ಕಾವೇರಿ ಜಲವಿವಾದ; ಪ್ರಧಾನಿ ಮಧ್ಯಪ್ರವೇಶ ಸಾಧ್ಯವಿಲ್ಲ: ಯಡಿಯೂರಪ್ಪ
ಬೆಂಗಳೂರು, ಸೆ.16: ಕಾವೇರಿ ಜಲವಿವಾದಕ್ಕೆ ಸಂಬಂಧಿಸಿದಂತೆ ಪ್ರಧಾನಮಂತ್ರಿ ನರೇಂದ್ರಮೋದಿ ಮಧ್ಯಪ್ರವೇಶ ಮಾಡಲು ಸಾಧ್ಯವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪಸ್ಪಷ್ಟಪಡಿಸಿದ್ದಾರೆ.
ಶುಕ್ರವಾರ ನಗರದ ಮಲ್ಲೇಶ್ವರಂನಲ್ಲಿರುವ ಪಕ್ಷದ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾವೇರಿ ನದಿ ನೀರು ಹಂಚಿಕೆ ವಿವಾದವು ನ್ಯಾಯಾಲಯದ ಎದುರು ಇರುವುದರಿಂದ ಈ ಹಂತದಲ್ಲಿ ಪ್ರಧಾನಮಂತ್ರಿ ಮಧ್ಯಪ್ರವೇಶಿಸಿ ಸಮಸ್ಯೆ ಬಗೆಹರಿಸಲು ಸಾಧ್ಯವಾಗುವುದಿಲ್ಲ ಎಂದರು.
ರಾಜಕೀಯ ಕಾರಣಗಳನ್ನು ಮುಂದಿಟ್ಟುಕೊಂಡು ಪ್ರಧಾನಮಂತ್ರಿ ಮಧ್ಯಪ್ರವೇಶ ಮಾಡಬೇಕೆಂದು ಒತ್ತಾಯಿಸಲಾಗುತ್ತಿದೆ. ಆದರೆ, ಇದರಿಂದ ಯಾವುದೆ ಪ್ರಯೋಜನವಾಗುವುದಿಲ್ಲ ಎಂಬುದನ್ನು ಕಾಂಗ್ರೆಸ್ ಮುಖಂಡರು ಅರ್ಥ ಮಾಡಿಕೊಳ್ಳಬೇಕು ಎಂದು ಯಡಿಯೂರಪ್ಪ ಹೇಳಿದರು.
ಸುಪ್ರೀಂಕೋರ್ಟ್‌ನಲ್ಲಿ ತಮಿಳುನಾಡಿಗೆ ಆರು ದಿನಗಳ ಕಾಲ 10 ಸಾವಿರ ಕ್ಯೂಸೆಕ್ಸ್ ನೀರು ಬಿಡುಗಡೆ ಮಾಡುವುದಾಗಿ ಪ್ರಮಾಣಪತ್ರ ಸಲ್ಲಿಸುವ ಮೂಲಕ ಸರಕಾರ ತಾನೇ ಹಗ್ಗ ಕೊಟ್ಟು ನ್ಯಾಯಾಂಗದಿಂದ ಕೈ ಕಟ್ಟಿಸಿಕೊಂಡಿದೆ ಎಂದು ಅವರು ಕಿಡಿಗಾರಿದರು.
ಕಾವೇರಿ ನದಿ ನೀರು ಬಿಡಗಡೆಯಿಂದ ರಾಜ್ಯದಲ್ಲಿ ಸಂಭವಿಸಿದ ಪ್ರತಿಭಟನೆಗಳ ಆಧಾರದಲ್ಲಿ ಕಾನೂನು ಸುವ್ಯವಸ್ಥೆಯ ವಿಷಯವನ್ನು ಪ್ರಸ್ತಾಪಿಸಿ ಸುಪ್ರೀಂ ಕೋರ್ಟ್‌ನಿಂದ ಛೀಮಾರಿಯನ್ನು ಹಾಕಿಸಿಕೊಂಡಿದೆ. ಜನರ ಗಮನವನ್ನು ಬೇರೆಡೆ ಸೆಳೆಯಲು ಪ್ರಧಾನಿ ಮಧ್ಯಪ್ರವೇಶ ಮಾಡುಬೇಕೆಂಬ ವಿಷಯವನ್ನು ಪ್ರಸ್ತಾಪಿಸಲಾಗುತ್ತಿದೆ ಎಂದು ಯಡಿಯೂರಪ್ಪ ದೂರಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದಂತಹ ಸರ್ವಪಕ್ಷಗಳ ಸಭೆಯಲ್ಲಿ ರಾಜ್ಯದ ಪರ ವಕೀಲ ಮೋಹನ್ ಕಾತರಕಿ, ಸಚಿವ ಕಾಗೋಡು ತಿಮ್ಮಪ್ಪ, ಸುಪ್ರೀಂಕೋರ್ಟ್‌ನಲ್ಲಿ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ಪ್ರಧಾನಮಂತ್ರಿ ಮಧ್ಯಪ್ರವೇಶ ಮಾಡಲು ಸಾಧ್ಯವಿಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದಾರೆ. ಆದರೂ, ಕಾಂಗ್ರೆಸ್ ಈ ವಿಷಯದಲ್ಲಿ ರಾಜಕೀಯ ಮಾಡುತ್ತಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.
‘ಮೇಯರ್’ ಸ್ಥಾನ ಬಿಟ್ಟುಕೊಡುವ ಪ್ರಶ್ನೆ ಇಲ್ಲ: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಮೇಯರ್ ಹಾಗೂ ಉಪಮೇಯರ್ ಚುನಾವಣೆಗೆ ಸಂಬಂಧಿಸಿದಂತೆ ಜೆಡಿಎಸ್ ಮೈತ್ರಿ ಮಾಡಿಕೊಳ್ಳುವ ಕುರಿತು ಈವರೆಗೆ ತಾನು ಯಾವುದೆ ಮಾತುಕತೆ ನಡೆಸಿಲ್ಲ ಎಂದು ಯಡಿಯೂರಪ್ಪ ಸ್ಪಷ್ಟಣೆ ನೀಡಿದರು.
ಬೆಂಗಳೂರಿನ ಬಿಜೆಪಿ ನಾಯಕರು ಜೆಡಿಎಸ್ ಪ್ರಮುಖರೊಂದಿಗೆ ಚರ್ಚೆ ನಡೆಸಿದ್ದಾರೆ. ಮೇಯರ್ ಸ್ಥಾನ ಬಿಟ್ಟುಕೊಡುವವರಿಗೆ ಬೆಂಬಲ ನೀಡುವುದಾಗಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಘೋಷಿಸಿದ್ದಾರೆ. ಆದರೆ, ಮೇಯರ್ ಸ್ಥಾನವನ್ನು ಬಿಟ್ಟುಕೊಡಲು ನಮ್ಮ ಪಕ್ಷ ಸಿದ್ಧವಿಲ್ಲ ಎಂದು ಅವರು ಹೇಳಿದರು.