×
Ad

ಗೋಮಾಳದಲ್ಲಿ ಅನಧಿಕೃತ ವಾಸ್ತವ್ಯ ಸಕ್ರಮ: ಬೆಂಗಳೂರಿನಲ್ಲಿ ಸಭೆ ನಡೆಸಿ ತೀರ್ಮಾನ; ಸಚಿವ ಕಾಗೋಡು

Update: 2016-09-15 16:21 IST

ಮಂಗಳೂರು, ಸೆ.15: ಗೋಮಾಳಕ್ಕೆ ಮೀಸಲಿಟ್ಟಿರುವ ಭೂಮಿಯಲ್ಲಿ 30 ವರ್ಷಗಳಿಂದ ವಾಸ್ತವ್ಯ ಅಥವಾ ಕೃಷಿ ಚಟುವಟಿಕೆಗಳನ್ನು ನಡೆಸುತ್ತಿರುವವರಿಗೆ ನಿಗದಿತ ಭೂಮಿಯನ್ನು ಮಂಜೂರು ಮಾಡುವ ನಿಟ್ಟಿನಲ್ಲಿ ಏಕಕಾಲಿಕ ಕಾರ್ಯಾಚರಣೆ ನಡೆಸಿ ಕ್ರಮಕ್ಕೆ ಕಂದಾಯ ಇಲಾಖೆಯ ಕಾರ್ಯದರ್ಶಿಗೆ ತಿಳಿಸಲಾಗಿದೆ. ಈ ಬಗ್ಗೆ ಬೆಂಗಳೂರಿನಲ್ಲಿ ಸಂಬಂಧಪಟ್ಟವರ ಸಭೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಹೇಳಿದ್ದಾರೆ.

 ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಕಂದಾಯ ಇಲಾಖೆಗೆ ಸಂಬಂಧಿಸಿ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು. ಗೋಮಾಳಕ್ಕೆ ಮೀಸಲಿಟ್ಟಿರುವ ಭೂಮಿಯಲ್ಲಿ ಕಳೆದ ಸುಮಾರು 30 ವರ್ಷಗಳಿಂದ ಮನೆ ಕಟ್ಟಿ ವಾಸಿಸುತ್ತಿರುವ ಪ್ರಕರಣಗಳಿಗೆ ಸಂಬಂಧಿಸಿ ಸಕ್ರಮಕ್ಕಾಗಿ ಅರ್ಜಿ ಸಲ್ಲಿಸಿದರೆ ಅರ್ಜಿಗಳು ತಿರಸ್ಕೃತಗೊಳ್ಳುತ್ತಿವೆ. ಈ ಬಗ್ಗೆ ಗಮನ ಹರಿಸಬೇಕಿದೆ ಎಂದು ಸಚಿವ ಬಿ. ರಮಾನಾಥ ರೈಯವರು ಸಭೆಯ ಗಮನಸೆಳೆದಾಗ ಸಚಿವರ ಈ ರೀತಿ ಪ್ರತಿಕ್ರಿಯಿಸಿದರು.

ಷರತ್ತು ಉಲ್ಲಂಘನೆಯಾಗಿದ್ದರೆ ಕ್ರಮ ಕೈಗೊಳ್ಳಲು ಸೂಚನೆ
ದ.ಕ. ಜಿಲ್ಲೆಯಲ್ಲಿ ಸುಮಾರು 30 ವರ್ಷಗಳಿಗೂ ಹಿಂದೆ ಗೇರು ಕೃಷಿಗಾಗಿ ಗುತ್ತಿಗೆ ಆಧಾರದಲ್ಲಿ ನೀಡಲಾಗಿದ್ದ ಭೂಮಿಯನ್ನು ಕೆಲವರು ಷರತ್ತುಗಳನ್ನು ಉಲ್ಲಂಘಿಸಿ ಪರಭಾರೆ ಮಾಡಿಕೊಂಡಿರುವ ಪ್ರಕರಣಗಳಿಗೆ ಸಂಬಂಧಿಸಿ ನಡೆದ ಚರ್ಚೆಯ ವೇಳೆ, ಷರತ್ತುಗಳನ್ನು ಉಲ್ಲಂಘನೆಯಾಗಿದ್ದಲ್ಲಿ ರದ್ದು ಪಡಿಸಿ ಭೂಮಿಯನ್ನು ಸರಕಾರದ ವಶಕ್ಕೆ ಪಡೆಯುವಂತೆ ಅಧಿಕಾರಿಗಳಿಗೆ ಸಚಿವ ಕಾಗೋಡು ತಿಮ್ಮಪ್ಪ ಸೂಚಿಸಿದರು. ಗೇರು ಕೃಷಿಗಾಗಿ ಗುತ್ತಿಗೆ ಆಧಾರದಲ್ಲಿ ನೀಡಲಾದ ಭೂಮಿಯನ್ನು 30 ವರ್ಷಗಳ ಬಳಿಕ ಭೂಮಂಜೂರಾತಿ ಕಾಯ್ದೆ ಪ್ರಕಾರ ಖಾಯಂಗೊಳಿಸಿ ಮಂಜೂರಾತಿಗೆ ಅವಕಾಶ ಒದಗಿಸಲಾಗಿತ್ತು. ಆದರೆ ದರದ ಗೊಂದಲದ ಹಿನ್ನೆಲೆಯಲ್ಲಿ ಈ ಬಗ್ಗೆ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಕುಮಾರ್ ಸಭೆಗೆ ಮಾಹಿತಿ ನೀಡಿದರು. ಈ ಬಗ್ಗೆ ಸರಕಾರ ಮಟ್ಟದಲ್ಲಿ ಸಭೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಸಚಿವ ಕಾಗೋಡು ತಿಳಿಸಿದರು. ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ, ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಸಚಿವ ಯು.ಟಿ.ಖಾದರ್, ವಿಧಾನ ಪರಿಷತ್‌ನ ಮುಖ್ಯ ಸಚೇತಕ ಐವನ್ ಡಿಸೋಜಾ, ಮಾಜಿ ಸಚಿವ ಅಭಯಚಂದ್ರ ಜೈನ್, ಶಾಸಕರಾದ ಜೆ.ಆರ್. ಲೋಬೋ, ಶಕುಂತಳಾ ಶೆಟ್ಟಿ ಮೊಯ್ದೀನ್ ಬಾವಾ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News