪೂರ್ವ ಮೆರವಣಿಗೆಗಳಿಗೆ ವ್ಯಾಪಕ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದರು.