ತಮಿಳುನಾಡಿಗೆ ನೀರು ಬಿಡುಗಡೆ ಕಷ್ಟ : ಹೈಕಮಾಂಡ್‌ಗೆ ರಾಜ್ಯದ ಪರಿಸ್ಥಿತಿ ವಿವರಿಸಿದ ಸಿದ್ದರಾಮಯ್ಯ
ಬೆಂಗಳೂರು, ಸೆ.20: ಸುಪ್ರೀಂಕೋರ್ಟ್ ಆದೇಶದಂತೆ ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡುಗಡೆ ಮಾಡುವುದು ಕಷ್ಟ ಎಂದು ಕಾಂಗ್ರೆಸ್ ಹೈಕಮಾಂಡ್‌ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ ಎನ್ನಲಾಗಿದೆ.
ಮಂಗಳವಾರ ಸಂಜೆ ದೂರವಾಣಿ ಮೂಲಕ ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿಯವರನ್ನು ಸಂಪರ್ಕಿಸಿದ ಮುಖ್ಯಮಂತ್ರಿ, ಸುಮಾರು 15 ನಿಮಿಷಗಳ ಕಾಲ ಕಾವೇರಿ ಕಣಿವೆಯಲ್ಲಿನ ಜಲಾಶಯಗಳಲ್ಲಿ ಇರುವ ನೀರಿನ ಸಂಗ್ರಹ, ಕುಡಿಯುವ ನೀರಿನ ಸಮಸ್ಯೆ ಎಲ್ಲ ವಿಚಾರಗಳ ಬಗ್ಗೆ ಮನವರಿಕೆ ಮಾಡಿಕೊಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಕಾವೇರಿ ವಿಚಾರದಲ್ಲಿ ಈಗ ಸ್ಪಷ್ಟ ನಿರ್ಧಾರ ಕೈಗೊಳ್ಳಲೇಬೇಕು. ಇನ್ನು ಮುಂದೆ ತಮಿಳುನಾಡಿಗೆ ನೀರು ಬಿಡುಗಡೆ ಮಾಡುವ ಪರಿಸ್ಥಿತಿಯಲ್ಲಿ ನಾವಿಲ್ಲ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ ಎಂದು ಹೇಳಲಾಗಿದೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್ ಸಿಂಗ್, ಲೋಕಸಭಾ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನೂ ಸಂಪರ್ಕಿಸಿ ರಾಜ್ಯದ ಪರಿಸ್ಥಿತಿಯ ಬಗ್ಗೆ ಮಾತನಾಡಿದ್ದಾರೆ ಎಂದು ತಿಳಿದುಬಂದಿದೆ.