ಬಹುಗ್ರಾಮ ಕುಡಿಯುವ ನೀರು ಯೋಜನೆಗೆ ಸರಕಾರದ ಅಸ್ತು
ಶಿವಮೊಗ್ಗ, ಸೆ. 20: ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅಗಸವಳ್ಳಿ ಸುತ್ತಮುತ್ತಲಿನ 10 ಕ್ಕೂ ಅಧಿಕ ಗ್ರಾಮಗಳಿಗೆ ಶುದ್ಧ್ದ ಕುಡಿಯುವ ನೀರು ಪೂರೈಸುವ 9.52 ಕೋಟಿ ರೂ. ವೆಚ್ಚದ ಬಹುಗ್ರಾಮ ಕುಡಿಯುವ ನೀರು ಯೋಜನೆಗೆ ರಾಜ್ಯ ಸರಕಾರ ಅನುಮೋದನೆ ನೀಡಿದೆ. ಎಲ್ಲ ಅಂದುಕೊಂಡಂತೆ ನಡೆದರೆ ಮುಂದಿನ ವರ್ಷದ ವೇಳೆಗೆ ಕಾಮಗಾರಿ ಪೂರ್ಣಗೊಂಡು ಅಗಸವಳ್ಳಿ ಸುತ್ತಮುತ್ತಲಿನ 10 ಗ್ರಾಮಗಳಿಗೆ ತುಂಗಾ ನದಿಯ ಶುದ್ಧ ಕುಡಿಯುವ ನೀರು ಪೂರೈಕೆಯಾಗಲಿದೆ ಎಂದು ಜಿಲ್ಲಾ ಗ್ರಾಮೀಣ ಕುಡಿಯುವ ನೀರು ಹಾಗೂ ನೈರ್ಮಲ್ಯ ಇಲಾಖೆಯ ಮೂಲಗಳು ಹೇಳಿವೆ. ಯೋಜನೆಗಾಗಿ ರಾಜ್ಯ ಸರಕಾರ ಅಗತ್ಯ ಅನುದಾನ ಬಿಡುಗಡೆಗೆ ಅನುಮೋದನೆ ನೀಡಿರುವ ಹಿನ್ನೆಲೆಯಲ್ಲಿ ಗ್ರಾಮಾಂತರ ಕ್ಷೇತ್ರದ ಶಾಸಕಿ ಶಾರದಾ ಪೂರ್ಯನಾಯ್ಕಾ ಅವರು ಅಗಸವಳ್ಳಿ ಸುತ್ತಮುತ್ತಲಿನ ಗ್ರಾಮಗಳಿಗೆ ಖುದ್ದು ಭೇಟಿ ನೀಡಿ, ಯೋಜನೆಯ ಅನುಷ್ಠಾನದ ಬಗ್ಗೆ ಸಮಾಲೋಚನೆ ನಡೆಸಿ, ಸಾರ್ವಜನಿಕರ ಅಭಿಪ್ರಾಯ ಆಲಿಸಿದರು. ಈ ಸಂದಭರ್ದಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯಪಾಲಕ ಅಭಿಯಂತರ ಎಸ್.ಎಂ.ಹರೀಶ್ ಮೊದಲಾದವರು ಉಪಸ್ಥಿತರಿದ್ದರು. ಈ ಗ್ರಾಮಗಳ ಸಮೀಪ ತುಂಗಾ ನದಿ ಹಾದು ಹೋಗಿದ್ದರೂ, ಜಲಮೂಲಗಳಿದ್ದರೂ ಶುದ್ಧ ಕುಡಿಯುವ ನೀರು ಲಭ್ಯವಾಗುತ್ತಿರಲಿಲ್ಲ. ಈ ಹಿನ್ನೆಲೆಯಲ್ಲಿ ಗ್ರಾಮಗಳಿಗೆ ಶುದ್ಧ ಕುಡಿಯುವ ನೀರು ಪೂರೈಕೆ ಮಾಡುವುದಕ್ಕೆ ಸಂಬಂಧಿಸಿದಂತೆ ಬಹುಗ್ರಾಮ ಕುಡಿಯುವ ನೀರು ಯೋಜನೆಯಡಿ ಅನುದಾನ ಬಿಡುಗಡೆ ಮಾಡುವಂತೆ ಶಾಸಕಿ ಶಾರದಾ ಪೂರ್ಯನಾಯ್ಕಾ ಅವರು ಸರಕಾರಕ್ಕೆ ಪತ್ರ ಬರೆದಿದ್ದರು. ಇದಕ್ಕೆ ಸರಕಾರ ಅನುಮತಿ ನೀಡಿದ್ದು, ಕಾಮಗಾರಿ ಪೂರ್ಣಗೊಂಡರೆ ಈ ಗ್ರಾಮಗಳ ಸಾವಿರಾರು ಜನರಿಗೆ ಶುದ್ಧ ಕುಡಿಯುವ ನೀರು ಲಭ್ಯವಾಗಲಿದೆ. ಪೂರ್ಣ ಹಂತಕ್ಕೆ: ಅಗಸವಳ್ಳಿ ಸುತ್ತಮುತ್ತಲಿನ 10 ಗ್ರಾಮಗಳಿಗೆ ಶುದ್ಧ ಕುಡಿಯುವ ನೀರು ಪೂರೈಕೆ ಮಾಡಲು ಬಹುಗ್ರಾಮ ಕುಡಿಯುವ ನೀರು ಯೋಜನೆಗೆ ತಾತ್ವಿಕ ಅನುಮೋದನೆ ದೊರಕಿದೆ. ಉಳಿದಂತೆ ಬುಳ್ಳಾಪುರ ಸುತ್ತಮುತ್ತಲಿನ ಗ್ರಾಮಗಳಿಗೆ ನೀರು ಪೂರೈಕೆ ಮಾಡುವ ಯೋಜನೆಯ ಕಾಮಗಾರಿ ಪ್ರಗತಿಯ ಹಂತದಲ್ಲಿದೆ ಎಂದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯಪಾಲಕ ಅಭಿಯಂತರ ಎಸ್.ಎಂ. ಹರೀಶ್ ಅವರು ಮಂಗಳವಾರ ತಮ್ಮನ್ನು ಸಂಪರ್ಕಿಸಿದ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಪೂರ್ಣಗೊಂಡರೆ ಶಿವಮೊಗ್ಗದ ಅಗಸವಳ್ಳಿ, ರಾಮೆನಕೊಪ್ಪ, ಹೊಸೂರು, ಬಸವಾಪುರ, ಗೌಳಿಕ್ಯಾಂಪ್, ಭಾರತೀನಗರ, ಹಾಯ್‌ಹೊಳೆ, ಗೋವಿಂದಾಪುರ, ಅನುಪಿನಕಟ್ಟೆ, ಪುರದಾಳು ಗ್ರಾಮಗಳ ಗ್ರಾಮಸ್ಥರಿಗೆ ಕುಡಿ ಯುವ ನೀರಿನ ಬವಣೆ ನೀಗಲಿದೆ.