×
Ad

ಸರಕಾರದ ತಪ್ಪು ನಿರ್ಧಾರಗಳಿಂದ ಕಾವೇರಿ ಸಮಸ್ಯೆ: ಯಡಿಯೂರಪ್ಪ

Update: 2016-09-10 22:57 IST

ಬೆಂಗಳೂರು, ಸೆ.10: ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡುಗಡೆ ಮಾಡುವುದಾಗಿ ರಾಜ್ಯ ಸರಕಾರ ಸುಪ್ರೀಂಕೋರ್ಟ್‌ನಲ್ಲಿ ಸ್ವಯಂಪ್ರೇರಿತವಾಗಿ ಪ್ರಮಾಣ ಪತ್ರ ಸಲ್ಲಿಸಿದ ಪರಿಣಾಮವಾಗಿಯೆ ಈ ಸಮಸ್ಯೆ ಉಲ್ಬಣಗೊಂಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಆರೋಪಿಸಿದ್ದಾರೆ.
ಶನಿವಾರ ನಗರದ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಹಿಂದುಳಿದ ವರ್ಗಗಳ ಮೋರ್ಚಾದ ಕಾರ್ಯಕಾರಿಣಿ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ತಮಿಳುನಾಡಿಗೆ ನೀರು ಬಿಡುಗಡೆ ಮಾಡುವ ಸಂಬಂಧ ಆದೇಶ ನೀಡುವುದಕ್ಕಿಂತ ಮುಂಚಿತವಾಗಿ ಸುಪ್ರೀಂಕೋರ್ಟ್ ತಜ್ಞರ ಸಮಿತಿಯನ್ನು ರಾಜ್ಯಕ್ಕೆ ಕಳುಹಿಸಲು ಸಿದ್ಧವಾಗಿತ್ತು. ಆದರೆ, ರಾಜ್ಯ ಸರಕಾರ ಸ್ವಯಂಪ್ರೇರಿತವಾಗಿ ಆರು ದಿನಗಳ ಕಾಲ 10 ಸಾವಿರ ಕ್ಯೂಸೆಕ್ ನೀರನ್ನು ಬಿಡುಗಡೆ ಮಾಡುವುದಾಗಿ ಪ್ರಮಾಣ ಪತ್ರ ಸಲ್ಲಿಸುವ ಮೂಲಕ ತಪ್ಪು ಮಾಡಿದೆ ಎಂದು ಅವರು ಕಿಡಿಗಾರಿದರು.
ರಾಜ್ಯ ಸರಕಾರದ ಈ ನಿಲುವಿನಿಂದಾಗಿ ಸುಪ್ರೀಂಕೋರ್ಟ್ 15 ಸಾವಿರ ಕ್ಯೂಸೆಕ್ಸ್ ನೀರನ್ನು 10 ದಿನಗಳ ಕಾಲ ಬಿಡುಗಡೆ ಮಾಡುವಂತೆ ಆದೇಶ ನೀಡಿದೆ. ರಾಜ್ಯ ಸರಕಾರದ ಮೂರ್ಖತನದಿಂದಾಗಿ ಕಾವೇರಿ ಕಣಿವೆಯ ರೈತರು ತಮ್ಮ ಬೆಳೆಗಳಿಗೆ ನೀರು ಸಿಗದೆ ಸಂಕಷ್ಟಕ್ಕೆ ಸಿಲುಕುವಂತಾಗಿದೆ ಎಂದು ಯಡಿಯೂರಪ್ಪ ಆಕ್ರೋಶ ವ್ಯಕ್ತಪಡಿಸಿದರು.
 ಬೆಂಗಳೂರಿನಲ್ಲಿ ನ.27ರಂದು ಹಿಂದುಳಿದ ವರ್ಗಗಳ ಬೃಹತ್ ಸಮಾವೇಶವನ್ನು ಆಯೋಜಿಸಲಾಗಿದ್ದು, ಸುಮಾರು 3 ಲಕ್ಷ ಜನ ಸೇರುವ ನಿರೀಕ್ಷೆಯಿದೆ. ಸಮಾವೇಶದ ಯಶಸ್ಸಿಗೆ ಈಗಿನಿಂದಲೆ ಸಿದ್ಧತೆಗಳನ್ನು ಆರಂಭಿಸುವಂತೆ ಕಾರ್ಯಕರ್ತರಿಗೆ ಯಡಿಯೂರಪ್ಪ ಸೂಚನೆ ನೀಡಿದರು.

ಕಾರ್ಯಕಾರಿಣಿ ಸಭೆಯಲ್ಲಿ ಹಿಂದುಳಿದ ವರ್ಗಗಳ ಮೋರ್ಚಾದ ಅಧ್ಯಕ್ಷ ಬಿ.ಜೆ. ಪುಟ್ಟಸ್ವಾಮಿ, ಬಿಜೆಪಿ ರಾಜ್ಯಪ್ರಧಾನ ಕಾರ್ಯದರ್ಶಿ ಅರವಿಂದಲಿಂಬಾವಳಿ, ಮಾಜಿ ಸಚಿವ ಹರತಾಳು ಹಾಲಪ್ಪ, ಸಂಸದ ಪಿ.ಸಿ.ಮೋಹನ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News