ಕಾನೂನು ಹೋರಾಟಕ್ಕೆ ಉಪಯುಕ್ತ ಸಲಹೆ: ಸಚಿವ ಎಂ.ಬಿ.ಪಾಟೀಲ್
ಬೆಂಗಳೂರು, ಸೆ. 15: ತಮಿಳುನಾಡಿಗೆ ಕಾವೇರಿ ನದಿ ನೀರು ಹಂಚಿಕೆ ಸಂಬಂಧ ಸುಪ್ರೀಂ ಕೋರ್ಟ್ ಹಾಗೂ ಕಾವೇರಿ ಮೇಲುಸ್ತುವಾರಿ ಸಮಿತಿಯ ಎದುರು ಸಮರ್ಥವಾದ ಮಂಡನೆಗೆ ಕಾನೂನು ತಜ್ಞರು ಉಪಯುಕ್ತ ಸಲಹೆಗಳನ್ನು ನೀಡಿದ್ದು, ಮುಂದಿನ ಹೋರಾಟಕ್ಕೆ ಬೆಂಬಲ ಸಿಕ್ಕಿದೆ ಎಂದು ಜಲಸಂಪನ್ಮೂಲ ಸಚಿವ ಎಂ.ಬಿ. ಪಾಟೀಲ್ ಇಂದಿಲ್ಲಿ ಹೇಳಿದ್ದಾರೆ.ುರುವಾರ ನಗರದ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಕಾವೇರಿ ನೀರು ಹಂಚಿಕೆ ವಿವಾದ ಸಂಬಂಧ ಸುಪ್ರೀಂಕೋರ್ಟ್ ಮತ್ತು ಮೇಲುಸ್ತುವಾರಿ ಸಮಿತಿ ಮುಂದೆ ಅನುಸರಿಸಬೇಕಾದ ಕಾನೂನಾತ್ಮಕ ಹೋರಾಟ ಕುರಿತು ಸಲಹೆ ಸೂಚನೆ ಪಡೆಯಲು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕಾನೂನು ತಜ್ಞರೊಂದಿಗೆ ಸಮಾಲೋಚನೆ ನಡೆಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ರಾಜ್ಯ, ರೈತರ ಹಿತರಕ್ಷಣೆ ಮಾಡುವ ಬದ್ಧತೆಯಿಂದ ಸುಪ್ರೀಂಕೋರ್ಟ್ ಮತ್ತು ಕಾವೇರಿ ಮೇಲುಸ್ತುವಾರಿ ಸಮಿತಿ ಮುಂದೆ ಸಮರ್ಥವಾದ ಮಂಡಿಸಲು ಸುಪ್ರೀಂಕೋರ್ಟ್, ಹೈಕೋರ್ಟ್‌ನ ನಿವೃತ್ತ ನ್ಯಾಯಾಧೀಶರು, ಹಾಲಿ ಮತ್ತು ಮಾಜಿ ಅಡ್ವೋಕೇಟ್ ಜನರಲ್‌ಗಳು ಹಾಗೂ ಸುಪ್ರೀಂಕೋರ್ಟ್ ವಕೀಲರೊಂದಿಗೆ ಸುದೀರ್ಘವಾಗಿ ಚರ್ಚಿಸಲಾಗಿದೆ. ಅದೇ ರೀತಿ,ಮುಂದೆ ಜಲಾಶಯಗಳಲ್ಲಿನ ಸ್ಥಿತಿಗತಿ, ಇದುವರೆಗೂ ಅನುಸರಿಸಿದ ಸರಕಾರದ ನಿಲುವು ಮತ್ತು ಕಾನೂನು ಹೋರಾಟ,ಮಳೆ ಅಭಾವ ಪರಿಸ್ಥಿತಿ ಮುಂತಾದ ವಿಚಾರಗಳ ಬಗ್ಗೆ ವಿವರಿಸಿ,ಮುಂದಿನ ಹೋರಾಟ ಹೇಗಿರಬೇಕು ಎಂಬ ಬಗ್ಗೆ ಸಲಹೆ ಸೂಚನೆಗಳನ್ನು ಪಡೆಯಲಾಯಿತು ಎಂದು ಮಾಹಿತಿ ನೀಡಿದರು. ಸಭೆಯಲ್ಲಿ ತಜ್ಞರು ಉಪಯುಕ್ತ ಸಲಹೆ ಸೂಚನೆಗಳನ್ನು ನೀಡಿದ್ದಾರೆ ಎಂದ ಅವರು, ರಾಜ್ಯ ಸರಕಾರ ಕಾವೇರಿ ನದಿ ನೀರು ಹಂಚಿಕೆ ಸಂಬಂಧಪಟ್ಟಂತೆ ಇದುವರೆಗೂ, ಕೈಗೊಂಡಿರುವ ನಿಲುವು ಮತ್ತು ಕಾನೂನಾತ್ಮಕ ಹೋರಾಟದ ಬಗ್ಗೆ ಅವರೆಲ್ಲಾ ಮೆಚ್ಚುಗೆ ವ್ಯಕ್ತಪಡಿಸಿದ್ದು, ಅವರೆಲ್ಲರ ಸಲಹೆ ಸೂಚನೆಗಳನ್ನು ಅಳವಡಿಸಿಕೊಂಡು ಮುಂದಿನ ಹೋರಾಟವನ್ನು ಮಾಡುತ್ತೇವೆ ಎಂದು ಹೇಳಿದರು.