ತೀವ್ರ ವಿರೋಧದ ಮಧ್ಯೆಯೇ ಉಕ್ಕಿನ ಸೇತುವೆ ನಿರ್ಮಾಣಕ್ಕೆ ಕಾರ್ಯಾದೇಶ
ಬೆಂಗಳೂರು, ಅ. 22: ಜನ ಸಾಮಾನ್ಯರು ಹಾಗೂ ವಿಪಕ್ಷಗಳ ತೀವ್ರ ವಿರೋಧದ ಮಧ್ಯೆ ರಾಜ್ಯ ಸರಕಾರ ಇಲ್ಲಿನ ಬಸವೇಶ್ವರ ವೃತ್ತದಿಂದ ಹೆಬ್ಬಾಳ ಎಸ್ಟೀಮ್ ಮಾಲ್ ವರೆಗೆ ಉಕ್ಕಿನ ಸೇತುವೆ ನಿರ್ಮಾಣಕ್ಕೆ ಕಾರ್ಯಾದೇಶ ನೀಡಲಾಗಿದೆ.
ವಿವಾದಿತ ಉಕ್ಕಿನ ಸೇತುವೆ ನಿರ್ಮಾಣಕ್ಕೆ ಗುತ್ತಿಗೆ ಪಡೆದಿರುವ ಎಲ್‌ಆ್ಯಂಡ್‌ಟಿ ಕಂಪೆನಿಗೆ ವರ್ಕ್ ಆರ್ಡರ್ ನೀಡಿದ್ದು, ರಾಜ್ಯ ಸರಕಾರದ ಸೂಚನೆ ಹಿನ್ನೆಲೆಯಲ್ಲಿ ಬೆಂಗಳೂರು ಅಭಿವೃದ್ದಿ ಪ್ರಾಧಿಕಾರ 98 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿ ಆದೇಶ ಹೊರಡಿಸಿದೆ. ಅಲ್ಲದೆ, ನ.1ರಂದು ಉಕ್ಕಿನ ಸೇತುವೆ ನಿರ್ಮಾಣಕ್ಕೆ ಶುಂಕುಸ್ಥಾಪನೆ ನೆರವೇರಿಸಲಿದ್ದಾರೆ.
ಜನರ ತೆರಿಗೆ ಹಣದಲ್ಲಿ ಉಳ್ಳವರಿಗಾಗಿ ಉಕ್ಕಿನ ಸೇತುವೆ ನಿರ್ಮಾಣಕ್ಕೆ ಸರಕಾರ ಮುಂದಾಗಿದ್ದು, ಪರಿಸರ ನಾಶವಾಗಲಿದೆ ಎಂಬ ಆರೋಪಗಳು ಕೇಳಿಬಂದಿವೆ. ಆದರೆ, ಇದೀಗ ತರಾತುರಿಯಲ್ಲಿ ಉಕ್ಕಿನ ಸೇತುವೆ ನಿರ್ಮಾಣಕ್ಕೆ ಕಾರ್ಯಾದೇಶ ನೀಡಿರುವುದು ಅನುಮಾನ ಮೂಡಿಸಿದೆ.
ಉಕ್ಕಿನ ಸೇತುವೆ ನಿರ್ಮಾಣ ಮಾಡಿದರೆ 800ಮರಗಳನ್ನು ಕಡಿಯಬೇಕಾಗುತ್ತದೆ. ಅಲ್ಲದೆ, 1,300 ಕೋಟಿ ರೂ.ವೆಚ್ಚದಲ್ಲಿ ಸೇತುವೆ ನಿರ್ಮಿಸಲು ಕ್ರಿಯಾ ಯೋಜನೆ ರೂಪಿಸಿ, ಇದೀಗ ಅದರ ಅಂದಾಜು ವೆಚ್ಚ 1,800 ಕೋಟಿ ರೂ.ಗಳಿಗೆ ಏರಿಕೆಯಾಗಿದ್ದು, ದೊಡ್ಡ ಮೊತ್ತದ ಅವ್ಯವಹಾರ ನಡೆದಿದೆ ಎಂದು ಆರೋಪಿಸಲಾಗಿದೆ.
ವಿಮಾನ ನಿಲ್ದಾಣ ಮಾರ್ಗದಲ್ಲಿನ ಸಂಚಾರ ದಟ್ಟಣೆ ತಗ್ಗಿಸಿ, ಸುಗಮ ಸಂಚಾರದ ದೃಷ್ಟಿಯಿಂದ ಉಕ್ಕಿನ ಸೇತುವೆ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗಿದೆ. ಅಲ್ಲದೆ, ಈ ರಸ್ತೆಯಲ್ಲಿ ಸಂಚರಿಸಲು ಸುಂಕ ವಸೂಲಿ ಮಾಡಲಾಗುವುದು ಎಂದು ರಾಜ್ಯ ಸರಕಾರ ಸ್ಪಷ್ಟಣೆ ನೀಡಿದೆ.