×
Ad

ವಿನಾಯಕ ಬಾಳಿಗಾ ಹತ್ಯೆ ಪ್ರಕರಣ ನರೇಶ್ ಶೆಣೈಗೆ ಹೈಕೋರ್ಟ್ ಷರತ್ತು ಬದ್ಧ ಜಾಮೀನು

Update: 2016-09-15 23:51 IST

ಬೆಂಗಳೂರು, ಸೆ.15: ಮಂಗಳೂರಿನ ಆರ್‌ಟಿಐ ಕಾರ್ಯಕರ್ತ ವಿನಾಯಕ ಬಾಳಿಗಾ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಎನ್ನಲಾದ ನಮೋ ಬ್ರಿಗೇಡ್ ಸಂಸ್ಥಾಪಕ ನರೇಶ್ ಶೆಣೈಗೆ ಹೈಕೋರ್ಟ್ ಷರತ್ತು ಬದ್ಧ ಜಾಮೀನು ನೀಡಿದೆ.

ಈ ಸಂಬಂಧ ನಿರೀಕ್ಷಣಾ ಜಾಮೀನು ಕೋರಿ ನರೇಶ್ ಶೆಣೈ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಶ್ರೀನಿವಾಸೇಗೌಡ ಅವರಿದ್ದ ನ್ಯಾಯಪೀಠವು ಎರಡು ಲಕ್ಷ ರೂ.ಶ್ಯೂರಿಟಿ, ಸಾಕ್ಷ ನಾಶ ಮಾಡಬಾರದು, ವಾರಕ್ಕೊಮ್ಮೆ ಪೊಲೀಸ್ ಠಾಣೆಗೆ ಹೋಗಿ ಸಹಿ ಮಾಡಬೇಕು ಸೇರಿ ಇತರೆ ಷರತ್ತುಗಳನ್ನು ವಿಧಿಸಿ ಆರೋಪಿ ನಮೋ ಬ್ರಿಗೇಡ್ ಸಂಸ್ಥಾಪಕ ನರೇಶ್ ಶೆಣೈಗೆ ಜಾಮೀನು ಮಂಜೂರು ಮಾಡಿತು.

ವಕೀಲ ಅರುಣ್ ಶ್ಯಾಮ್ ಅವರು, ಮಂಗಳೂರಿನ ವೆಂಕಟರಮಣಸ್ವಾಮಿ ದೇವಸ್ಥಾನದ ಆರ್ಥಿಕ ನಿರ್ವಹಣೆ ಮತ್ತು ಸ್ವಾಮೀಜಿ ವಿಚಾರಕ್ಕೆ ಸಂಬಂಧಿಸಿದ ಭಿನ್ನಾಭಿಪ್ರಾಯದ ವಿಚಾರಕ್ಕೆ ಕಾನೂನು ಸಮರ ಸಾರಿದ್ದ ವಿನಾಯಕ ಬಾಳಿಗಾ ಅವರು ಯಾವುದೇ ರಾಜೀ ಸಂಧಾನಕ್ಕೆ ಮುಂದಾಗದ ಹಿನ್ನೆಲೆಯಲ್ಲಿ ನರೇಶ್ ಶೆಣೈ ಕೈವಾಡದ ಹಿನ್ನೆಲೆಯಲ್ಲಿ ಹತ್ಯೆ ಮಾಡಲಾಗಿದೆ ಎನ್ನಲಾಗುತ್ತಿದೆಯಾದರೂ ನರೇಶ್ ಶೆಣೈಗೂ ಈ ದೇವಸ್ಥಾನಕ್ಕೂ ಯಾವುದೇ ಸಂಬಂಧವಿಲ್ಲ. ಹೀಗಾಗಿ, ಶೆಣೈಗೆ ಜಾಮೀನು ನೀಡಬೇಕೆಂದು ನ್ಯಾಯಪೀಠಕ್ಕೆ ಮನವಿ ಮಾಡಿದರು.

ಪ್ರಕರಣದ ಏಳು ಆರೋಪಿಗಳ ಪೈಕಿ ಇಬ್ಬರಿಗೆ ಜಾಮೀನು ನೀಡಲಾಗಿದೆ. ಹೀಗಾಗಿ, ವೆಂಕಟರಮಣಸ್ವಾಮಿ ದೇವಸ್ಥಾನಕ್ಕೂ, ಈ ಕೊಲೆಗೂ ಯಾವುದೇ ಸಂಬಂಧವಿಲ್ಲದ ಆರೋಪಿಯನ್ನು ಬಿಡುಗಡೆಗೊಳಿಸಬೇಕೆಂದು ಮನವಿ ಮಾಡಿದರು.

ಪ್ರಕರಣ ಹಿನ್ನೆಲೆ

ಮಾರ್ಚ್ 23ರಂದು ಮಂಗಳೂರು ನಗರದ ಬೆಸೆಂಟ್ ಕಾಲೇಜಿನ ಸಮೀಪ, ಪಿ.ವಿ.ಎಸ್.ಕಲಾಕುಂಜದ ಎದುರಿನ ಓಣಿಯೊಂದರಲ್ಲಿ ವಿನಾಯಕ ಪಾಂಡುರಂಗ ಬಾಳಿಗರನ್ನು ಅವರ ನಿವಾಸದ ಎದುರೆ ದುಷ್ಕರ್ಮಿಗಳು ಹತ್ಯೆಗೈದಿದ್ದರು.

ಮಾ.21ರ 2016 ರಂದು ವಿನಾಯಕ ಪಾಂಡುರಂಗ ಬಾಳಿಗರವರು ಪ್ರತೀ ದಿನದಂತೆ ಬೆಳಗ್ಗೆ 5 ಗಂಟೆಗೆ ವೆಂಕಟರಮಣ ದೇವಸ್ಥಾನಕ್ಕೆ ಹೋಗಲು ತನ್ನ ಸ್ಕೂಟರ್ ಹೋಂಡಾ ಪ್ಲಷರ್ ಕೆಎ.19.ಇ.ಡಿ 3098ರಲ್ಲಿ ಮನೆಯಿಂದ ಹೊರಟು ಸುಮಾರು 75 ಮೀಟರ್‌ದೂರ ಹೋಗುವಷ್ಟರಲ್ಲಿ ವಿನಾಯಕ ಪಾಂಡುರಂಗ ಬಾಳಿಗರನ್ನು ತಡೆದು ನಿಲ್ಲಿಸಿದ ಮೂವರು ವ್ಯಕ್ತಿಗಳು ಯದ್ವಾತದ್ವಾ ತಲವಾರಿನಿಂದ ಕಡಿದು ಅವರು ಬಂದ ಬೈಕ್‌ನಲ್ಲಿ ಪರಾರಿಯಾಗಿದ್ದರು. ವಿನಾಯಕ ಪಾಂಡುರಂಗ ಬಾಳಿಗರವರ ತಂಗಿಯಾದ ಅನುರಾಧ ಬಾಳಿಗರವರು ನೀಡಿದ ದೂರಿನಂತೆ ಪ್ರಕರಣ ದಾಖಲಾಗಿತ್ತು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News