ಕೊಡಗಿನ ಅಭಿವೃದ್ಧಿಗೆ ಬದ್ಧಸಚಿವ ಸೀತಾರಾಮ್ ಭರವಸೆ
ಮಡಿಕೇರಿ, ನ.5: ಬಾಳುಗೋಡು ಗ್ರಾಮದ ಕೊಡವ ಸಮಾಜಗಳ ಒಕ್ಕೂಟದ ವತಿಯಿಂದ ನೂತನವಾಗಿ ನಿರ್ಮಿಸಿರುವ ಯುದ್ಧ ಸ್ಮಾರಕವನ್ನು ಜಿಲ್ಲಾ ಉಸ್ತುವಾರಿ ಸಚಿವ ಎಂ.ಆರ್.ಸೀತಾರಾಮ್ ಹಾಗೂ ಲೆಫ್ಟಿನೆಂಟ್ ಜನರಲ್(ನಿವೃತ್ತ) ಕೋದಂಡ ಎನ್.ಸೋಮಣ್ಣ ಶನಿವಾರ ಲೋಕಾರ್ಪಣೆ ಮಾಡಿದರು. ಬಾಳುಗೋಡು ಗ್ರಾಮದ ಕೊಡವ ಸಮಾಜಗಳ ಒಕ್ಕೂಟದ ಸಾಂಸ್ಕೃತಿಕ ಭವನದ ಬಳಿ ನಿರ್ಮಿಸಿರುವ ಹುತಾತ್ಮ ಯೋಧರ ಯುದ್ಧ ಸ್ಮಾರಕಕ್ಕೆ ಪುಷ್ಪಗುಚ್ಛವಿರಿಸಿ ಗೌರವ ನಮನ ಸಲ್ಲಿಸಿದರು. ಬಳಿಕ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಎಂ.ಆರ್.ಸೀತಾರಾಮ್, ಕೊಡಗು ಜಿಲ್ಲೆಯ ಅಭಿವೃದ್ಧಿಗೆ ಸರಕಾರ ಕಟಿ ಬದ್ಧವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಸರಕಾರ ಜಿಲ್ಲೆಯ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಿದೆ. ವಿಶೇಷ ಪ್ಯಾಕೇಜ್‌ನಡಿ ರಸ್ತೆ ಅಭಿವೃದ್ಧಿ ಸೇರಿದಂತೆ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ದೊರೆಯಲಿದೆ ಎಂದು ಸಚಿವರು ತಿಳಿಸಿದರು. ವೀರಾಜಪೇಟೆ-ಮಾಕುಟ್ಟ ಮುಖ್ಯ ರಸ್ತೆಯಿಂದ ಬಾಳುಗೋಡು ಕೊಡವ ಸಮಾಜಗಳ ಒಕ್ಕೂಟದ ಸಾಂಸ್ಕೃತಿಕ ಕೇಂದ್ರದವರೆಗೆ ರಸ್ತೆ ಅಭಿವೃದ್ಧಿ ಸೇರಿದಂತೆ ಜಿಲ್ಲೆಯ ನಾನಾ ರಸ್ತೆಗಳ ಅಭಿವೃದ್ಧಿಗೆ ಚಾಲನೆ ನೀಡಲಾಗುವುದು. ಜಿಲ್ಲೆಯ ರಸ್ತೆಗಳು ಹಾಗೂ ಅಭಿವೃದ್ಧಿ ಯೋಜನೆಗಳಿಗೆ ಸಂಬಂಧಿಸಿದಂತೆ ಹೆಚ್ಚಿನ ಅನುದಾನ ಒದಗಿಸಲಾಗುವುದು ಎಂದು ಸಚಿವರು ತಿಳಿಸಿದರು. ವೀರಾಜಪೇಟೆ ಶಾಸಕ ಕೆ.ಜಿ. ಬೋಪಯ್ಯ, ಮಡಿಕೇರಿ ಶಾಸಕ ಎಂ.ಪಿ. ಅಪ್ಪಚ್ಚುರಂಜನ್, ಬಾಳುಗೋಡು ಕೊಡವ ಸಮಾಜಗಳ ಒಕ್ಕೂಟದ ಅಧ್ಯಕ್ಷ ಕಳ್ಳಿಚಂಡ ವಿಷ್ಣು ಕಾರ್ಯಪ್ಪ, ಮಾಜಿ ಸಚಿವ ಎಂ.ಸಿ. ನಾಣಯ್ಯ, ಕೊಡವ ಸಮಾಜಗಳ ಒಕ್ಕೂಟದ ಮಾಜಿ ಅಧ್ಯಕ್ಷ ದಾದಾ ಬೆಳ್ಯಪ್ಪ, ವಿಧಾನ ಪರಿಷತ್ ಸದಸ್ಯರಾದ ಸುನೀಲ್ ಸುಬ್ರಮಣಿ ಹಾಗೂ ವೀಣಾ ಅಚ್ಚಯ್ಯ, ಜಿಲ್ಲಾಧಿಕಾರಿ ಡಾ.ರಿಚರ್ಡ್ ವಿನ್ಸೆಂಟ್ ಡಿಸೋಜ ಉಪಸ್ಥಿತರಿದ್ದರು.
ಬಿ.ಎಸ್. ತಮ್ಮಯ್ಯ, ತಹಶೀಲ್ದಾರ್ ಮಹದೇವಸ್ವಾಮಿ, ತಾಪಂ ಇಒ ಪಡ್ನೇಕರ್, ಕೊಡವ ಸಮಾಜದ ಪದಾಧಿಕಾರಿಗಳು ಮತ್ತಿತರರಿದ್ದರು.