ನಾಳೆ (ಸೆ.15) ರೈಲು ಬಂದ್
ಬೆಂಗಳೂರು, ಸೆ.14: ತಮಿಳುನಾಡಿಗೆ ಕಾವೇರಿ ನೀರು ಹರಿಸಬೇಕು ಎಂದು ಕೋರ್ಟ್ ನೀಡಿರುವ ತೀರ್ಪು ವಿರೋಧಿಸಿ ಕನ್ನಡಪರ ಸಂಘಟನೆಗಳಿಂದ ನಾಳೆ (ಸೆ.15) ರಾಜ್ಯಾದ್ಯಂತ ರೈಲು ಬಂದ್ ಚಳವಳಿ ಹಮ್ಮಿಕೊಳ್ಳಲಾಗಿದೆ ಎಂದು ಕನ್ನಡಪರ ಚಳವಳಿಗಾರ ವಾಟಾಳ್ ನಾಗರಾಜ್ ತಿಳಿಸಿದ್ದಾರೆ.
ನಗರದ ಮೈಸೂರು ಬ್ಯಾಂಕ್ ವೃತ್ತದಲ್ಲಿ ಕನ್ನಡಪರ ಸಂಘಟನೆಗಳ ಮುಖಂಡರು ರಸ್ತೆಯಲ್ಲಿ ಮಲಗಿ ವಿನೂತನವಾಗಿ ಪ್ರತಿಭಟನೆ ನಡೆಸಿದರು.
ನಂತರ ಮಾತನಾಡಿದ ವಾಟಾಳ್ ನಾಗರಾಜ್, ರಾಜ್ಯದಲ್ಲಿ ಕಾವೇರಿ ಸಮಸ್ಯೆ ದಿನದಿಂದ ದಿನಕ್ಕೆ ಜಾಸ್ತಿಯಾಗುತ್ತಿದ್ದು, ಗಲಭೆಗಳು ಹೆಚ್ಚಾಗುತ್ತಿವೆ. ಆದರೂ ರಾಜ್ಯದ ಸಂಸದರು ಪ್ರಧಾನಿ ಮಂತ್ರಿ ನರೇಂದ್ರ ಮೋದಿಗೆ ರಾಜ್ಯದ ಪರಿಸ್ಥಿತಿಯನ್ನು ಮನವರಿಕೆ ಮಾಡಿಕೊಟ್ಟು, ಮಧ್ಯಪ್ರವೇಶಿಸಿ ಸಮಸ್ಯೆಯನ್ನು ಇತ್ಯರ್ಥಪಡಿಸುವ ಕುರಿತು ಮಾತಾಡುತ್ತಿಲ್ಲ ಎಂದು ಕಿಡಿಕಾರಿದರು. ಕೇಂದ್ರ ಸರಕಾರಕ್ಕೆ ರಾಜ್ಯದ ಪ್ರಸ್ತುತ ಸ್ಥಿತಿಯನ್ನು ಮನವರಿಕೆ ಮಾಡಿಕೊಡುವುದಕ್ಕಾಗಿ ರೈಲು ಬಂದ್ ಹಮ್ಮಿಕೊಳ್ಳಲಾಗಿದ್ದು, ಬೆ. 6 ರಿಂದ ಸಂಜೆ 6 ವರೆಗೆ ಬಂದ್ ನಡೆಯುತ್ತದೆ.
ಇದರ ನಂತರವೂ ಪ್ರಧಾನಿ ಮೋದಿ ಮಧ್ಯಪ್ರವೇಶ ಮಾಡಿ, ಸಮಸ್ಯೆ ಇತ್ಯರ್ಥಪಡಿಸುವ ಬಗ್ಗೆ ಮಾತಾಡಲಿಲ್ಲ ಎಂದಾದರೆ ಹೋರಾಟವನ್ನು ಇನ್ನಷ್ಟು ತೀವ್ರಗೊಳಿಸಲಾಗುತ್ತದೆ ಎಂದು ಹೇಳಿದರು.
ಪ್ರತಿಭಟನೆಯಲ್ಲಿ ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸಾ.ರಾ.ಗೋವಿಂದು, ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಪ್ರವೀಣ್‌ಶೆಟ್ಟಿ ಸೇರಿದಂತೆ ಇನ್ನಿತರೆ ಸಂಘಟನೆಗಳ ಮುಖಂಡರು ಭಾಗವಹಿಸಿ ಬಂದ್ ಬೆಂಬಲ ವ್ಯಕ್ತಪಡಿಸಿದರು.
ರಾಜ್ಯಾದ್ಯಂತ ರೈಲು ಬಂದ್ ಹಿನ್ನೆಲೆಯಲ್ಲಿ ಇಂದು ನಗರದ ಮೆಜೆಸ್ಟಿಕ್ ರೈಲು ನಿಲ್ದಾಣದಲ್ಲಿ ರೈಲು ಬಂದ್ ನಡೆಯಲಿದ್ದು, ಸಾರ್ವಜನಿಕರು ಸಹಕರಿಸಬೇಕು ಎಂದು ವಾಟಾಳ್ ನಾಗರಾಜ್ ಮನವಿ ಮಾಡಿದರು.
ಬಂದ್‌ಗೆ ಅವಕಾಶವಿಲ್ಲ
ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆ ಮಾತುಕತೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ನಗರ ಪೊಲೀಸ್ ಆಯುಕ್ತ ಮೇಘರಿಕ್, ಕನ್ನಡಪರ ಸಂಘಟನೆಗಳು ಕರೆ ನೀಡಿರುವ ರೈಲು ಬಂದ್‌ಗೆ ಅವಕಾಶ ನೀಡುವುದಿಲ್ಲ. ನಗರದಲ್ಲಿ ನಿಷೇಧಾಜ್ಞೆ ಜಾರಿಯಾಗಿರುವ ಹಿನ್ನೆಲೆಯಲ್ಲಿ ಪ್ರತಿಭಟನೆ, ಮೆರವಣಿಗೆ, ಬಂದ್ ನಡೆಸಲು ಅವಕಾಶವಿಲ್ಲ. ಒಂದು ವೇಳೆ ಜನರು ಗುಂಪು ಕೂಡಿ ರೈಲು ತಡೆ ಮಾಡಲು ಮುಂದಾದರೆ ಎಲ್ಲರನ್ನು ಬಂಧಿಸಿ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುತ್ತದೆ ಎಂದು ಎಚ್ಚರಿಕೆಯನ್ನು ರವಾನಿಸಿದರು.