ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿಗೆ ಬಗ್ಗೆ ಸಾರ್ವಜನಿಕ ಅಭಿಪ್ರಾಯ ಸಂಗ್ರಹ: ಡಾ.ಕೆ.ಜಿ.ಜಗದೀಶ್

Update: 2016-11-02 14:55 GMT

ಮಂಗಳೂರು,ನ.2: ಜಿಲ್ಲೆಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಸಂಬಂಧಿಸಿದಂತೆ ಜಿಲ್ಲೆಯ ಜನರ ಅಭಿಪ್ರಾಯ ಸಂಗ್ರಹ ಮಾಡಿ ಮುಂದಿನ ಕಾರ್ಯ ಯೋಜನೆ ರೂಪಿಸುವ ಇಂಗಿತ ಹೊಂದಿರುವುದಾಗಿ ಜಿಲ್ಲಾಧಿಕಾರಿ ಡಾ.ಕೆ.ಜಿ.ಜಗದೀಶ್ ತಿಳಿಸಿದ್ದಾರೆ.

ಕೆನರಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ವತಿಯಿಂದ ಬುಧವಾರ ಜಿಲ್ಲೆಯ ಅಭಿವೃದ್ಧಿಗೆ ಸಂಬಂಧಿಸಿದಂತೆ ಸಂಘದ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡ ಸಂವಾದ ಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡುತ್ತಿದ್ದರು.

ಜಿಲ್ಲಾ ಮಟ್ಟದಲ್ಲಿ ನವೆಂಬರ್ 16ರಂದು ಪ್ರವಾಸೋದ್ಯಮದ ಅಭಿವೃದ್ಧಿಯ ಬಗ್ಗೆ ಕಾರ್ಯಗಾರ ಹಮ್ಮಿಕೊಂಡಿದ್ದು, ಈ ಬಗ್ಗೆ ಆಸಕ್ತಿ ಹೊಂದಿರುವ ಜಿಲ್ಲೆಯ ಜನರು ಭಾಗವಹಿಸಬಹುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಜಿಲ್ಲೆಯಲ್ಲಿ ಪ್ರಾಕೃತಿಕವಾಗಿ ಇರುವ ಸಂಪತ್ತನ್ನು ಬಳಸಿಕೊಂಡು ಪ್ರವಾಸೋದ್ಯಮವನ್ನು ಅಭಿವೃದ್ಧಿ ಪಡಿಸಲು ಸಾಕಷ್ಟು ಅವಕಾಶವಿದೆ. ಈ ನಿಟ್ಟಿನಲ್ಲಿ ಹೆಚ್ಚಿನ ಗಮನಹರಿಸಿದಂತೆ ಕಾಣುವುದಿಲ್ಲ. ಈ ಬಗ್ಗೆ ಕಾರ್ಯಯೋಜನೆ ಹಮ್ಮಿಕೊಳ್ಳಲು ಅವಕಾಶವಿದೆ. ಜಿಲ್ಲೆಯ ಬೆಳವಣಿಗೆಗೆ ಪೂರಕವಾಗಿ ಇಲ್ಲಿನ ಮೂಲಭೂತ ಸೌಕರ್ಯಗಳ ಅಭಿವೃದ್ಧಿಯ ಕಡೆಗೆ ಗಮನಹರಿಸಬೇಕಾಗಿದೆ. ಜಿಲ್ಲೆಯ ಅಭಿವೃದ್ಧಿ, ಸ್ವಚ್ಛತಾ ಅಭಿಯಾನದಂತಹ ಕಾರ್ಯಕ್ರಮದಲ್ಲಿ ಸಾರ್ವಜನಿಕ ಸಹಭಾಗಿತ್ವ ಅತೀ ಅಗತ್ಯ. ಮಂಗಳೂರು ಮಹಾ ನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಪ್ರಸಕ್ತ ಕಸ ವಿಂಗಡಣೆ ನಡೆಯುತ್ತಿದ್ದರೂ ವೈಜ್ಞಾನಿಕವಾಗಿ ಕಸ ವಿಂಗಡಣೆಯಾಗುತ್ತಿಲ್ಲ. ಮುಂದಿನ ಹಂತದಲ್ಲಿ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಸಂವಾದದಲ್ಲಿ ತಿಳಿಸಿದರು.

