ಶೀಘ್ರವೇ ವಿಕಲಚೇತನರಿಗೆ ಅಗತ್ಯ ಸಲಕರಣೆ ವಿತರಣೆ
ಉಡುಪಿ, ಅ.7: ಜಿಲ್ಲೆಯಲ್ಲಿನ ಎಲ್ಲ ವಿಕಲಚೇತನರಿಗೆ ಅಗತ್ಯ ಸಾಧನ ಸಲಕರಣೆಗಳನ್ನು ಶೀಘ್ರದಲ್ಲೇ ವಿತರಿಸಲಾಗುವುದು ಎಂದು ಸಂಸದೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.
ಶುಕ್ರವಾರ ಬ್ರಹ್ಮಗಿರಿಯ ಲಯನ್ಸ್ ಭವನದಲ್ಲಿ ಕೇಂದ್ರ ಸರಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ, ಅಲಿಮ್ಕೋ ಬೆಂಗಳೂರು, ಜಿಲ್ಲಾಡಳಿತ ಉಡುಪಿ, ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲಾ ಘಟಕ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ, ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರ ಉಡುಪಿ ಇವುಗಳ ಸಂಯುಕ್ತ ಆಶ್ರಯದಲ್ಲಿ ಕೇಂದ್ರ ಸರಕಾರದ ವಿಶೇಷ ಅಡಿಪ್ ಯೋಜನೆಯಡಿ ವಿಕಲಚೇತನರಿಗೆ ಉಚಿತವಾಗಿ ಸಾಧನ ಸಲಕರಣೆಗಳನ್ನು ವಿತರಿಸುವ ಬೃಹತ್ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಈ ಸಂದರ್ಭ ಉಡುಪಿ ತಾಲೂಕಿನ 74, ಕುಂದಾಪುರದ 156 ಮತ್ತು ಕಾರ್ಕಳದ 91 ಸೇರಿದಂತೆ ಒಟ್ಟು 321 ವಿಕಲಚೇತನರಿಗೆ 30,72,200 ರೂ. ಮೊತ್ತದ ವಿವಿಧ ಸಾಧನ ಸಲಕರಣೆಗಳನ್ನು ವಿತರಿಸಲಾಯಿತು. ಉಡುಪಿ ನಗರಸಭಾ ಅಧ್ಯಕ್ಷೆ ಮೀನಾಕ್ಷಿ ಮಾಧವ ಅಧ್ಯಕ್ಷತೆ ವಹಿಸಿದ್ದರು.
ಜಿಪಂ ಅಧ್ಯಕ್ಷ ದಿನಕರಬಾಬು, ಜಿಪಂ ಸದಸ್ಯೆ ಗೀತಾಂಜಲಿ ಸುವರ್ಣ, ಜಿಲ್ಲಾ ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯ ಸಹಾಯಕ ನಿರ್ದೇಶಕ ನಿರಂಜನ ಭಟ್, ಉಡುಪಿ ರೆಡ್‌ಕ್ರಾಸ್ ಸಂಸ್ಥೆಯ ಉಪಸಭಾಪತಿ ಡಾ.ಅಶೋಕ್ ಕುಮಾರ್, ಖಜಾಂಚಿ ಡಾ.ರಾಮಚಂದ್ರ ಕಾಮತ್, ಸದಸ್ಯ ಕಾರ್ಯದರ್ಶಿ ಜೆ.ಸಿ. ಜನಾರ್ದನ್ ಉಪಸ್ಥಿತರಿದ್ದರು.
ಅಲಿಮ್ಕೋ ಸಂಸ್ಥೆಯ ಅಶೋಕ್‌ಪಾಲ್ ಪ್ರಾಸ್ತಾವಿಕವಾಗಿ ಮಾತನಾಡಿದರು. ರೆಡ್‌ಕ್ರಾಸ್ ಸಂಸ್ಥೆಯ ಸಭಾಪತಿ ಡಾ.ಉಮೇಶ್ ಪ್ರಭು ಸ್ವಾಗತಿಸಿದರು.