ವರಿಷ್ಠರಿಗೆ ಸಡ್ಡು ಹೊಡೆದ ಈಶ್ವರಪ್ಪ
ಶಿವಮೊಗ್ಗ, ಅ.7: ಸಂಗೊಳ್ಳಿ ರಾಯಣ್ಣ ಬ್ರಿಗೇಡ್‌ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಹೇಳುವ ಮೂಲಕ ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್. ಈಶ್ವರಪ್ಪ ಸ್ಪಷ್ಟಪಡಿಸಿದ್ದು, ಬಿಜೆಪಿ ವರಿಷ್ಠರಿಗೆ ಸಡ್ಡು ಹೊಡೆದಿದ್ದಾರೆ.
ಶುಕ್ರವಾರ ನಗರದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಬ್ರಿಗೇಡ್‌ಗೆ ಸಂಬಂಧಿಸಿದಂತೆ ತಮ್ಮ ನಿಲುವಿನಲ್ಲಿ ಯಾವುದೇ ಬದಲಾವಣೆಯಿಲ್ಲ. ಬಿಜೆಪಿಯನ್ನು ಅಧಿಕಾರಕ್ಕೆ ತರಬೇಕೆಂದು ಬ್ರಿಗೇಡ್ ಸ್ಥಾಪಿಸಲಾಗಿದೆ. ತುಮಕೂರಿನಲ್ಲಿ ಶನಿವಾರ ನಡೆಯಬೇಕಾಗಿದ್ದ ಬ್ರಿಗೇಡ್ ಸಮಾವೇಶವನ್ನು ರದ್ದುಪಡಿಸಲಾಗಿದೆ ಎಂದು ಹೇಳಿದರು.
ಗುರುವಾರ ಬೆಂಗಳೂರಿನ ಪಕ್ಷದ ಕಚೇರಿಯಲ್ಲಿ ನಡೆದ ಕೋರ್ ಕಮಿಟಿ ಸಭೆಯಲ್ಲಿ ಬ್ರಿಗೇಡ್ ಬಗ್ಗೆ ಚರ್ಚೆಗಳು ನಡೆದಿವೆ. ಈ ಬಗ್ಗೆ ಪಕ್ಷದಲ್ಲಿ ಉಂಟಾಗಿರುವ ವೈಮನಸ್ಸನ್ನು ಶೀಘ್ರ ಬಗೆಹರಿಸಿಕೊಳ್ಳಲು ಕೇಂದ್ರ ನಾಯಕ ರಾಮಲಾಲ್ ಸೂಚಿಸಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ರಾಯಣ್ಣ ಬ್ರಿಗೇಡ್ ಸ್ಥಾಪನೆ ಬಿಜೆಪಿಯನ್ನು ಅಧಿಕಾರಕ್ಕೆ ತರಬೇಕೆನ್ನುವ ಉದ್ದೇಶವನ್ನು ಹೊಂದಿದೆ. ಆದರೆ ಬ್ರಿಗೇಡ್ ಸಬೆಗೆ ಹೋಗದಂತೆ ರಾಜ್ಯ ಬಿಜೆಪಿ ಅಧ್ಯಕ್ಷ ಯಡಿಯೂರಪ್ಪ ಈ ಹಿಂದೆ ಸೂಚಿಸಿದ್ದು, ಅದು ಯಾವ ಕಾರಣಕ್ಕೆ ಎನ್ನುವುದು ಇನ್ನೂ ಸ್ಪಷ್ಟವಾಗಿಲ್ಲ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ. ಶೀಘ್ರ ಹಿರಿಯರ ಸಮ್ಮುಖದಲ್ಲಿ ಸಭೆ ನಡೆಸಿ ತಮ್ಮಿಬ್ಬರ ನಡುವಿನ ವೈಮನಸ್ಸಿಗೆ ಇತಿಶ್ರೀ ಹಾಡಲಾಗುವುದು. ಆದರೆ, ಸಭೆಯ ದಿನಾಂಕ ಇನ್ನೂ ನಿಗದಿಯಾಗಿಲ್ಲ. ಈ ಬಗ್ಗೆ ಇಲ್ಲಿಯ ವರೆಗೂ ಇಬ್ಬರೂ ಕುಳಿತು ಚರ್ಚಿಸಿಲ್ಲ ಎಂದರು.
ಬಿಜೆಪಿ ಬ್ಯಾನರ್ ಅಡಿಯಲ್ಲಿ ಹಿಂದುಳಿದವರು ಮತ್ತು ದಲಿತರನ್ನು ಸಂಘಟಿಸಲು ಸಾಧ್ಯವಿಲ್ಲ. ಏಕೆಂದರೆ ಇದರಲ್ಲಿ ಬಿಜೆಪಿಗೆ ಸೇರದ ಅನೇಕ ನಾಯಕರು, ಅಧಿಕಾರಿಗಳು ಬ್ರಿಗೇಡ್‌ನಲ್ಲಿದ್ದಾರೆ. ಇವರು ಯಾವತ್ತೂ ಪಕ್ಷದ ಅಡಿಯಲ್ಲಿ ತಮ್ಮನ್ನು ಗುರುತಿಸಿಕೊಳ್ಳಲು ಒಪ್ಪುವುದಿಲ್ಲ ಎಂದು ಹೇಳಿದರು.
ರದ್ದು: ಶನಿವಾರ ತುಮಕೂರಿನಲ್ಲಿ ನಡೆಯಬೇಕಿದ್ದ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಸಮಾವೇಶವನ್ನು ಮುಂದೂಡಲಾಗಿದೆ. ಬಿಜೆಪಿ ಕಚೇರಿಯಲ್ಲಿ ನಡೆದ ಸಭೆಯ ಹಿನ್ನೆಲೆಯಲ್ಲಿ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ ಎಂದು ಇದೇ ಸಂದರ್ಭದಲ್ಲಿ ಕೆ.ಎಸ್. ಈಶ್ವರಪ್ಪ ಸ್ಪಷ್ಟಪಡಿಸಿದ್ದಾರೆ