ಫೆ.2ರಿಂದ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ
ಬೆಂಗಳೂರು, ನ.8: ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ 9ನೆ ಆವೃತ್ತಿಯು 2017ನೆ ಸಾಲಿನ ಫೆ.2ರಿಂದ 9ರವರೆಗೆ ನಡೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಮಂಗಳವಾರ ವಿಧಾನಸೌಧದಲ್ಲಿ ನಡೆದ ಚಿತ್ರೋ ತ್ಸವ ಸಂಘಟನಾ ಸಮಿತಿಯ ಸಭೆಯ ಬಳಿಕ ಸುದ್ದಿಗೋಷ್ಠಿ ಯನ್ನುದ್ದೇಶಿಸಿ ಮಾತನಾಡಿದ ಅವರು, ಫೆ.2ರಂದು ವಿಧಾನಸೌಧದ ಮುಂಭಾಗದಲ್ಲಿ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಚಾಲನೆ ನೀಡಲಾಗುವುದು ಎಂದರು.
ಫೆ.9ರಂದು ಮೈಸೂರು ಅರಮನೆ ಮುಂಭಾಗದಲ್ಲಿ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಸಮಾರೋಪ ಸಮಾರಂಭ ನಡೆಯಲಿದೆ. ಈ ಚಲನಚಿತ್ರೋತ್ಸವದಲ್ಲಿ ಸುಮಾರು 40 ದೇಶಗಳ ಪ್ರತಿನಿಧಿಗಳು ಭಾಗವಹಿಸಲಿ ದ್ದಾರೆ ಎಂದು ಅವರು ಹೇಳಿದರು.
ಬೆಂಗಳೂರು ಹಾಗೂ ಮೈಸೂರಿನಲ್ಲಿ ಹಲವು ಚಿತ್ರಗಳ ಪ್ರದರ್ಶನಕ್ಕೆ ವ್ಯವಸ್ಥೆ ಮಾಡಲಾಗುವುದು. ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಶಸ್ತಿಗಳನ್ನು ಗಳಿಸಿರುವಂತಹ, ಸದಭಿರುಚಿ ಹಾಗೂ ಅತ್ಯುತ್ತಮವಾದ ಚಿತ್ರಗಳನ್ನು ಈ ಉತ್ಸವದಲ್ಲಿ ಪ್ರದರ್ಶಿಸಲಾಗುವುದು ಎಂದು ಅವರು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ವಿಧಾನಪರಿಷತ್ ಸದಸ್ಯ ಗೋವಿಂದರಾಜು, ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸಾ.ರಾ.ಗೋವಿಂದು, ಚಲನಚಿತ್ರ ಅಕಾಡೆಮಿ ಅಧ್ಯಕ್ಷ ರಾಜೇಂದ್ರಸಿಂಗ್ ಬಾಬು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಕನ್ನಡ ಧ್ವಜಕ್ಕೆ ಮಾನ್ಯತೆ
ಕನ್ನಡ ಧ್ವಜವನ್ನು ರಾಜ್ಯದ ಧ್ವಜವನ್ನಾಗಿ ಮಾಡುವ ಸಂಬಂಧ ಶೀಘ್ರವೇ ಆದೇಶವನ್ನು ಹೊರಡಿಸಲಾಗುವುದು.
-ಸಿದ್ದರಾಮಯ್ಯ, ಮುಖ್ಯಮಂತ್ರಿ