ರಾಜ್ಯದಲ್ಲಿ ಹದಗೆಟ್ಟ ಕಾನೂನು ಸುವ್ಯವಸ್ಥೆ ರಾಜ್ಯಪಾಲರಿಗೆ ಬಿಜೆಪಿ ಮನವಿ

Update: 2016-10-21 18:33 GMT

ಬೆಂಗಳೂರು, ಅ. 21: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದಿದ್ದು, ಅಮಾಯಕರ ಕೊಲೆ, ದರೋಡೆ ಪ್ರಕರಣಗಳ ಹಿನ್ನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಸೂಕ್ತ ಕ್ರಮ ಕೈಗೊಳ್ಳುವಂತೆ ರಾಜ್ಯ ಸರಕಾರಕ್ಕೆ ನಿರ್ದೇಶನ ನೀಡಬೇಕೆಂದು ಆಗ್ರಹಿಸಿ ಬಿಜೆಪಿ ನಿಯೋಗ ರಾಜ್ಯಪಾಲರಿಗೆ ಮನವಿ ಸಲ್ಲಿಸಿ

ಶುಕ್ರವಾರ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ನೇತೃತ್ವದ ನಿಯೋಗ ರಾಜಭವನಕ್ಕೆ ಭೇಟಿ ನೀಡಿ ರಾಜ್ಯಪಾಲ ವಜೂಭಾಯಿ ವಾಲಾ ಅವರನ್ನು ಭೇಟಿ ಮಾಡಿ ಸುಮಾರು 30ನಿಮಿಷಕ್ಕೂ ಹೆಚ್ಚು ಕಾಲ, ರಾಜ್ಯದ ಕಾನೂನು ಸುವ್ಯವಸ್ಥೆ ಕುರಿತು ಸಮಾಲೋಚನೆ ನಡೆಸಿತು.ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಯಡಿಯೂರಪ್ಪ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಸಿಎಂ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಪರಮೇಶ್ವರ್ ಇದರ ನೈತಿಕ ಹೊಣೆ ಹೊರಬೇಕೆಂದು ಆಗ್ರಹಿಸಿದರು.
ರಾಜ್ಯದಲ್ಲಿ ಪ್ರಾಮಾಣಿಕ ಪೊಲೀಸ್ ಅಧಿಕಾರಿಗಳು ನಿರ್ಭೀತಿಯಿಂದ ಕೆಲಸ ಮಾಡಲು ಸರಕಾರ ಅವಕಾಶ ನೀಡುತ್ತಿಲ್ಲ. ಹೀಗಾಗಿಯೇ ಕೆಲ ಅಧಿಕಾರಿಗಳು ರಾಜೀನಾಮೆ ನೀಡುತ್ತಿದ್ದು, ಮತ್ತೆ ಕೆಲವರು ಆತ್ಮಹತ್ಯೆ ಹಾದಿ ಹಿಡಿದಿದ್ದಾರೆ ಎಂದು ಇತ್ತೀಚಿನ ಕೆಲ ಪ್ರಕರಣಗಳನ್ನು ಅವರು ಉಲ್ಲೇಖಿಸಿದರು.

ರಾಜ್ಯದಲಿನ ಇತ್ತೀಚಿನ ವಿದ್ಯಮಾನಗಳನ್ನು ರಾಜ್ಯಪಾಲರ ಗಮನಕ್ಕೆ ತಂದಿದ್ದೇವೆ. ಹೆಚ್ಚುತ್ತಿರುವ ಕೊಲೆ ಪ್ರಕರಣಗಳು, ಮಹಿಳೆಯರ ಮೇಲಿನ ಹಲ್ಲೆ, ದೌರ್ಜನ್ಯ ಪ್ರಕರಣಗಳು ಸೇರಿ ಹಲವು ಪ್ರಕರಣಗಳಬಗ್ಗೆ ಅವರಿಗೆ ಮನವರಿಕೆ ಮಾಡಿದ್ದು, ರಾಜ್ಯಪಾಲರು ಸರಕಾರಕ್ಕೆ ಸೂಕ್ತ ನಿರ್ದೇಶನ ನೀಡುವ ಭರವಸೆ ನೀಡಿದ್ದಾರೆ ಎಂದರು.ನ್‌ಐಎಗೆ ವಹಿಸಿ: ಆರೆಸ್ಸೆಸ್ ಕಾರ್ಯಕರ್ತ ರುದ್ರೇಶ್ ಹತ್ಯೆ ಪ್ರಕರಣ ನಡೆದ ನಾಲ್ಕೈದು ದಿನಗಳು ಕಳೆದರೂ ಪೊಲೀಸರು ಆರೋಪಿಗಳನ್ನು ಬಂಧಿಸಿಲ್ಲ. ಆ ಹಿನ್ನೆಲೆಯಲ್ಲಿ ಪ್ರಕರಣವನ್ನು ಭೇದಿಸಲು ರಾಷ್ಟ್ರೀಯ ತನಿಖಾ ದಳ(ಎನ್‌ಐಎ)ಕ್ಕೆ ವಹಿಸಬೇಕು ಎಂದು ಅವರು ಒತ್ತಾಯಿಸಿದರು.
ರಾಜ್ಯದ ಜನತೆಗೆ ರಕ್ಷಣೆಯೇ ಇಲ್ಲ. ಧರ್ಮ ಮತ್ತು ಸಂಸ್ಕೃತಿ ರಕ್ಷಣೆ ಕಾರ್ಯದಲ್ಲಿ ತೊಡಗಿರುವವರನ್ನು ಹಾಡಹಗಲೇ ಹತ್ಯೆ ಮಾಡಲಾಗುತ್ತಿದೆ. ಆದರೆ, ಅಮಾಯಕರ ವಿರುದ್ಧ ಸುಳ್ಳು ಮೊಕದ್ದಮೆ ದಾಖಲಿಸಲಾಗುತ್ತಿದೆ. ಆ ಮೂಲಕ ರಾಜ್ಯ ಸರಕಾರ ತುಘಲಕ್ ದರ್ಬಾರ್ ನಡೆಸುತ್ತಿದೆ ಎಂದು ಆಕ್ಷೇಪಿಸಿದರು.
ನಿಯೋಗದಲ್ಲಿ ವಿಪಕ್ಷ ನಾಯಕ ಜಗದೀಶ್ ಶೆಟ್ಟರ್, ಮಾಜಿ ಸಚಿವರಾದ ಅಶೋಕ್, ಸಿ.ಟಿ.ರವಿ, ಅರವಿಂದ ಲಿಂಬಾವಳಿ, ಸೋಮಶೇಖರ್, ಸಂಸದರ ಪಿ.ಸಿ.ಮೋಹನ್, ಶಾಸಕರಾದ ಎಸ್.ಆರ್.ವಿಶ್ವನಾಥ್, ವೈ.ಎ.ನಾರಾಯಣಸ್ವಾಮಿ, ವಿಜಯಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News