ನ.10ರಂದು ಟಿಪ್ಪು ಸುಲ್ತಾನ್ ಜಯಂತಿ

Update: 2016-11-05 17:57 GMT

ಮಂಗಳೂರು , ನ.5: ಟಿಪ್ಪು ಸುಲ್ತಾನ್ ಜಯಂತಿ ಕಾರ್ಯಕ್ರಮ ನವೆಂಬರ್ 10ರಂದು ಮಂಗಳೂರಿನಲ್ಲಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ.

ಈ ಕುರಿತು ಜಿಲ್ಲಾಧಿಕಾರಿ ಡಾ.ಕೆ.ಜಿ.ಜಗದೀಶ್ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಪೂರ್ವಭಾವಿ ಸಭೆ ನಡೆಯಿತು. ಸಭೆಯಲ್ಲಿ ಜಿಲ್ಲಾಧಿಕಾರಿಗಳು ಮಾತನಾಡಿ, ಟಿಪ್ಪು ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಬೇಕಿದೆ. ರಾಜ್ಯ ಸರಕಾರದ ವತಿಯಿಂದ ಬೇರೆ ಬೇರೆ ಜಯಂತಿಗಳನ್ನು ಆಚರಿಸುವ ಮಾದರಿಯಲ್ಲಿಯೇ ಎಲ್ಲಾ ಸಮುದಾಯದ ಮುಖಂಡರಿಗೆ, ಸಂಘಸಂಸ್ಥೆಗಳಿಗೆ ಕಾರ್ಯಕ್ರಮಕ್ಕೆ ಆಹ್ವಾನಿಸಲಾಗುವುದು ಎಂದರು.

ಮಂಗಳೂರು ಪೊಲೀಸ್ ಆಯುಕ್ತ ಡಾ.ಚಂದ್ರಶೇಖರ್ ಮಾತನಾಡಿ, ಶಾಂತಿಯುತವಾಗಿ ಟಿಪ್ಪು ಜಯಂತಿ ಆಚರಿಸಲು ಎಲ್ಲರ ಸಹಕಾರ ಅಗತ್ಯ ಎಂದರು.

ಕನ್ನಡ ಸಾತ್ಯ ಪರಿಷತ್ ಜಿಲ್ಲಾಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ ಮಾತನಾಡಿ, ಟಿಪ್ಪು ಜಯಂತಿ ಕಾರ್ಯಕ್ರಮವನ್ನು ಯಾವುದೇ ಗೊಂದಲಗಳಿಲ್ಲದೆ ಮುಂಜಾಗರೂಕತಾ ಕ್ರಮಗಳನ್ನು ಕೈಗೊಂಡು ಆಚರಿಸಬೇಕು ಎಂದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕ ಭೂಷನ್ ಗುಲಾಬ್‌ರಾವ್ ಬೊರಸೆ, ಕರ್ನಾಟಕ ತುಳು ಸಾಹಿತ್ಯ ಅಕಾಡಮಿಯ ಅಧ್ಯಕ್ಷೆ ಜಾನಕಿ ಬ್ರಹ್ಮಾವರ, ಕೊಂಕಣಿ ಸಾಹಿತ್ಯ ಅಕಾಡಮಿಯ ಅಧ್ಯಕ್ಷ ರಾಯ್ ಕ್ಯಾಸ್ಟಲಿನೋ, ಬ್ಯಾರಿ ಸಾಹಿತ್ಯ ಅಕಾಡಮಿಯ ಅಧ್ಯಕ್ಷ ಮುಹಮ್ಮದ್ ಹನೀಫ್, ಜಿಲ್ಲಾ ಪಂಚಾಯತ್ ಶಿಕ್ಷಣ ಮತ್ತು ಆರೋಗ್ಯ ಸ್ಥಾಯೀ ಸಮಿತಿಯ ಅಧ್ಯಕ್ಷ ಶಾಹುಲ್ ಹಮೀದ್, ಮಂಗಳೂರು ತಾಲೂಕು ಪಂಚಾಯತ್ ಅಧ್ಯಕ್ಷ ಮುಹಮ್ಮದ್ ಮೋನು, ಜಿಲ್ಲಾ ವಕ್ಫ್ ಸಲಹಾ ಸಮಿತಿ ಅಧ್ಯಕ್ಷ ಎಸ್.ಎಂ. ರಶೀದ್ ಹಾಜಿ ಮಾತನಾಡಿದರು.

ಸಭೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು, ಸಂಘ ಸಂಸ್ಥೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು. ಅಪರ ಜಿಲ್ಲಾಧಿಕಾರಿ ಕುಮಾರ್ ಸ್ವಾಗತಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News