ನ.10ರಂದು ಉಡುಪಿಯಲ್ಲಿ ಟಿಪ್ಪು ಜಯಂತಿ
Update: 2016-10-27 18:05 IST
ಉಡುಪಿ, ಅ.27: ನ.10ರಂದು ನಡೆಯುವ ಟಿಪ್ಪು ಜಯಂತಿ ಆಚರಣೆ ಕುರಿತಂತೆ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ನಡೆಯಿತು.
ನ.10ರಂದು ರಾಜ್ಯಾದ್ಯಂತ ಟಿಪ್ಪು ಜಯಂತಿಯನ್ನು ಆಚರಿಸಲಾಗುತ್ತಿದ್ದು, ಜಿಲ್ಲಾಮಟ್ಟದಲ್ಲಿ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಡೆಯುವ ಕಾರ್ಯಕ್ರಮವನ್ನು ಉಡುಪಿಯ ಲಯನ್ಸ್ ಭವನದಲ್ಲಿ ಏರ್ಪಡಿಸುವಂತೆ ಸೂಚಿಸಿದ ಸಚಿವರು, ಟಿಪ್ಪು ಕುರಿತು ವಿಶೇಷ ಉಪನ್ಯಾಸ ಏರ್ಪಡಿಸುವಂತೆ ತಿಳಿಸಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಿ.ಎಂ. ರವಿಕುಮಾರ್, ಜಿಲ್ಲಾ ಮುಸ್ಲಿಂ ಒಕ್ಕೂಟದ ಅಧ್ಯಕ್ಷ ಅಬ್ದುಲ್ ರೆಹಮಾನ್ ಹಾಗೂ ಇತರೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಅಪರ ಜಿಲ್ಲಾಧಿಕಾರಿ ಅನುರಾಧಾ ಸ್ವಾಗತಿಸಿ, ವಂದಿಸಿದರು.