ಡಿ.13ರಂದು ಸುಳ್ಯ ವಿಭಾಗ ಮಟ್ಟದ ಸವಿತಾ ಸಮಾವೇಶ

Update: 2016-11-25 13:21 GMT

ಸುಳ್ಯ, ನ.25: ಡಿ. 13ರಂದು ಸುಳ್ಯ ವಿಬಾಗ ಮಟ್ಟದ ಸವಿತಾ ಸಮಾವೇಶ ಸುಳ್ಯದ ಯುವಜನ ಸಂಯುಕ್ತ ಮಂಡಳಿ ಸಭಾಂಗಣದ ಪಕ್ಕದ ಪದವಿ ಪೂರ್ವ ಕಾಲೇಜಿನ ಮೈದಾನದಲ್ಲಿ ನಡೆಯಲಿದೆ. ಸವಿತಾ ಸಮಾವೇಶ ಸಂಘಟನಾ ಸಮಿತಿಯ ಅಧ್ಯಕ್ಷ ಹರೀಶ್ ಬಂಟ್ವಾಳ್ ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದರು.

ದಕ್ಷಿಣ ಕನ್ನಡ ಜಿಲ್ಲಾ ಸವಿತಾ ಸಮಾಜ ಹಾಗೂ ಸುಳ್ಯ ತಾಲೂಕು ಸವಿತಾ ಸಮಾಜಗಳ ಅಶ್ರಯದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಸುಳ್ಯ, ಪುತ್ತೂರು, ಕಾಸರಗೋಡು, ಮಡಿಕೇರಿ ತಾಲೂಕಿನ ಸವಿತಾ ಬಾಂಧವರು ಭಾಗವಹಿಸಲಿದ್ದಾರೆ. ರಾಜ್ಯ ಸಮಾಜ ಕಲ್ಯಾಣ ಸಚಿವ ಎಚ್.ಆಂಜನೇಯ ಸಮಾವೇಶವನ್ನು ಉದ್ಘಾಟಿಸಲಿದ್ದಾರೆ. ಸವಿತಾ ಸಿರಿ ಪುಸ್ತಕವನ್ನು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಬಿಡುಗಡೆ ಮಾಡಲಿದ್ದಾರೆ. ಸವಿತಾ ಸಾಧಕರನ್ನು ಸಂಸದ ನಳಿನ್ ಕುಮಾರ್ ಕಟೀಲ್ ಸನ್ಮಾನಿಸಲಿದ್ದಾರೆ. ಶಾಸಕ ಎಸ್.ಅಂಗಾರ, ರಾಜ್ಯ ಸಮಾಜ ಕಲ್ಯಾಣ ಮಂಡಳಿ ಅಧ್ಯಕ್ಷೆ ದಿವ್ಯಪ್ರಭಾ ಚಿಲ್ತಡ್ಕ, ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್‌ನ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ, ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ಎಪಿಎಂಸಿ ಅಧ್ಯಕ್ಷ ಜಾಕೆ ಮಾಧವ ಗೌಡ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ದಿ.ವಿಠಲ ಭಂಡಾರಿ ಸಂಸ್ಮರಣಾ ಪ್ರಶಸ್ತಿ ಪುರಸ್ಕೃತರಿಗೆ ರಾಜ್ಯ ಸವಿತಾ ಸಮಾಜದ ಅಧ್ಯಕ್ಷ ಯು.ಕೃಷ್ಣಮೂರ್ತಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಜಿಲ್ಲಾ ಸವಿತಾ ಸಮಾಜದ ಅಧ್ಯಕ್ಷ ಆನಂದ ಭಂಡಾರಿ ಅಧ್ಯಕ್ಷತೆ ವಹಿಸಲಿದ್ದಾರೆ ಎಂದವರು ಹೇಳಿದರು.

ಸಮಾವೇಶದ ಆರಂಭದಲ್ಲಿ ಚೆನ್ನಕೇಶವ ದೇವಸ್ಥಾನದ ಬಳಿಯಿಂದ ಮೆರವಣಿಗೆ ನಡೆಯಲಿದೆ. ಸಮಾವೇಶದ ಬಳಿಕ ಸವಿತಾ ಸಮಾಜದ ಪ್ರತಿಭೆಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಬಳಿಕ ಜನಪದ ಗಾಯಕ ಅಪ್ಪಗೆರೆ ತಿಮ್ಮರಾಜು ಅವರಿಂದ ಜಾನಪದ ಗೀತಗಾಯನ ನಡೆಯಲಿದೆ. ಸಮಾವೇಶದ ಪ್ರಚಾರಕ್ಕಾಗಿ ಡಿ.6ರಂದು ಬೈಕ್ ರ್ಯಾಲಿಯನ್ನು ಆಯೋಜಿಸಲಾಗಿದೆ ಎಂದವರು ಹೇಳಿದರು.

ಸಮಾವೇಶ ಸಂಘಟನಾ ಸಮಿತಿ ಪ್ರಧಾನ ಕಾರ್ಯದರ್ಶಿ ಗುರುರಾಜ ಅಜ್ಜಾವರ, ಸವಿತಾ ಸಮಾಜದ ಖಜಾಂಜಿ ಪದ್ಮನಾಭ, ಮಹಿಳಾ ಘಟಕದ ಅಧ್ಯಕ್ಷೆ ಪಲ್ಲವಿ, ನಗರ ಘಟಕದ ಅಧ್ಯಕ್ಷ ಗಣೇಶ್ ಜಟ್ಟಿಪಳ್ಳ, ಯುವ ಘಟಕದ ಅಧ್ಯಕ್ಷ ಪ್ರದೀಪ್ ಅಜ್ಜಾವರ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News