ಮಡಿಕೇರಿ: ಜಿಲ್ಲಾಡಳಿತದಿಂದ ರಾಷ್ಟ್ರೀಯ ಸಂಕಲ್ಪ ದಿನಾಚರಣೆ
ಮಡಿಕೇರಿ ಅ.31: ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತದ ವತಿಯಿಂದ ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರ ಪುಣ್ಯಸ್ಮರಣೆ ಅಂಗವಾಗಿ ರಾಷ್ಟ್ರೀಯ ಸಂಕಲ್ಪ ದಿನಾಚರಣೆ ಮತ್ತು ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮ ದಿನಾಚರಣೆ ಅಂಗವಾಗಿ ರಾಷ್ಟ್ರೀಯ ಏಕತಾ ದಿನಾಚರಣೆ ನಡೆಯಿತು. ರಾಷ್ಟ್ರೀಯ ಸಂಕಲ್ಪದಿನ
ದ ಮಹತ್ವದ ಬಗ್ಗೆ ಮಾತನಾಡಿದ ವಕೀಲರಾದ ಎಂ.ಎ. ನಿರಂಜನ್, ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರು ಪ್ರಧಾನಮಂತ್ರಿಯಾಗಿ ಹಲವು ಆದರ್ಶ, ಮಾದರಿ ಆಡಳಿತ ನೀಡುವ ಮೂಲಕ ಜನಮೆಚ್ಚುಗೆಗೆ ಪಾತ್ರರಾಗಿದ್ದರು. ಬ್ಯಾಂಕುಗಳ ರಾಷ್ಟ್ರೀಕರಣ ಸೇರಿದಂತೆ 18 ಅಂಶಗಳ ಕಾರ್ಯಕ್ರಮಗಳನ್ನು ಜಾರಿಗೊಳಿಸುವ ಮೂಲಕ ಇಡೀ ದೇಶದಲ್ಲಿ ಶ್ರೀ ಸಾಮಾನ್ಯರಿಗೆ ಸರಕಾರದ ಸೌಲಭ್ಯಗಳು ತಲುಪುವಂತೆ ಮಾಡಿದರು. ಇದರಿಂದ ರಾಷ್ಟ್ರದ ಅಭಿವೃದ್ಧಿಗೆ ತಮ್ಮದೇ ಆದ ಕೊಡುಗೆ ನೀಡಿದರು ಎಂದು ಸ್ಮರಿಸಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಎಂ.ಸತೀಶ್‌ಕುಮಾರ್ ಅವರು ಮಾತನಾಡಿ, ಇಂದಿರಾ ಗಾಂಧಿ ಮತ್ತು ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜೀವನ ಚರಿತ್ರೆಯನ್ನು ಪ್ರತಿಯೊಬ್ಬರೂ ಅಧ್ಯಯನ ಮಾಡುವಂತಾಗಬೇಕು. ಅವರು ಜಾರಿಗೊಳಿಸಿದ ಕಾರ್ಯಕ್ರಮಗಳ ಬಗ್ಗೆ ಮನನ ಮಾಡಬೇಕು ಎಂದು ತಿಳಿಸಿದರು. ರಾಷ್ಟ್ರೀಯ ಸಂಕಲ್ಪ ದಿನಾಚರಣೆ ಅಂಗವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಏರ್ಪಡಿಸಲಾಗಿದ್ದ ರಾಷ್ಟ್ರೀಯ ಐಕ್ಯತಾ ಗೀತೆಗಳನ್ನು ರವಿ ಭೂತನಕಾಡು ಅವರು ಹಾಡಿದರು. ಈ ಸಂದರ್ಭದಲ್ಲಿ ಉಪ ವಿಭಾಗಾಧಿಕಾರಿ ಡಾ.ನಂಜುಂಡೇಗೌಡ, ಬಿಸಿಎಂ ಇಲಾಖೆ ಅಧಿಕಾರಿ ಕೆ.ವಿ. ಸುರೇಶ್, ಜಿಪಂ ಯೋಜನಾ ನಿರ್ದೇಶಕ ಸಿದ್ದಲಿಂಗಮೂರ್ತಿ, ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ರಾಜಶೇಖರ್, ಜಿಲ್ಲಾ ಉದ್ಯೋಗ ವಿನಿಮಯ ಅಧಿಕಾರಿ ಸಿ.ಜಗನ್ನಾಥ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಮಣಜೂರು ಮಂಜುನಾಥ್, ತಹಶೀಲ್ದಾರ್ ಕುಸುಮಾ, ತಾಪಂ ಇಒ ಜೀವನ್ ಕುಮಾರ್, ಜಿಲ್ಲಾಧಿಕಾರಿ ಕಚೇರಿಯ ಶಿರಸ್ತೇದಾರ್ ಪ್ರಕಾಶ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ಹಾಜರಿದ್ದರು.