ನಾಡಿನ ಪ್ರಗತಿಗೆ ಕೆಲಸ ಮಾಡುವ ಛಲ ಅಗತ್ಯ: ಶಾಸಕ ಸತೀಶ್ ಸೈಲ್
ಕಾರವಾರ, ಅ.8: ಭವಿಷ್ಯದಲ್ಲಿ ದೇಶಕ್ಕಾಗಿ ಹಾಗೂ ನಾಡಿನ ಪ್ರಗತಿಗಾಗಿ ಕೆಲಸ ಮಾಡುವ ಛಲದೊಂದಿಗೆ ಜೀವನ ಸಾರ್ಥಕ ಪಡಿಸಿಕೊಳ್ಳಲು ಮುಂದಾಗಬೇಕು ಎಂದು ಶಾಸಕ ಸತೀಶ್ ಸೈಲ್ ಹೇಳಿದರು.
ನಗರದ ಜಿಲ್ಲಾ ರಂಗಮಂದಿರದಲ್ಲಿ ಸರಕಾರಿ ಕಲಾ ಮತ್ತು ವಿಜ್ಞಾನ ಕಾಲೇಜಿನ 2016-17ನೆ ಸಾಲಿನ ಸಾಂಸ್ಕೃತಿಕ, ಕ್ರೀಡಾ, ಎನ್ನೆಸ್ಸೆಸ್, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ರೆಡ್‌ಕ್ರಾಸ್ ಯೂತ್‌ವಿಂಗ್ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಿ ಮಾತನಾಡಿದರು.
ವಿದ್ಯಾರ್ಥಿಗಳು ಪ್ರಾಮಾಣಿಕ ರೀತಿಯಲ್ಲಿ ಯೋಜನಾ ಬದ್ಧರಾಗಿ ಜೀವನ ಕಟ್ಟಿಕೊಂಡು ತಮ್ಮ ಸಾಧನೆಯ ಗುರಿ ತಲುಪಿ, ಪ್ರಾಮಾಣಿಕವಾಗಿ ಮುಂದೆ ಬರಲು ಪ್ರಯತ್ನಿಸಬೇಕು ಎಂದು ಕರೆ ನೀಡಿದರು. ಸರಕಾರಿ ಕಲಾ ಮತ್ತು ವಿಜ್ಞಾನ ಕಾಲೇಜು ಸ್ವಾಯತ್ತ ಸಂಸ್ಥೆಯಾದಾಗಿನಿಂದ ಸುಮಾರು 7 ಕೋಟಿ ರೂ. ಅನುದಾನದಲ್ಲಿ ಕಾಲೇಜಿನ ಅಭಿವೃದ್ಧಿ ಕಾರ್ಯ ಪ್ರಗತಿಯಲ್ಲಿದೆ. ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಎಲ್ಲ ರೀತಿಯ ಅಭಿವೃದ್ಧಿ ಕೆಲಸಗಳಿಗೆ ಕ್ರಮ ಕೈಗೊಳ್ಳಲಾಗುವುದು. ಕಾಲೇಜಿನ ವಿದ್ಯಾರ್ಥಿಗಳು ಕರ್ನಾಟಕ ವಿಶ್ವವಿದ್ಯಾನಿಲಯ ಹಮ್ಮಿಕೊಳ್ಳುವ ವಿವಿಧ ಪದವಿ ಪರೀಕ್ಷೆಗಳಲ್ಲಿ ರ್ಯಾಂಕ್ ಪಡೆಯುತ್ತಿದ್ದಾರೆ.
ಅವರು ಜಿಲ್ಲಾ ಹಾಗೂ ರಾಜ್ಯ ಮಟ್ಟದಲ್ಲಿ ಕಾಲೇಜಿಗೆ ಕೀರ್ತಿ ತಂದಿದ್ದಾರೆ. ಕೆಲವು ವಿದ್ಯಾರ್ಥಿಗಳು ಕಿತ್ತು ತಿನ್ನುವ ಬಡತನದಲ್ಲಿಯೂ ಶ್ರಮ ಪಟ್ಟು ಓದಿ ರ್ಯಾಂಕ್ ಪಡೆಯಲು ಸಫಲರಾಗಿದ್ದಾರೆ. ಅದರಲ್ಲಿಯೂ ಹೆಣ್ಣು ಮಕ್ಕಳು ಮಂಚೂಣಿಯಲ್ಲಿದ್ದಾರೆ. ಮುಂದಿನ ದಿನಗಳಲ್ಲಿ ಹೆಣ್ಣು ಮಕ್ಕಳಿಗೆ ಉತ್ತಮ ಭವಿಷ್ಯವಿದೆ ಎಂದರು.
ನಂತರ ರಾಮಕೃಷ್ಣಾಶ್ರಮದ ಸ್ವಾಮಿ ಭವೇಶಾನಂದರು ಆಶೀರ್ವಚನ ನೀಡಿದರು.ಕಾಲೇಜಿನ ಪ್ರಾಂಶುಪಾಲೆ ಡಾ. ಕಲ್ಪನಾ ಕೆರವಡಿಕರ ಅಧ್ಯಕ್ಷತೆ ವಹಿಸಿದ್ದರು. ಐಕ್ಯುಎಸಿ ಸಂಚಾಲಕಿ ಶಾರದಾ ಭಟ್ ಸ್ವಾಗತಿಸಿದರು. ಡಾ.ವಸಂತ್‌ಕುಮಾರ್ ಹಾಗೂ ಡಾ.ಭಂಡಾರಿ ಪ್ರಕಟಿಸಿದ ಪುಸ್ತಕಗಳನ್ನು ಬಿಡುಗಡೆ ಮಾಡಲಾಯಿತು. ನಂತರ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
ಈ ಸಂದರ್ಭದಲ್ಲಿ ಸಮಿತಿ ಸದಸ್ಯ ಜಾರ್ಜ್ ಫೆರ್ನಾಂಡೀಸ್, ಸಾಂಸ್ಕೃತಿಕ ಸಂಘದ ಅಧ್ಯಕ್ಷ ಡಾ. ವೆಂಕಟೇಶ ಗಿರಿ, ಯೂನಿಯನ್ ಕಾರ್ಯದರ್ಶಿ ದತ್ತಾತ್ರೇಯ ಶೆಟ್ಟಿ, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಮತ್ತು ನೂರಾರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.