ಸಂತೆಕಟ್ಟೆ, ಡ್ರೈನೇಜ್ ನಿರ್ಮಾಣಕ್ಕೆ 2 ಕೋಟಿ ರೂ. ವಿನಿಯೋಗ: ಸಚಿವ ಕಾಗೋಡು ತಿಮ್ಮಪ್ಪ
ಸಾಗರ, ಅ.7: ಈಗಾಗಲೇ ಇರುವ ಸಂತೆ ಮೈದಾನ ಸಾರ್ವಜನಿಕರಿಗೆ ತೊಂದರೆ ಉಂಟು ಮಾಡುತ್ತಿರುವುದರಿಂದ ಹೊಸದಾಗಿ ನಿರ್ಮಾಣವಾಗುತ್ತಿರುವ ಸಂತೆ ಮೈದಾನವನ್ನು ಮುಂದಿನ ತಿಂಗಳಿನೊಳಗೆ ಲೋಕಾರ್ಪಣೆಗೊಳಿಸಲಾಗುವುದು ಎಂದು ಸಚಿವ ಕಾಗೋಡು ತಿಮ್ಮಪ್ಪತಿಳಿಸಿದ್ದಾರೆ.
ಇಲ್ಲಿನ ಗಣಪತಿ ಕೆರೆ ಮೇಲ್ಭಾಗದಲ್ಲಿ ಎಪಿಎಂಸಿ ವತಿಯಿಂದ ನಿರ್ಮಾಣವಾಗುತ್ತಿರುವ ಸಂತೆ ಮಾರುಕಟ್ಟೆ ಕಾಮಗಾರಿ ವೀಕ್ಷಣೆ ಮಾಡಿ ಪತ್ರಕರ್ತರೊಂದಿಗೆ ಮಾತನಾಡಿದ ಸಚಿವರು, ಈಗಾಗಲೆ ಸಂತೆ ಕಟ್ಟೆ, ಡ್ರೈನೇಜ್ ನಿರ್ಮಾಣಕ್ಕೆ ಸುಮಾರು 2 ಕೋಟಿ ರೂ. ವಿನಿಯೋಗಿಸಲಾಗಿದೆ ಎಂದರು. ರೈತರ ಅನುಕೂಲಕ್ಕಾಗಿ ನಬಾರ್ಡ್ ಎಪಿಎಂಸಿ ಮೂಲಕ ಕಾಮಗಾರಿ ನಿರ್ವಹಣೆ ಮಾಡುತ್ತಿದೆ. ಬಿಎಚ್ ರಸ್ತೆಯಿಂದ ಇಂದಿರಾಗಾಂಧಿ ಕಾಲೇಜುವರೆಗೆ ಸಂತೆ ಮೈದಾನಕ್ಕೆ ಅನುಕೂಲವಾಗುವಂತೆ 50 ಲಕ್ಷ ರೂ. ವೆಚ್ಚದಲ್ಲಿ ಕಾಂಕ್ರಿಟ್ ರಸ್ತೆ, 50 ಲಕ್ಷ ರೂ. ವೆಚ್ಚದಲ್ಲಿ ಇನ್ನೊಂದು ಸಂತೆಕಟ್ಟೆ, 50 ಲಕ್ಷ ರೂ. ವೆಚ್ಚದಲ್ಲಿ ಮಳೆಗಾಲದಲ್ಲಿ ನೀರು ಹರಿದು ಹೋಗಲು ಕಾಲುವೆ ನಿರ್ಮಾಣ ಇನ್ನಿತರ ಕಾಮಗಾರಿಯನ್ನು ಶೀಘ್ರದಲ್ಲಿ ಕೈಗೆತ್ತಿಕೊಳ್ಳಲಾಗುತ್ತದೆ ಎಂದು ತಿಳಿಸಿದರು. ರಾಜ್ಯ ತಾಂತ್ರಿಕ ಸಮಿತಿ ವತಿಯಿಂದ ಗೌತಮಪುರ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳನ್ನು ಬಹುಗ್ರಾಮ ಕುಡಿಯುವ ನೀರಿನ ಯೋಜನೆಗೆ ಆಯ್ಕೆ ಮಾಡಿಕೊಳ್ಳಲಾಗಿದೆ. ನಬಾರ್ಡ್ ಯೋಜನೆಯಡಿ ಮಳ್ಳ-ಗಿಳಾಲಗುಂಡಿ ರಸ್ತೆಗೆ 1 ಕೋಟಿ ರೂ. ಬಿಡುಗಡೆಯಾಗಿದ್ದು, ಶೀಘ್ರ ನಿರ್ಮಾಣ ಕಾಮಗಾರಿ ಕೈಗೆತ್ತಿಕೊಳ್ಳಲಾಗುತ್ತದೆ. ನಗರವ್ಯಾಪ್ತಿಯಲ್ಲಿ ನಿರ್ಮಾಣವಾಗುತ್ತಿರುವ ಐಟಿಐ ಕಾಲೇಜು ಕಾಮಗಾರಿ ಪ್ರಗತಿ ಹಂತದಲ್ಲಿದ್ದು, ಪ್ರಥಮ ದರ್ಜೆ ಕಾಲೇಜಿನ ಕಟ್ಟಡ ನಿರ್ಮಾಣ ಕಾಮಗಾರಿ ಪ್ರಾರಂಭಿಸಲಾಗಿದೆ ಎಂದರು. ಹಾಲಿ ಇರುವ ಲೋಕೋಪಯೋಗಿ ಇಲಾಖೆ ಕಚೇರಿಯ ಜಾಗದಲ್ಲಿ ದೇವರಾಜ ಅರಸು ಸಭಾಭವನ ನಿರ್ಮಾಣವಾಗುವುದರಿಂದ ಜಿಲ್ಲಾ ಪಂಚಾಯತ್ ಇಂಜಿನಿಯರಿಂಗ್ ಕಚೇರಿ ಪಕ್ಕದಲ್ಲಿ ನೂತನ ಕಟ್ಟಡ ನಿರ್ಮಾಣ ಕಾಮಗಾರಿಯನ್ನು 1ಕೋಟಿ ರೂ. ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗುತ್ತಿದೆ. ಆನಂದಪುರಂ ಜೂನಿಯರ್ ಕಾಲೇಜು ಕಟ್ಟಡ ಅಭಿವೃದ್ಧಿಗೆ 1.4 ಕೋಟಿ ರೂ. ಅನುದಾನ ಬಿಡುಗಡೆಯಾಗಲಿದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ತಾಲೂಕು ಪಂಚಾಯತ್ ಅಧ್ಯಕ್ಷ ಮಲ್ಲಿಕಾರ್ಜುನ ಹಕ್ರೆ, ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರ ಟಿ.ಪಿ.ರಮೇಶ್, ಎಪಿಎಂಸಿ ಸಹಾಯಕ ಕಾರ್ಯಪಾಲಕ ಅಭಿಯಂತರ ವಿಜಯಕುಮಾರ್, ನಗರಸಭೆ ಪ್ರಭಾರಿ ಕಾರ್ಯಪಾಲಕ ಅಭಿಯಂತರ ಎಚ್.ಕೆ.ನಾಗಪ್ಪಹಾಜರಿದ್ದರು.