×
Ad

ಸರಕಾರಿ ಶಾಲೆಗಳ ದತ್ತು ಯೋಜನೆ ಮರು ಆರಂಭ: ಶಿಕ್ಷಣ ಸಚಿವ ತನ್ವೀರ್ ಸೇಠ್

Update: 2016-09-24 18:41 IST

ಬೆಂಗಳೂರು, ಸೆ. 24: ಸರಕಾರಿ ಶಾಲೆಗಳ ಅಭಿವೃದ್ಧಿ ದೃಷ್ಟಿಯಿಂದ ಅವುಗಳನ್ನು ಕಾರ್ಪೊರೇಟ್ ಸಂಸ್ಥೆಗಳಿಗೆ ‘ದತ್ತು’ ನೀಡುವ ಯೋಜನೆಯನ್ನು ಪುನರ್ ಆರಂಭಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ತನ್ವೀರ್ ಸೇಠ್ ಇಂದಿಲ್ಲಿ ತಿಳಿಸಿದ್ದಾರೆ.

ಶನಿವಾರ ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಈ ಹಿಂದೆ ಜಾರಿಯಲ್ಲಿದ್ದ ದತ್ತು ಯೋಜನೆಯನ್ನು ಸ್ಥಗಿತಗೊಳಿಸಲಾಗಿತ್ತು. ಇದೀಗ ಆ ಯೋಜನೆಯನ್ನು ಮತ್ತೆ ಆರಂಭಿಸಲಾಗುವುದು ಎಂದು ಹೇಳಿದರು.

ಖಾಸಗಿ ಸಂಸ್ಥೆಗಳು ಸರಕಾರಿ ಶಾಲೆಗಳನ್ನು ದತ್ತು ಪಡೆದು ಅಗತ್ಯ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುತ್ತವೆ. ಇದರಿಂದ ಶಾಲೆಗಳ ಅಭಿವೃದ್ಧಿ ಸಾಧ್ಯವಾಗಲಿದೆ. ಅಲ್ಲದೆ, ಸರಕಾರಿ ಶಾಲೆಗಳಲ್ಲಿನ ಮಕ್ಕಳಿಗೆ ಉತ್ತಮ ಶಿಕ್ಷಣ ದೊರಕಿಸಿಕೊಡಲು ಸಾಧ್ಯವಾಗಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಸಮ್ಮೇಳನಕ್ಕೆ ಅನುದಾನ ಹೆಚ್ಚಿಸಲು ಮನವಿ: ರಾಯಚೂರಿನಲ್ಲಿ ಡಿಸೆಂಬರ್ 18ರಂದು ನಡೆಯಲಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ನಿಗದಿಪಡಿಸಿರುವ ಅನುಧಾನವನ್ನು 2 ಕೋಟಿ ರೂ.ಗಳಿಂದ 10 ಕೋಟಿ ರೂ.ಗಳಿಗೆ ಹೆಚ್ಚಳ ಮಾಡಬೇಕೆಂದು ಅವರು ಸಿಎಂಗೆ ಮನವಿ ಮಾಡಿದ್ದೇನೆ. ಅಲ್ಲದೆ, ಸಮ್ಮೇಳನದಲ್ಲಿ ಪಾಲ್ಗೊಳ್ಳುವಂತೆ ಮುಖ್ಯಮಂತ್ರಿಗೆ ಆಹ್ವಾನ ನೀಡಿಸಲಾಗಿದೆ ಎಂದು ಹೇಳಿದರು.

ತಾನು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವನಾಗಿದ್ದು, ಸಾಹಿತ್ಯ ಸಮ್ಮೇಳನ ಯಶಸ್ವಿಯಾಗಲು ಹಗಲಿರುಳು ಶ್ರಮಿಸಲಿದ್ದೇನೆ ಎಂದು ಅವರು, ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ನಾಡಿನ ಸಾಹಿತಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ ಎಂದರು.

ಪ್ರತಿಭಟನೆ ಕೈಬಿಡಿ: ಕಾವೇರಿ ನದಿ ನೀರಿನ ಹಂಚಿಕೆ ಸಂಬಂಧ ವಿಧಾನ ಮಂಡಲ ಸರ್ವಾನುಮತದ ನಿರ್ಣಯ ಕೈಗೊಂಡಿದ್ದು, ರಾಜ್ಯ ರೈತರ ಹಿತರಕ್ಷಣೆಗಾಗಿ ಕ್ರಮ ಕೈಗೊಳ್ಳಲಾಗಿದೆ. ಈ ವಿಚಾರದಲ್ಲಿ ಯಾರೊಬ್ಬರೂ ರಾಜಕಾರಣ ಮಾಡಬಾರದು ಎಂದ ಅವರು, ಪ್ರತಿಭಟನಾಕಾರರು ತಮ್ಮ ಹೋರಾಟವನ್ನು ಕೈಬಿಡಬೇಕು ಎಂದು ಕೋರಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News