ಆರೋಗ್ಯ ಸುಧಾರಣೆಯ ನಿಟ್ಟಿನಲ್ಲಿ ಸರಕಾರದಿಂದ ಹಲವು ಯೋಜನೆಗಳು: ಸಚಿವ ರಮಾನಾಥ ರೈ
ಪುತ್ತೂರು, ನ.5: ರಾಷ್ಟ್ರೀಯ ಗ್ರಾಮೀಣ ಆರೋಗ್ಯ ಆಭಿಯಾನ ಯೋಜನೆ ಜಾರಿಗೆ ಬಂದ ಬಳಿಕ ಶಿಶು ಹಾಗೂ ತಾಯಂದಿರ ಮರಣ ಪ್ರಮಾಣ ಗಮನಾರ್ಹ ಕಡಿಮೆಯಾಗಿದ್ದು, ಆರೋಗ್ಯ ಸುಧಾರಣೆಯ ನಿಟ್ಟಿನಲ್ಲಿ ಸರಕಾರ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ.
ಪುತ್ತೂರು ತಾಲೂಕಿನ ಪಾಲ್ತಾಡಿ ಗ್ರಾಮದ ಮಮಜುನಾಥ ನಗರದಲ್ಲಿ ನೂತನವಾಗಿ ನಿರ್ಮಿಸಲಾದ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಶನಿವಾರ ಉದ್ಘಾಟಿಸಿ ಮಾತನಾಡಿದರು.
ಪ್ರತಿಯೊಬ್ಬರಿಗೂ ಸಾಮಾಜಿಕ ನ್ಯಾಯ ದೊರೆತರೆ ಮಾತ್ರ ಅಭಿವೃದ್ಧಿ ಸಾಧ್ಯ ಎಂದ ಅವರು ಪ್ರತಿಯೊಬ್ಬರಿಗೂ ಹುಟ್ಟೂರಿನ ಮೇಲೆ ಅಭಿಮಾನ ಇದ್ದೇ ಇರುತ್ತದೆ. ಈ ನಿಟ್ಟಿನಲ್ಲಿ ಸಂಸದ ನಳಿನ್ ಕುಮಾರ್ ಕಟೀಲು ಹುಟ್ಟೂರಿನಲ್ಲಿ ಹಲವು ಅಭಿವೃದ್ದಿ ಕಾರ್ಯಗಳನ್ನು ನಡೆಸಿದ್ದಾರೆ. ತಾನೂ ಕೂಡ ಬಂಟ್ವಾಳದಲ್ಲಿ ಹಲವು ಅಭಿವೃದ್ದಿ ಕಾರ್ಯಗಳನ್ನು ನಡೆಸಿದ್ದೇನೆ. ಅಭಿವೃದ್ಧಿ ಕಾರ್ಯದಲ್ಲಿ ಯಾವುದೇ ರಾಜಕೀಯ ಇಲ್ಲ ಎಂದು ಅವರು ತಿಳಿಸಿದರು.
ಸಂಸದ ನಳಿನ್ ಕುಮಾರ್ ಕಟೀಲ್ ಮಾತನಾಡಿ, ಕುಗ್ರಾಮವಾಗಿದ್ದ ಪಾಲ್ತಾಡಿ ಹಿಂದೂ ಸೇವಾ ಪ್ರತಿಷ್ಠಾನದ ಚಿಂತನೆಯೊಂದಿಗೆ ಗ್ರಾಮವಿಕಾಸದ ಪಂಚಮುಖಿ ಕಾರ್ಯಗಳಾದ ಶಿಕ್ಷಣ,ಆರೋಗ್ಯ, ಆಹಾರ (ಕೃಷಿ), ಸಂಸ್ಕಾರ, ಮಹಿಳಾ ಅಭಿವೃದ್ಧಿ ಕಾರ್ಯಗಳ ಮೂಲಕ ಬೆಳವಣಿಗೆಯಾಗುತ್ತಿದೆ. ಸರಕಾರಗಳ ಅನುದಾನದ ಜೊತೆಗೆ ಸ್ವಯಂಸೇವಾ ಸಂಸ್ಥೆಗಳ ನೆರವಿನೊಂದಿಗೆ ಇಲ್ಲಿ ಅಭಿವೃದ್ದಿ ಕಾರ್ಯಗಳನ್ನು ನಡೆಸಲಾಗಿದೆ. ತನ್ನ ಗುರು ಬಿ.ಕೆ.ರಮೇಶ್ ಅವರ ಮಾರ್ಗದರ್ಶನದಲ್ಲಿ ಇನ್ನೂ ಹಲವು ಅಭಿವೃದ್ಧಿ ಕಾರ್ಯಗಳನ್ನು ನಡೆಸಲಾಗುವುದು ಎಂದರು.
ಸುಳ್ಯ ಶಾಸಕ ಎಸ್.ಅಂಗಾರ ಅಧ್ಯಕ್ಷತೆ ವಹಿಸಿದ್ದರು. ತಾಲೂಕು ಪಂಚಾಯತ್ ಅಧ್ಯಕ್ಷೆ ಭವಾನಿ ಚಿದಾನಂದ ಮತ್ತು ಸವಣೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಇಂದಿರಾ ಬಿ.ಕೆ. ಅತಿಥಿಗಳಾಗಿ ಮಾತನಾಡಿದರು.
ತಾಲೂಕು ಪಂಚಾಯತ್ ಉಪಾಧ್ಯಕ್ಷೆ ರಾಜೇಶ್ವರಿ ಕನ್ಯಾಮಂಗಲ, ತಾಲೂಕು ಆರೋಗ್ಯಾಧಿಕಾರಿ ಡಾ.ಅಶೋಕ್ ಕುಮಾರ್ ರೈ, ನೋಡಲ್ ಅಧಿಕಾರಿ ಡಾ.ರಾಜೇಶ್ ಬಿ.ವಿ., ಪ್ರಾಥಮಿಕ ಆರೋಗ್ಯ ಕೇಂದ್ರದ ಆರಂಭಿಕ ಸಮಿತಿ ಅಧ್ಯಕ್ಷ ಬಿ.ಕೆ.ರಮೇಶ್ ಇದ್ದರು.
ಪಾಲ್ತಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ದೀಪಕ್ ರೈ ಸ್ವಾಗತಿಸಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಮಕೃಷ್ಣ ರಾವ್ ವಂದಿಸಿದರು. ಜಯರಾಂ ನಿರೂಪಿಸಿದರು.