×
Ad

ಖಾಸಗಿ ಶಿಕ್ಷಣ ಸಂಸ್ಥೆಗಳಿಂದ ಮನಸೋ ಇಚ್ಛೆ ಶುಲ್ಕ ವಸೂಲಿ: ಕ್ರಮಕ್ಕೆ ಆಗ್ರಹಿಸಿ ಧರಣಿ

Update: 2016-09-29 22:04 IST

ಶಿವಮೊಗ್ಗ, ಸೆ.29: ನಗರದ ಕೆಲ ಖಾಸಗಿ ಶಿಕ್ಷಣ ಸಂಸ್ಥೆಗಳು ಪೋಷಕರಿಂದ ಮನಬಂದಂತೆ ಶುಲ್ಕ ವಸೂಲಿ ಮಾಡುತ್ತಿವೆ. ಇದಕ್ಕೆ ಕಡಿವಾಣ ಹಾಕಲು ಜಿಲ್ಲಾಡಳಿತ ಕಠಿಣ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿ, ಶಿವಮೊಗ್ಗ ಪೀಸ್ ಆರ್ಗನೈಝೇಷನ್ ಸಂಘಟನೆಯು ಗುರುವಾರ ನಗರದ ಡಿಸಿ ಕಚೇರಿ ಮುಂಭಾಗದಲ್ಲಿ ಧರಣಿ ನಡೆಸಿ ಮನವಿ ಪತ್ರ ಸಲ್ಲಿಸಿತು. ನಗರದಲ್ಲಿ ವರ್ಷದಿಂದ ವರ್ಷಕ್ಕೆ ಹಲವು ಖಾಸಗಿ ಶಿಕ್ಷಣ ಸಂಸ್ಥೆಗಳು ಹೊಸದಾಗಿ ಸ್ಥಾಪನೆಯಾಗುತ್ತಿವೆ. ಗುಣಮಟ್ಟದ ಶಿಕ್ಷಣ ನೀಡುವ ನೆಪದಲ್ಲಿ ಕೆಲ ಸಂಸ್ಥೆಗಳು ಹಣ ಮಾಡುವುದನ್ನೇ ದಂಧೆಯನ್ನಾಗಿಸಿಕೊಂಡಿವೆ. ಪೋಷಕರ ಬಳಿ ಮನಬಂದಂತೆ ಶುಲ್ಕ ವಸೂಲಿ ಮಾಡುತ್ತಿವೆ. ಹಗಲು ದರೋಡೆ ನಡಸುತ್ತಿವೆ ಎಂದು ಧರಣಿ ನಿರತರು ದೂರಿದ್ದಾರೆ. ಶುಲ್ಕ ವಸೂಲಿಗೆ ಸಂಬಂಧಿಸಿದಂತೆ ಕೇಂದ್ರ ಹಾಗೂ ರಾಜ್ಯ ಸರಕಾರಗಳು ಸ್ಪಷ್ಟ ನೀತಿ-ನಿಯಮ ರೂಪಿಸಿವೆ. ಆದರೆ ಕೆಲ ಖಾಸಗಿ ಶಿಕ್ಷಣ ಸಂಸ್ಥೆಗಳು ಶಿಕ್ಷಣ ಕಾಯ್ದೆ ಹಾಗೂ ನಿಯಮಗಳ ಪರಿಪಾಲನೆ ಮಾಡದೆ ಉಲ್ಲಂಘಿಸುತ್ತಿವೆ. ಇವರನ್ನು ಹೇಳುವವರು ಕೇಳುವವರ್ಯಾರು ಇಲ್ಲದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಸಂಬಂಧಿಸಿದ ಇಲಾಖೆಗಳು ವೌನವಾಗಿವೆ ಎಂದು ಧರಣಿ ನಿರತರು ದೂರಿದ್ದಾರೆ. ಕೆಲ ಸಂಸ್ಥೆಗಳ ದುಬಾರಿ ಶುಲ್ಕ ವಸೂಲಿ ನೀತಿಯಿಂದ ಬಡ ಹಾಗೂ ಮಧ್ಯಮ ವರ್ಗದ ಜನರು ತಮ್ಮ ಮಕ್ಕಳಿಗೆ ವಿದ್ಯಾಭ್ಯಾಸ ಕೊಡಿಸಲು ಪರದಾಡುವಂತಾಗಿದೆ. ಇನ್ನಿಲ್ಲದ ಸಂಕಷ್ಟ ಅನುಭವಿಸುವಂತಾಗಿದೆ. ಹಣವಿದ್ದವರು ಮಾತ್ರ ಶಿಕ್ಷಣ ಪಡೆಯುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಆಪಾದಿಸಿದ್ದಾರೆ. ತಕ್ಷಣವೇ ಜಿಲ್ಲಾಡಳಿತ ನಿಯಮ ಮೀರಿ ಪೋಷಕರಿಂದ ಹಣ ಸುಲಿಗೆ ಮಾಡುತ್ತಿರುವ ಖಾಸಗಿ ಶಿಕ್ಷಣ ಸಂಸ್ಥೆಗಳ ವಿರುದ್ದ ಕಠಿಣ ಕ್ರಮ ಜರಗಿಸಬೇಕು. ಬಡ ಹಾಗೂ ಮಧ್ಯಮ ವರ್ಗದ ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲ ಕಲ್ಪಿಸುವ ದಿಟ್ಟ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಸಂಘಟನೆಯು ಬೀದಿಗಿಳಿದು ಧರಣಿ ನಡೆಸುವುದು ಅನಿವಾರ್ಯವಾಗಲಿದೆ ಎಂದು ಧರಣಿ ನಿರತರು ಎಚ್ಚರಿಕೆ ನೀಡಿದ್ದಾರೆ. ಧರಣಿಯಲ್ಲಿ ಸಂಘಟನೆಯ ಮುಖಂಡರಾದ ರಿಯಾಝ್ ಅಹ್ಮದ್, ಸೈಯದ್, ಸಮೀವುಲ್ಲ್ಲಾ, ಮುಸ್ತಫಾ, ಉಮರ್ ಶರೀಫ್ ಮತ್ತಿತರರು ಉಪಸ್ಥಿತರಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News