ಸಂವಾದದ ಪ್ರಮುಖ ಅಂಶಗಳು

ಮಂಗಳೂರು ವಿಮಾನ ನಿಲ್ದಾಣದ ರನ್ ವೇ ವಿಸ್ತರಣೆಗೆ ಹೆಚ್ಚುವರಿ 100 ಎಕರೆ ಭೂಸ್ವಾಧೀನಕ್ಕೆ ಸರಕಾರಕ್ಕೆ ಪ್ರಸ್ತಾವನೆ.

ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಹಾಗೂ ನೀರಿನ ನಿರ್ವಹಣೆಗೆ ಪಶ್ಚಿಮ ವಾಹಿನಿ ಯೋಜನೆಯ ಬಗ್ಗೆ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ.

ಫೆಬ್ರವರಿ ತಿಂಗಳಲ್ಲಿ ಲೇಡಿಗೊಶನ್ ಆಸ್ಪತ್ರೆ ಕಾಮಗಾರಿ ಪೂರ್ಣ.

ಮುಂದಿನ ಹಂತದಲ್ಲಿ ಜಿಲ್ಲಾ ಆಸ್ಪತ್ರೆ (ವೆನ್‌ಲಾಕ್) ನವೀಕರಣ ಯೋಜನೆ.

ಕಾನೂನು ತೊಡಕು ನಿವಾರಣೆಯಾದರೆ ಜಿಲ್ಲಾಧಿಕಾರಿ ಸಂಕೀರ್ಣ ಪಡೀಲ್‌ಗೆ ಸ್ಥಳಾಂತರ.

ಜಿಲ್ಲಾಧಿಕಾರಿ ಕಚೇರಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆಯ ಸಮಸ್ಯೆಯ ಬಗ್ಗೆ ತುರ್ತು ಗಮನ.

ಮಂಗಳೂರು ರೈಲು ನಿಲ್ದಾಣ ವಿಶ್ವ ದರ್ಜೆಗೆ ಏರಿಸುವ ಬಗ್ಗೆ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ ಜಿಲ್ಲಾಧಿಕಾರಿ ಕೆ.ಜಿ.ಜಗದೀಶ್ ಜಿಲ್ಲೆಯ ಅಭಿವೃದ್ಧಿಯ ಬಗ್ಗೆ ಜನರಲ್ಲಿ ಸಾಕಷ್ಟು ಜಾಗೃತಿ ಇದೆ. ಯೋಜನೆಯ ಅನುಷ್ಠಾನಗೊಳಿಸಲು ಸಾರ್ವಜನಿಕರ ಸಹಕಾರ ಅಗತ್ಯ. ಸಮಾಜದ ದುರ್ಬಲರ ಏಳಿಗೆಗೆ ಸರಕಾರದ ಇಲಾಖೆಗಳೊಂದಿಗೆ ಸಾರ್ವಜನಿಕರು ಕೈ ಜೋಡಿಸಬೇಕು ಎಂದು ಕರೆ ನೀಡಿದರು.

ಕೆಸಿಸಿಐನ ಅಧ್ಯಕ್ಷ ಜೀವನ್ ಸಲ್ದಾನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಜಿಲ್ಲೆಯಲ್ಲಿ ಕೈಗೊಳ್ಳಬಹುದಾದ ಕೆಲವು ಯೋಜನೆಗಳ ಬಗ್ಗೆ ವಿವರ ನೀಡಿದರು.

ವೇದಿಕೆಯಲ್ಲಿ ಕೆಸಿಸಿಐನ ಪದಾಧಿಕಾರಿಗಳಾದ ಜೆ.ಪಿ.ಮಿನೇಜಸ್, ವತಿಕಾ ಪೈ, ಶ್ರೀನಿವಾಸ್ ಎಸ್.ಕಾಮತ್ ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News