ಕಾಮಗಾರಿ ಪರಿಶೀಲನೆ ಶೀಘ್ರ ಪೂರ್ಣಗೊಳಿಸಲು ಸೂಚನೆ
ಕಾರವಾರ, ಅ.16: ಕಳೆದ ಕೆಲವು ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ತಾಲೂಕಿನ ಸುಂಕೇರಿ-ಕಡವಾಡ ಸೇತುವೆ ಕಾಮಗಾರಿಯನ್ನು ಲೋಕೋಪಯೋಗಿ ಇಲಾಖೆಯ ಕಾರ್ಯದರ್ಶಿ ಸಿದ್ದಯ್ಯ ಗಂಗಪ್ಪ ಅವರು ಪರಿಶೀಲನೆ ನಡೆಸಿದರು. ಕಾಮಗಾರಿ ಪರಿಶೀಲನೆ ನಡೆಸಿದ ನಂತರ ಸೇತುವೆಯ ಕಾಮಗಾರಿ ಶೀಘ್ರವೇ ಪೂರ್ಣಗೊಳಿಸಬೇಕು ಎಂದು ಗುತ್ತಿಗೆದಾರರಿಗೆ ಸೂಚಿಸಿದರು.
ಬಳಿಕ ಸ್ಥಳಕ್ಕೆ ಆಗಮಿಸಿದ ಕಾರವಾರ-ಅಂಕೋಲಾ ಕ್ಷೇತ್ರದ ಶಾಸಕ ಸತೀಶ ಸೈಲ್ ಲೋಕೋಪಯೋಗಿ ಕಾರ್ಯದರ್ಶಿ ಅವರನ್ನು ಭೇಟಿಯಾಗಿ ಮಾತನಾಡಿದ ಅವರು, ಕಡವಾರ -ಸುಂಕೇರಿ ಜೋಡಣೆಯ ಮುಖ್ಯ ಕೊಂಡಿಯಾಗಿರುವ ಸೇತುವೆ ಕಾಮಗಾರಿ ಸಾಕಷ್ಟು ವಿಳಂಬವಾಗಿದೆ. ಇದರಿಂದ ಈ ಭಾಗದ ಜನರಿಗೆ ಸಾಕಷ್ಟು ತೊಂದರೆಯಾಗುತ್ತಿದೆ. ಈ ಹಿಂದೆ ಕಾಮಗಾರಿ ವಿಳಂಬವಾಗಿದ್ದರಿಂದ ಗುತ್ತಿಗೆದಾರರ ಮೇಲೆ ಆಕ್ರೋಶ ವ್ಯಕ್ತಪಡಿಸಿ ಉಸ್ತವಾರಿ ಸಚಿವ ಆರ್. ವಿ. ದೇಶಪಾಂಡೆ ಅವರ ಸಹಕಾರದಿಂದ ಸೇತುವೆ ಕಾಮಗಾರಿ ಪೂರ್ಣಗೊಳಿಸಲು ಹೆಚ್ಚುವರಿಯಾಗಿ 5.90 ಲಕ್ಷ ಮಂಜೂರು ಮಾಡಿಸಲಾಗಿದೆ ಎಂದರು.
ಹಣ ಮಂಜೂರಾಗಿ ಸುಮಾರು ನಾಲ್ಕು ತಿಂಗಳು ಕಳೆದರೂ ಕಾಮಗಾರಿ ಆರಂಭಿಸದೆ ಇರುವ ಗುತ್ತಿಗೆದಾರರ ವಿರುದ್ಧ ಸ್ಥಳೀಯರಿಂದ ಆಕ್ರೋಶ ವ್ಯಕ್ತವಾಗಿದೆ ಎಂದು ಸೈಲ್ ಅವರು ಕಾಮಗಾರಿ ಪರಿಶೀಲನೆಗೆ ಆಗಮಿಸಿದ ಅಧಿಕಾರಿಗಳ ಗಮನಕ್ಕೆ ತಂದರು. ಸುಂಕೇರಿ ಹಾಗೂ ಕಡವಾಡ ಜನರಿಗೆ, ಶಾಲಾ ಕಾಲೇಜಿಗೆ ತೆರಳುವ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿ ಎನ್ನುವ ದೃಷ್ಟಿಯಿಂದ ಡಿಸೆಂಬರ್ ಅಂತ್ಯದೊಳಗೆ ಸೇತುವೆ ಕಾಮಗಾರಿ ಪೂರ್ಣಗೊಳಿಸುವಂತೆ ಸೈಲ್ ಅವರು ಸೂಚಿಸಿದರು.
ಈ ಸಂದರ್ಭದಲ್ಲಿ ಲೋಕೋಪಯೋಗಿ ಇಲಾಖೆಯ ಕಾರ್ಯದರ್ಶಿ ಸಿದ್ದಯ್ಯ ಗಂಗಪ್ಪಅವರು ಸೋಮವಾರದಿಂದ ಸೇತುವೆ ಕಾಮಗಾರಿ ಆರಂಭಿಸುವಂತೆ ತಿಳಿಸಿದರು.