×
Ad

ಪರಿಶಿಷ್ಟ ಜಾತಿ, ಪಂಗಡದವರಿಗೆ ವಿಶೇಷ ಆರೋಗ್ಯ ಜಾಗೃತಿ ಅಭಿಯಾನ ಚಾಲನೆ

Update: 2016-11-02 22:11 IST

ಚಿಕ್ಕಮಗಳೂರು, ನ.2: ಆರೋಗ್ಯ ಸಮಸ್ಯೆಯಿಂದ ಮುಕ್ತರಾಗಲು ದಿನನಿತ್ಯದ ಚಟುವಟಿಕೆಗಳಲ್ಲಿ ಆರೋಗ್ಯವನ್ನು ವೃದ್ಧಿಸಿಕೊಳ್ಳುವ ಮನೋಜ್ಞಾನ ಬೆಳೆಸಿಕೊಳ್ಳುವುದು ಇಂದಿನ ದಿನಗಳಲ್ಲಿ ಅತ್ಯಗತ್ಯ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ತಿಳಿಸಿದರು.
   ಅವರು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇವುಗಳ ವತಿಯಿಂದ ಆಯೋಜಿಸಿದ್ಧ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಸಮುದಾಯದವರಿಗೆ ಅರಿವು ಮೂಡಿಸಲು ಆಯೋಜಿಸಿರುವ ವಿಶೇಷ ಆರೋಗ್ಯ ಜಾಗೃತಿ ಅಭಿಯಾನ ಹಾಗೂ ಬೀದಿ ನಾಟಕಕ್ಕೆ ಚಾಲನೆ ನೀಡಿ ಮಾತನಾಡಿದರು.
ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಸರ್ವಾಂಗೀಣ ಅಭಿವೃದ್ಧಿಗೆ ಮುಂದಾಗಿರುವ ಈ ದಿನಗಳಲ್ಲಿ ಅವರು ತಮ್ಮ ಆರೋಗ್ಯದ ಕಡೆ ಕಾಳಜಿ ವಹಿಸುವುದು ಅತೀ ಮುಖ್ಯವಾಗಿದೆ ಎಂದರು.
ಆರೋಗ್ಯಕ್ಕೆ ಸಂಬಂಧಿಸಿದ ಬೀದಿ ನಾಟಕಗಳಿಂದ ಜನರಲ್ಲಿ ಅರಿವು ಮೂಡಿಸುವುದರಿಂದ ಗ್ರಾಮೀಣ ಭಾಗದ ಕೂಲಿ ಕಾರ್ಮಿಕರು ಹಾಗೂ ಸಾರ್ವಜನಿಕರು ತಮ್ಮ ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸುವುದು ಸಾಧ್ಯವಾಗುತ್ತದೆ ಎಂದು ತಿಳಿಸಿದರು.
ವಾರ್ತಾಧಿಕಾರಿ ಮಂಜುನಾಥ್ ಮಾತನಾಡಿ, ವಿಶೇಷವಾಗಿ ಸಿದ್ಧಪಡಿಸಲಾದ 5 ಸಂಚಾರ ವಾಹನಗಳು ಹಳ್ಳಿಗಳಿಗೆ ಸಂಚರಿಸಿ ಜಾಗೃತಿ ಮೂಡಿಸಲಿವೆ. ಪ್ರತಿಯೊಂದು ವಾಹನದಲ್ಲಿ ಬೀದಿನಾಟಕ ಕಲಾತಂಡಗಳಿಂದ ಬೀದಿನಾಟಕ, ಸಾಕ್ಷ್ಯಚಿತ್ರ ಪ್ರದರ್ಶನ ಮತ್ತು ಕರಪತ್ರಗಳ ವಿತರಣಾ ವ್ಯವಸ್ಥೆ ಹಾಗೂ ಸಮುದಾಯ ಸಭೆಗಳನ್ನು ಏರ್ಪಡಿಸುವುದರ ಮೂಲಕ ವಾಜಪೇಯಿ ಆರೋಗ್ಯ ಶ್ರೀ, ರಾಜೀವ್ ಆರೋಗ್ಯ ಭಾಗ್ಯ, ಜ್ಯೋತಿ ಸಂಜೀವಿನಿ, ರಾಷ್ಟ್ರೀಯ ಸ್ವಾಸ್ಥ್ಯ ಬಿಮಾ ಯೋಜನೆ, ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಕಾರ್ಯಕ್ರಮ, ಇಂದಿರಾ ಸುರಕ್ಷಾ ಯೋಜನೆ ಮತ್ತು ಮುಖ್ಯಮಂತ್ರಿ ಹರೀಶ್ ಸಾಂತ್ವನ ಯೋಜನೆಗಳ ಬಗ್ಗೆ ಅರಿವು ಮೂಡಿಸಲಾಗುವುದು.
ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್
ನ ನೋಡಲ್ ಅಧಿಕಾರಿ ಕುಮಾರ್ ಮಾತನಾಡಿ, ಜಿಲ್ಲೆಯ ಚಿಕ್ಕಮಗಳೂರು ತಾಲೂಕಿನ 70 ಗ್ರಾಮಗಳಲ್ಲಿ ನ.1ರಿಂದ 7ರವರೆಗೆೆ ಆ
ರೋಗ್ಯ ಜಾಗೃತಿ ಅಭಿಯಾನ ನಡೆಯಲಿದೆ. ಅಭಿಯಾನದ ಅಂಗವಾಗಿ ನ.8ರಂದು ಅರಳುಗುಪ್ಪೆ ಮಲ್ಲೇಗೌಡ ಜಿಲ್ಲಾ ಆಸ್ಪತ್ರೆಯಲ್ಲಿ ಬೆಳಗ್ಗೆ 9ರಿಂದ 3ರವರೆಗೆ ಆರೋಗ್ಯ ತಪಾಸಣಾ ಶಿಬಿರ ಜರಗಲಿದೆ. ಈ ಶಿಬಿರದ ಮೂಲಕ ಹೆಚ್ಚಿನ ಚಿಕಿತ್ಸೆಗಾಗಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಿಸಿ ಉಚಿತ ಚಿಕಿತ್ಸೆ ದೊರಕಿಸುವುದು ಅಭಿಯಾನದ ಮುಖ್ಯ ಉದ್ದೇಶವಾಗಿದೆ ಎಂದರು. ಈ ಸಂದರ್ಭದಲ್ಲಿ ಶಾಸಕ ಸಿ.ಟಿ ರವಿ, ಎಂಎಲ್‌ಸಿ ಎಂ.ಕೆ ಪ್ರಾಣೇಶ್, ಜಿಲ್ಲಾಧಿಕಾರಿ ಜಿ. ಸತ್ಯವತಿ ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News