ತಮಿಳುನಾಡು ಬಂದ್‌ಗೆ ಕರೆ ಹಿನ್ನೆಲೆ: ರಾಜ್ಯದಲ್ಲಿ ಬಿಗಿಬಂದೋಬಸ್ತ್; ಡಾ.ಜಿ.ಪರಮೇಶ್ವರ್
ಬೆಂಗಳೂರು, ಸೆ.15: ಕೆಲವು ಸಂಘಟನೆಗಳು ಶುಕ್ರವಾರ(ಸೆ.16) ತಮಿಳುನಾಡು ಬಂದ್‌ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಯಾವುದೆ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಗುರುವಾರ ವಿಕಾಸಸೌಧದಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ತಮಿಳುನಾಡು ಬಂದ್ ಸಂದರ್ಭದಲ್ಲಿ ಅಲ್ಲಿನ ಕನ್ನಡಿಗರ ರಕ್ಷಣೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಈಗಾಗಲೆ ಆ ರಾಜ್ಯದ ಪೊಲೀಸ್ ಮಹಾನಿರ್ದೇಶಕರು ಹಾಗೂ ಮುಖ್ಯಕಾರ್ಯದರ್ಶಿ ಜೊತೆ ಮಾತುಕತೆ ನಡೆಸಲಾಗಿದೆ ಎಂದರು.
ತಮಿಳುನಾಡಿನಲ್ಲಿ ಯಾವುದಾದರೂ ಅಹಿತಕರ ಘಟನೆಗಳು ಸಂಭವಿಸಿದರೆ, ಅದಕ್ಕೆ ನಮ್ಮ ರಾಜ್ಯದಲ್ಲೂ ಪ್ರತಿಕಾರ ಮೂಡುವ ಮುನ್ಸೂಚನೆಗಳು ಇರುವ ಹಿನ್ನೆಲೆಯಲ್ಲಿ ಕಾವೇರಿ ಕಣಿವೆ ಭಾಗದಲ್ಲಿರುವ ಮೈಸೂರು, ಮಂಡ್ಯ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ ಸೇರಿದಂತೆ ಇನ್ನಿತರ ಜಿಲ್ಲೆಗಳಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ ಎಂದು ಅವರು ಹೇಳಿದರು.
ಚಾಮರಾಜನಗರದಿಂದ ತಮಿಳುನಾಡಿಗೆ ಸಂಪರ್ಕ ಕಲ್ಪಿಸುವ 7 ರಸ್ತೆಗಳಿದ್ದು, ಈ ಭಾಗದಲ್ಲಿ ಭದ್ರತೆಗಾಗಿ 6 ಕೆಎಸ್‌ಆರ್‌ಪಿ ತುಕಡಿಗಳನ್ನು ನಿಯೋಜಿಸಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯಿಂದ ಹೊಸೂರು ಸೇರಿದಂತೆ ತಮಿಳುನಾಡಿನ ಇನ್ನಿತರ ಪ್ರದೇಶಗಳಿಗೆ ಸಂಪರ್ಕ ಕಲ್ಪಿಸುವ 6 ರಸ್ತೆಗಳಿವೆ ಎಂದು ಪರಮೇಶ್ವರ್ ಮಾಹಿತಿ ನೀಡಿದರು.
ಈ ಭಾಗದಲ್ಲಿ ಭದ್ರತೆಗಾಗಿ ತಲಾ ಒಂದು ಆರ್‌ಎಎಫ್, ಬಿಎಸ್‌ಎಫ್, 5 ಕೆಎಸ್‌ಆರ್‌ಪಿ, 8 ಡಿಎಆರ್ ತುಕಡಿಗಳನ್ನು ನಿಯೋಜಿಸಲಾಗಿದೆ. ಮೈಸೂರಿನಲ್ಲಿ 6 ಕೆಎಸ್‌ಆರ್‌ಪಿ ತುಕಡಿಗಳೊಂದಿಗೆ ಸ್ಥಳೀಯ ಸಿಎಆರ್ ಸಿಬ್ಬಂದಿಯನ್ನು ಭದ್ರತೆಗೆ ನೇಮಿಸಲಾಗಿದೆ ಎಂದು ಅವರು ಹೇಳಿದರು.
