ಎಂಇಎಸ್ ನಿಷೇಧ, ಅಮಾನತಿಗೆ ಕನ್ನಡ ಹೋರಾಟಗಾರರ ಆಗ್ರಹ

Update: 2016-11-03 13:46 GMT

 ಬೆಂಗಳೂರು, ನ. 3: ಕನ್ನಡ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿರುವ ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂಇಎಸ್)ಯನ್ನು ಈ ಕೂಡಲೇ ನಿಷೇಧಿಸಲು ರಾಜ್ಯ ಸರಕಾರ ಮುಂದಾಗಬೇಕೆಂದು ವಿವಿಧ ಸಂಘಟನೆಗಳು ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು. ಗುರುವಾರ ನಗರದ ಮೈಸೂರು ಬ್ಯಾಂಕ್ ವೃತ್ತದ ಬಳಿ ಕನ್ನಡ ಪರ ಒಕ್ಕೂಟದ ಕಾರ್ಯಕರ್ತರು, ಎಂಇಎಸ್ ಪ್ರತಿಕೃತಿ ಸುಟ್ಟು ಹಾಕುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು. ಅದೇ ರೀತಿ, ಪುರಭವನದ ಎದುರು ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಎಂಇಎಸ್ ನಿಷೇಧಿಸಬೇಕೆಂದು ಘೋಷಣೆ ಕೂಗಿದರು.

ಪ್ರತಿಭಟನೆಯ ನೇತೃತ್ವವಹಿಸಿ ಮಾತನಾಡಿದ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್, ಕನ್ನಡ ರಾಜೋತ್ಸವವನ್ನು ಆಚರಿಸುವ ಬದಲಾಗಿ ಕರಾಳ ದಿನ ಆಚರಿಸಿದ ಎಂಇಎಸ್ ಸದಸ್ಯರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ, ಗಡಿಪಾರು ಮಾಡಬೇಕೆಂದು ಒತ್ತಾಯಿಸಿದರು.

ಅಲ್ಲದೆ, ಕರಾಳ ದಿನಾಚರಣೆಯಲ್ಲಿ ಪಾಲ್ಗೊಂಡ ಬೆಳಗಾವಿ ಮೇಯರ್ ಮತ್ತು ಉಪವೆುೀಯರ್ ಅವರ ವಿರುದ್ಧ ಸರಕಾರ ಕ್ರಮ ಕೈಗೊಳ್ಳಬೇಕು.ಅದೇ ರೀತಿ, ಬೆಳಗಾವಿ ಪಾಲಿಕೆಯನ್ನು ಸೂಪರ್ ಸೀಡ್ ಮಾಡಬೇಕೆಂದು ಪಟ್ಟು ಹಿಡಿದರು.

ಕರವೇ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಅಧ್ಯಕ್ಷ ನಾರಾಯಣಗೌಡ, ಕನ್ನಡ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿ ಕನ್ನಡಿಗರ ಮೇಲೆ ದೌರ್ಜನ್ಯ, ದಬ್ಬಾಳಿಕೆ ನಡೆಸುತ್ತಿರುವ ಎಂಇಎಸ್ ಸಂಘಟನೆ ನಿಷೇಧಿಸಬೇಕು.ಇಲ್ಲದಿದ್ದಲ್ಲಿ, ಹೋರಾಟ ತೀವ್ರಗೊಳಿಸಲಾಗುವುದೆಂದು ಎಚ್ಚರಿಕೆ ನೀಡಿದರು.

ಶಾಸಕ ವಿರುದ್ಧ ಕ್ರಮ: ಕರಾಳ ದಿನ ಆಚರಣೆಯಲ್ಲಿ ಪಾಲ್ಗೊಂಡಿರುವ ಶಾಸಕ ಸಂಭಾಜಿ ಪಾಟೀಲ್ ಅವರ ಮೇಲೆ ಕಠಿಣ ಕಾನೂನು ಕ್ರಮ ಜರುಗಿಸಬೇಕೆಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸಾ.ರಾ.ಗೋವಿಂದು, ಕರವೇ ಬಣದ ಪ್ರವೀಣ್‌ಕುಮಾರ್ ಶೆಟ್ಟಿ, ಗಿರೀಶ್ ಗೌಡ ಸೇರಿ ಪ್ರಮುಖರು ಹಾಜರಿದ್ದರು.

ಕರವೇಯಿಂದ ಸಿಎಂಗೆ ಮನವಿ

ಕರವೇ ಅಧ್ಯಕ್ಷ ನಾರಾಯಣ ಗೌಡ ವಿಧಾನಸೌಧಕ್ಕೆ ಭೇಟಿ ನೀಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಕೆಲಕಾಲ ಮಾತುಕತೆ ನಡೆಸಿದರು. ಈ ವೇಳೆ ಎಂಇಎಸ್ ಕರಾಳ ದಿನ ಆಚರಣೆ ಸಂಬಂಧ ಸೂಕ್ತ ಕ್ರಮಕ್ಕೆ ಆಗ್ರಹಿಸಿದರು.

 ಎಂಇಎಸ್‌ಅನ್ನು ರಾಜ್ಯದಲ್ಲಿ ನಿಷೇಧಿಸಬೇಕು, ಬೆಳಗಾವಿ ಮಹಾನಗರ ಪಾಲಿಕೆಯನ್ನು ಸೂಪರ್ ಸೀಡ್ ಮಾಡಬೇಕು, ಕರಾಳ ದಿನಾಚರಣೆಯಲ್ಲಿ ಪಾಲ್ಗೊಂಡ ಶಾಸಕರು, ಮೇಯರ್, ಉಪಮೇಯರ್ ಅವರನ್ನ ಅಮಾನತು ಮಾಡಬೇಕೆಂದು ಸಿಎಂಗೆ ನಾರಾಯಣಗೌಡರು ಮನವಿ ಪತ್ರ ಸಲ್ಲಿಸಿದರು. ಸಿಎಂ ಭೇಟಿ ಬಳಿಕ ಮಾಧ್ಯಮಗಳಿಗೆ ಪ್ರತ್ಕಿರಿಯಿಸಿದ ಅವರು, ಎಂಇಎಸ್ ಧೋರಣೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಸೂಕ್ತ ಕ್ರಮಕ್ಕೆ ಆಗ್ರಹಿಸಿ ಸಿಎಂಗೆ ಮನವಿ ಸಲ್ಲಿಸಿದ್ದೇವೆ. ಸಿಎಂ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಬೆಳಗಾವಿ ಡಿಸಿಗೆ ವರದಿ ಕೇಳಿದ್ದೇವೆ. ಇಂದು ವರದಿ ಕೈ ಸೇರಲಿದೆ. ನಿಮ್ಮ ಭಾವನೆ ನಮಗೆ ಅರ್ಥವಾಗಲಿದೆ. ಇಂದು ವರದಿ ಕೈ ಸೇರಿದ ಬಳಿಕ ಸೂಕ್ತ ತೀರ್ಮಾನ ತೆಗೆದುಕೊಳ್ಳುವುದಾಗಿ ಸಿಎಂ ಭರವಸೆ ನೀಡಿದ್ದಾರೆ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News