ಕೇಂದ್ರ ಮಧ್ಯಪ್ರವೇಶಕ್ಕೆ ಆಗ್ರಹಿಸಿ ಪ್ರತಿಭಟನೆ
ಶಿವಮೊಗ್ಗ, ಸೆ. 23: ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಕೇಂದ್ರ ಸರಕಾರ ಮಧ್ಯಪ್ರವೇಶಿಸಿ ಸೂಕ್ತ ಪರಿಹಾರ ಕಲ್ಪಿಸಬೇಕು ಎಂದು ಆಗ್ರಹಿಸಿ ಜಿಲ್ಲೆಯ ವಿವಿಧ ಸಂಘಟನೆಗಳ ಮುಖಂಡರು ಶುಕ್ರವಾರ ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಧರಣಿ ನಡೆಸಿದರು. ಮಳೆ ಕೊರತೆಯಿಂದ ಕಾವೇರಿ ನದಿ ಪಾತ್ರದಲ್ಲಿ ನೀರಿನ ಕೊರತೆ ಉದ್ಭವಿಸಿದೆ. ಇತ್ತೀಚಿನ ವರ್ಷಗಳಲ್ಲಿ ಕಾವೇರಿ ವಿಚಾರ ಪದೇ ಪದೇ ಸಂಘರ್ಷಕ್ಕೆ ಕಾರಣವಾಗುತ್ತಿದೆ. ಆದ್ದರಿಂದ ಕೂಡಲೇ ಪ್ರಧಾನಿ ನರೇಂದ್ರ ಮೋದಿ ಮಧ್ಯ ಪ್ರವೇಶಿಸಿ ಸೂಕ್ತ ಪರಿಹಾರ ಕಂಡು ಹಿಡಿಯಬೇಕೆಂದು ಧರಣಿ ನಿರತರು ಆಗ್ರಹಿಸಿದ್ದಾರೆ. ಕಾವೇರಿ ನದಿ ಸಂಬಂಧಿಸಿದ ಜಲಾಶಯಗಳಲ್ಲಿ ನೀರಿನ ಮಟ್ಟ ಸತತ ಕ್ಷೀಣಿಸುತ್ತಿದ್ದರೂ ಸುಪ್ರೀಂ ಕೋರ್ಟ್ ತಮಿಳುನಾಡಿಗೆ ಪದೇ ಪದೇ ನೀರು ಬಿಡಬೇಕೆಂದು ಆಗ್ರಹಿಸುತ್ತಿರುವುದು ಅನ್ಯಾಯದ ಪರಮಾವಧಿಯಾಗಿದೆ. ಇದೇ ರೀತಿ ಮುಂದುವರಿದರೆ ಬೇಸಿಗೆಯಲ್ಲಿ ಕುಡಿಯುವ ನೀರಿಗೂ ತತ್ವಾರ ಎದುರಾಗಲಿದೆ ಎಂದು ಧರಣಿ ನಿರತರು ತಿಳಿಸಿದ್ದಾರೆ. ಕಾವೇರಿ ನದಿ ನೀರನ್ನು ಹಂಚಿಕೊಂಡು ಪರಸ್ಪರ ಸೌಹಾರ್ದವನ್ನು ಕಾಪಾಡಿಕೊಳ್ಳುವಂತೆ ಕೇಂದ್ರ ಮಾಡಬೇಕು. ಸಮಸ್ಯೆ ಬಿಗಡಾಯಿಸಿದರೆ ಹೋರಾಟ ಮತ್ತು ಗಲಭೆೆ ಸಂಭವಿಸುತ್ತದೆ. ಇದನ್ನು ತಪ್ಪಿಸಲು ಕೇಂದ್ರ ಶಾಶ್ವತ ಪರಿಹಾರವನ್ನು ರೂಪಿಸಬೇಕೆಂದು ಧರಣಿ ನಿರತರು ಆಗ್ರಹಿಸಿದ್ದಾರೆ. ಈ ಸಂದರ್ಭದಲ್ಲಿ ಬಸವಕೇಂದ್ರದ ಬಸವಮರುಳಸಿದ್ದ ಸ್ವಾಮೀಜಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತೀ.ನ.ಶ್ರೀನಿವಾಸ್, ಸೂಡಾಧ್ಯಕ್ಷ ಎನ್.ರಮೇಶ್, ಕಾರ್ಪೊರೇಟರ್ ರಘು, ಕಸಾಪ ಮಾಜಿ ಜಿಲ್ಲಾಧ್ಯಕ್ಷ ಡಿ. ಮಂಜುನಾಥ್, ಡಾ. ಚಿಕ್ಕಸ್ವಾಮಿ, ಡಾ. ವಾಣಿಕೋರಿ, ರೈತ ಸಂಘದ ರಾಜ್ಯಾಧ್ಯಕ್ಷ ಕೆ.ಟಿ.ಗಂಗಾಧರ್ ಸೇರಿದಂತೆ ಮೊದಲಾದವರು ಉಪಸ್ಥಿತರಿದ್ದರು.