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ 8 ಕೆಎಸ್‌ಆರ್‌ಪಿ, ಬೆಂಗಳೂರು ನಗರದಲ್ಲಿ 11 ಸಿಎಪಿಎಫ್, 3 ಬಿಎಸ್‌ಎಫ್, 6 ಆರ್‌ಎಎಫ್ ಸೇರಿದಂತೆ 21 ತುಕಡಿಗಳನ್ನು ನಿಯೋಜಿಸಲಾಗಿದೆ. ಅಲ್ಲದೆ, 6 ಸಾವಿರ ಪೊಲೀಸ್ ಸಿಬ್ಬಂದಿಯನ್ನು ಭದ್ರತೆಗೆ ನೇಮಕ ಮಾಡಲಾಗಿದೆ ಎಂದು ಪರಮೇಶ್ವರ್ ತಿಳಿಸಿದರು.
ಬೆಂಗಳೂರಿನ 106 ಪೊಲೀಸ್‌ಠಾಣೆಗಳ ಪೈಕಿ 33 ಪೊಲೀಸ್‌ಠಾಣೆಗಳನ್ನು(ಪಶ್ಚಿಮ ವಿಭಾಗದ 26 ಹಾಗೂ ಪೂರ್ವ ವಿಭಾಗದ 7) ಸೂಕ್ಷ್ಮ ಎಂದು ಗುರುತಿಸಲಾಗಿದೆ. ಈ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು.
ಸಾಮಾಜಿಕ ಜಾಲತಾಣಗಳ ಮೂಲಕ ಸುಳ್ಳು ವದಂತಿಗಳನ್ನು ಹಬ್ಬಿಸುವವರ ವಿರುದ್ಧ ಕಠಿಣವಾದ ಕ್ರಮಗಳನ್ನು ಕೈಗೊಳ್ಳಲಾಗುವುದು. ಸೆ.5ರಿಂದಲೂ ಪೊಲೀಸರು ಸಾಮಾಜಿಕ ಜಾಲತಾಣಗಳ ಮೇಲೆ ನಿಗಾವಹಿಸಿದ್ದಾರೆ ಎಂದು ಪರಮೇಶ್ವರ್ ತಿಳಿಸಿದರು.
ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡುಗಡೆ ಮಾಡಿದ್ದನ್ನು ವಿರೋಧಿಸಿ ಬೆಂಗಳೂರು ಸೇರಿದಂತೆ ವಿವಿದೆಡೆ ನಡೆದಂತಹ ಘಟನೆಗಳಿಗೆ ಸಂಬಂಧಿಸಿದಂತೆ 500ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಲಾಗಿದೆ. ಈ ಪೈಕಿ ಹಲವರು ಅಮಾಯಕರು ಎಂದು ಕೇಳಿಬರುತ್ತಿದೆ. ಈ ಬಗ್ಗೆ ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.
‘ರೈಲು ತಡೆ’ 210 ಮಂದಿ ಬಂಧನ
ರೈಲುಗಳ ಸಂಚಾರವನ್ನು ತಡೆಯಲು ಯತ್ನಿಸಿದ ಕೆಲ ಸಂಘಟನೆಗಳ 210 ಮಂದಿಯನ್ನು ಪೊಲೀಸರು ಬಂಧಿಸಿ, ಎಚ್ಚರಿಕೆ ನೀಡಿ ಕಳುಹಿಸಿದ್ದಾರೆ. ಬೆಂಗಳೂರಿನಲ್ಲಿ 54, ಹಾಸನದಲ್ಲಿ 40, ಮೈಸೂರು, ದಾವಣಗೆರೆ, ಶಿವಮೊಗ್ಗ, ಕಲಬುರ್ಗಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಪ್ರತಿಭಟನಾಕಾರರನ್ನು ವಶಕ್ಕೆ ಪಡೆದುಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಯಾವುದೆ ರೀತಿಯ ಅಹಿತಕರ ಘಟನೆಗಳು ನಡೆದಿಲ್ಲ.
-ಡಾ.ಜಿ.ಪರಮೇಶ್ವರ್, ಗೃಹ ಸಚಿವ