ಮಾದಕ ದ್ರವ್ಯ ಪೂರೈಕೆ: ಗೂಂಡಾ ಕಾಯ್ದೆಯಡಿ ಓರ್ವನ ಬಂಧನ

Update: 2016-10-04 13:59 GMT

ಮಂಗಳೂರು, ಅ. 4: ಸಾರ್ವಜನಿಕ ಹಾಗೂ ಕಾಲೇಜು, ಶಾಲಾ ವಿದ್ಯಾರ್ಥಿಗಳಿಗೆ ಮಾದಕ ವಸ್ತು ಪೂರೈಸುತ್ತಿದ್ದ ಆರೋಪಿಯೋರ್ವನನ್ನು ಬಂಧಿಸಿರುವುದಾಗಿ ನಗರ ಪೊಲೀಸ್ ಕಮಿಷನರ್ ಎಂ.ಚಂದ್ರಶೇಖರ್ ತಿಳಿಸಿದ್ದಾರೆ.

ಕಮಿಷನರ್ ಕಚೇರಿಯಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಟಿ.ಪಿ.ಅಬ್ದುಲ್ ರಹೀಂ ಯಾನೆ ಗೂಡ್ಸ್ ರಹೀಂ ಯಾನೆ ಕಂಡೀ ರಹೀಂ ಎಂಬಾತನನ್ನು ಬಂಧಿಸಲಾಗಿದೆ. ಆರೋಪಿಯಿಂದ 94.216 ಕೆ.ಜಿ. ಗಾಂಜಾ ಮತ್ತು 60ರಿಂದ 70 ಗ್ರಾಂನಷ್ಟು ಕೊಕೇನ್‌ನ್ನು ವಶಪಡಿಸಿಕೊಳ್ಳಲಾಗಿದೆೆ ಎಂದರು.

ಈತ ಕಳೆದ ಐದು ವರ್ಷಗಳಿಂದ ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಮುಗ್ದ ನಾಗರಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಗಾಂಜಾ ಸಹಿತ ಮಾದಕ ವಸ್ತುವನ್ನು ಮಾರಾಟ ಮಾಡುತ್ತಿದ್ದ. ಆರೋಪಿ ವಿರುದ್ಧ ಈಗಾಗಲೇ ವಿವಿಧ ಠಾಣೆಗಳಲ್ಲಿ ಎಂಟು ಪ್ರಕರಣಗಳು ದಾಖಲಾಗಿವೆ. ಈ ಪೈಕಿ ಐದು ಪ್ರಕರಣಗಳು ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿದ್ದು, ಮೂರು ಪ್ರಕರಣಗಳು ತನಿಖಾ ಹಂತದಲ್ಲಿದೆ. ಜಾಮೀನು ಪಡೆದಿದ್ದೂ ಈತ ಯಾವುದೇ ಕಾನೂನು ಕ್ರಮಕ್ಕೆ ಹೆದರದೆ ತನ್ನ ಸಮಾಜ ಘಾತುಕ ಚಟುವಟಿಕೆಗಳನ್ನು ಮುಂದುವರಿಸಿಕೊಂಡಿದ್ದಾನೆ ಎಂದು ಚಂದ್ರಶೇಖರ್ ಹೇಳಿದರು.

ಸಾರ್ವಜನಿಕರಿಗೆ ಮಾದಕ ವಸ್ತು ಮಾರಾಟ ಮಾಡುತ್ತಿರುವವರಲ್ಲಿ ಈತನಲ್ಲದೆ, ಇನ್ನೂ ಕೆಲವರು ಇದ್ದು, ಅವರ ಪಟ್ಟಿಯನ್ನು ಸಿದ್ಧಪಡಿಸಲಾಗಿದೆ. ಇಂತಹ ಅಕ್ರಮ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡವರು ಸುಧಾರಿಸಿಕೊಳ್ಳದಿದ್ದರೆ ಅವರನ್ನೂ ಗೂಂಡಾ ಕಾಯ್ದೆಯಡಿ ಬಂಧಿಸುವುದಾಗಿ ಪೊಲೀಸ್ ಆಯುಕ್ತರು ಎಚ್ಚರಿಕೆ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಡಿಸಿಪಿಗಳಾದ ಕೆ.ಎಂ.ಶಾಂತರಾಜು ಮತ್ತು ಡಾ.ಸಂಜೀವ ಎಂ.ಪಾಟಿಲ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News