ಖಾಲಿ ಖಾಲಿಯಾದ ಬೆಂಗಳೂರು ನಗರದ ರಸ್ತೆಗಳು
ಬೆಂಗಳೂರು, ಸೆ. 13: ಕಾವೇರಿ ನದಿ ನೀರಿನ ಹಂಚಿಕೆ ವಿವಾದದ ಹಿನ್ನೆಲೆಯಲ್ಲಿ ಉದ್ಯಾನನಗರಿ ಬೆಂಗಳೂರು ಅಕ್ಷರಶಃ ಖಾಲಿಯಾಗಿದೆ. ನಗರದಲ್ಲಿ ಎಲ್ಲ ಕಡೆಗಳಲ್ಲಿ ಅಘೋಷಿತ ಬಂದ್ ವಾತಾವರಣವಿದ್ದು, ಕೆಎಸ್ಸಾರ್ಟಿಸಿ, ಬಿಎಂಟಿಸಿ, ಆಟೋರಿಕ್ಷಾ, ಕ್ಯಾಬ್, ಟ್ಯಾಕ್ಸಿ ಸೇರಿ ಯಾವುದೇ ವಾಹನಗಳು ರಸ್ತೆಗಿಳಿಯದ ಹಿನ್ನೆಲೆಯಲ್ಲಿ ನಗರದ ಬಹುತೇಕ ರಸ್ತೆಗಳು ಖಾಲಿ ಖಾಲಿಯಾಗಿದ್ದವು.
ನಗರದ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದ್ದ 16 ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕರ್ಫ್ಯೂ ಹಾಗೂ ಕಲಂ 144ರ ಅನ್ವಯ ನಿಷೇಧಾಜ್ಞೆ ಜಾರಿಯಲ್ಲಿದ್ದು, ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದೆ. ಆ ಹಿನ್ನೆಲೆಯಲ್ಲಿ ನಗರದ ಎಲ್ಲ ಕಡೆಗಳಲ್ಲಿ ಕೇಂದ್ರ ಸಶಸ್ತ್ರ ಮೀಸಲು ಪಡೆ ಸೇರಿದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ.
ಕೇಂದ್ರೀಯ ಸಶಸ್ತ್ರ ಮೀಸಲು ಪೊಲೀಸ್ ಪಡೆ ಮತ್ತು ಕೈಗಾರಿಕಾ ಭದ್ರತಾ ದಳದ 20 ತುಕಡಿಗಳು ನಗರಕ್ಕೆ ಆಗಮಿಸಿವೆ. ಕ್ಷಿಪ್ರ ಕಾರ್ಯಾಚರಣಾ ಪಡೆ, ಕೆಎಸ್ಸಾರ್ಪಿ ಸೇರಿದಂತೆ 20 ಸಾವಿರಕ್ಕೂ ಹೆಚ್ಚು ಪೊಲೀಸರನ್ನು ಭದ್ರತೆಗಾಗಿ ನಗರದ ಸೂಕ್ಷ್ಮ ಪ್ರದೇಶಗಳಲ್ಲಿ ನಿಯೋಜಿಸಲಾಗಿದೆ.
ನಗರದಲ್ಲಿ ಬಿಎಂಟಿಸಿ ಬಸ್ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಕೋಲಾರ, ಮೈಸೂರು, ಮಂಡ್ಯ, ಚಾಮರಾಜನಗರ ಸೇರಿದಂತೆ ಬಹುತೇಕ ಪ್ರದೇಶಗಳಿಗೆ ಕೆಎಸ್ಸಾರ್ಟಿಸಿ ಬಸ್ ಸಂಚಾರವನ್ನೂ ಸ್ಥಗಿತಗೊಳಿಸಲಾಗಿತ್ತು. ಅಲ್ಲದೆ, ನಗರದ ನಮ್ಮ ಮೆಟ್ರೋ ಸಂಚಾರವನ್ನು ಸ್ಥಗಿತಗೊಳಿಸಲಾಗಿತ್ತು.
ಕಾವೇರಿ ನದಿ ನೀರಿನ ಹಂಚಿಕೆ ಸಂಬಂಧ ಸುಪ್ರೀಂ ಕೋರ್ಟ್ ತೀರ್ಪು ಹಾಗೂ ತಮಿಳುನಾಡಿನಲ್ಲಿ ಕನ್ನಡಿಗರ ಮೇಲೆ ಹಲ್ಲೆ ಹಿನ್ನೆಲೆಯಲ್ಲಿ ನಗರದಲ್ಲಿ ಅಲ್ಲಲ್ಲಿ ಪೊಲೀಸರ ಭದ್ರತೆ ಮಧ್ಯೆ ಪ್ರತಿಭಟನೆ ಹಿನ್ನೆಲೆಯಲ್ಲಿ ನಗರದ ಜನತೆ ಆತಂಕಗೊಂಡಿದೆ. ಅಲ್ಲದೆ, ಬಿಗಿ ಪೊಲೀಸ್ ಭದ್ರತೆ ಹಿನ್ನೆಲೆಯಲ್ಲಿ ಸಾರ್ವಜನಿಕರು ಸ್ವಯಂ ಪ್ರೇರಿತರಾಗಿ ತಮ್ಮ ಅಂಗಡಿ-ಮುಂಗಟ್ಟುಗಳನ್ನು ಮುಚ್ಚಿದ್ದಾರೆ.
ಕರುಣಾನಿಧಿ ಪುತ್ರಿ ಫಾರ್ಮ್ ಹೌಸ್‌ಗೆ ದಾಳಿ
ಕನಕಪುರದ ವಡೇರಹಳ್ಳಿ ಸಮೀಪದಲ್ಲಿರುವ ತಮಿಳುನಾಡು ಮಾಜಿ ಸಿಎಂ ಕರುಣಾನಿಧಿ ಪುತ್ರಿ ಸೆಲ್ವಿ ಅವರಿಗೆ ಸೇರಿದ ಫಾರ್ಮ್ ಹೌಸ್‌ಗೆ ಸಮತಾ ಸೈನಿಕ ದಳದ ಕಾರ್ಯಕರ್ತರು ದಾಳಿ ನಡೆಸಿದ್ದಾರೆ. ಅಲ್ಲದೆ, ಫಾರ್ಮ್ ಹೌಸ್ ಅನ್ನು ರಾಜ್ಯ ಸರಕಾರ ವಶಪಡಿಸಿಕೊಳ್ಳಬೇಕು ಎಂದು ಆಗ್ರಹಿಸಲಾಗಿದೆ.