ರಾಜ್ಯ ಸರಕಾರಿ ನೌಕರರಿಗೆ ದೀಪಾವಳಿ ಕೊಡುಗೆ : ಶೆ.4.25ರಷ್ಟು ತುಟ್ಟಿ ಭತ್ತೆ ಹೆಚ್ಚಳ
ಬೆಂಗಳೂರು, ಅ. 21: ಸರಕಾರಿ ನೌಕರರಿಗೆ ರಾಜ್ಯ ಸರಕಾರ ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಶೇ.4.25ರಷ್ಟು ತುಟ್ಟಿಭತ್ತೆ ಹೆಚ್ಚಿಸಿ ಆದೇಶ ಹೊರಡಿಸಿದೆ.
ಜುಲೈ 1ರಿಂದಲೇ ಪೂರ್ವಾನ್ವಯವಾಗುವಂತೆ ಮೂಲ ವೇತನದ ಶೇ.36ರಿಂದ ಶೇ.40.25ಕ್ಕೆ ಹೆಚ್ಚಿಸಿ ಆದೇಶ ಹೊರಡಿಸಲಾಗಿದೆ. ರಾಜ್ಯ ಸರಕಾರದ ಮತ್ತು ಜಿಲ್ಲಾ ಪಂಚಾಯತ್‌ಗಳ ಪೂರ್ಣಾವಧಿ ನೌಕರರಿಗೆ, ಕಾಲಿಕ ವೇತನ ಶ್ರೇಣಿಯಲ್ಲಿರುವ ಪೂರ್ಣಾವಧಿ ವರ್ಕ್ ಚಾರ್ಜ್ ನೌಕರರಿಗೆ ಹಾಗೂ ಸರಕಾರದಿಂದ ಸಹಾಯಾನುಧಾನ ಪಡೆಯುತ್ತಿರುವ ಶಿಕ್ಷಣ ಸಂಸ್ಥೆಗಳಲ್ಲಿ ಮತ್ತು ವಿಶ್ವ ವಿದ್ಯಾಲಯ ಗಳಲ್ಲಿ ಕಾಲಿಕ ವೇತನ ಶ್ರೇಣಿಯಲ್ಲಿರುವ ಪೂರ್ಣಾವಧಿ ನೌಕರರಿಗೆ ಈ ಆದೇಶ ಅನ್ವಯವಾಗುತ್ತದೆ.
ರಾಜ್ಯ ಸರಕಾರದ ನಿವೃತ್ತಿ ವೇತನದಾರರು, ಕುಟುಂಬ ನಿವೃತ್ತಿ ವೇತನದಾರರಿಗೆ ಮತ್ತು ರಾಜ್ಯದ ಸಂಚಿತ ನಿಧಿಯಿಂದ ನಿವೃತ್ತಿ ವೇತನ ಮತ್ತು ಕುಟುಂಬ ನಿವೃತ್ತಿ ವೇತನವನ್ನು ಪಡೆಯುತ್ತಿರುವ ಅನುದಾನಿತ ಶಿಕ್ಷಣ ಸಂಸ್ಥೆಗಳ ನಿವೃತ್ತಿ ವೇತನದಾರರು, ಕುಟುಂಬ ನಿವೃತ್ತಿ ವೇತನದಾರರಿಗೆ ಹಾಲಿ ಲಭ್ಯವಿರುವ ತುಟ್ಟಿಭತ್ತೆಯ ದರವನ್ನು ಮೂಲ ನಿವೃತ್ತಿ ವೇತನ, ಕುಟುಂಬ ನಿವೃತ್ತಿ ವೇತನದ ಶೇ.36ರಿಂದ ಶೇ.40.25ಕ್ಕೆ ಹೆಚ್ಚಿಸಿ ಜುಲೈ 1ರಿಂದ ಅನ್ವಯವಾಗುವಂತೆ ಮಂಜೂರು ಮಾಡಿ ರಾಜ್ಯ ಸರಕಾರ ಆದೇಶಿಸಿದೆ.