×
Ad

ಹಾಡಿ ಜನರ ಸಂಕಷ್ಟಗಳಿಗೆ ಸ್ಪಂದಿಸಿ: ಡಿಸಿ ಡಾ. ವಿನ್ಸೆಂಟ್ ಜಿಲ್ಲಾ ಮಟ್ಟದ ಅರಣ್ಯ ಹಕ್ಕು ಸಮಿತಿ ಸಭೆ

Update: 2016-11-29 23:09 IST

ಮಡಿಕೇರಿ, ನ.29: ಅನುಸೂಚಿತ ಬುಡಕಟ್ಟು ಹಾಗೂ ಇತರ ಪಾರಂಪರಿಕ ಅರಣ್ಯ ವಾಸಿಗಳಿಗೆ ಅರಣ್ಯ ಹಕ್ಕು ಕಾಯ್ದೆ ಅನುಷ್ಠಾನ ಸಂಬಂಧಿಸಿದಂತೆ ತಕ್ಷಣವೇ ಹಾಡಿಗಳಿಗೆ ಭೇಟಿ ನೀಡಿ ಬಾಕಿ ಇರುವ ವೈಯಕ್ತಿಕ ಮತ್ತು ಸಮುದಾಯ ಹಕ್ಕು ಪತ್ರಗಳ ವಿತರಣೆಯ ಜೊತೆಗೆ ಮೂಲ ಸೌಲಭ್ಯ ಕಲ್ಪಿಸಲು ತ್ವರಿತ ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ರಿಚರ್ಡ್ ವಿನ್ಸೆಂಟ್ ಡಿಸೋಜಾ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.


ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಜಿಲ್ಲಾ ಮಟ್ಟದ ಅರಣ್ಯ ಹಕ್ಕು ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯ ವೀರಾಜಪೇಟೆ, ಸೋಮವಾರಪೇಟೆ ತಾಲೂಕು ಗಳಲ್ಲಿನ ಗಿರಿಜನ ಹಾಡಿ ಕುಟುಂಬಗಳಿಗೆ ಅರಣ್ಯ ಹಕ್ಕು ಕಾಯ್ದೆಯ ನಿರ್ದೇಶನದಂತೆ ಅರಣ್ಯ ಹಕ್ಕುಪತ್ರ ವಿತರಣೆಗೆ ಕ್ರಮವಹಿಸಲಾ ಗುವುದು. ಈ ನಿಟ್ಟಿನಲ್ಲಿ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಕಾರ್ಯ ಪ್ರವೃತ್ತರಾಗುವಂತೆ ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.


ಅರಣ್ಯ ಹಕ್ಕು ಕಾಯ್ದೆಯನ್ನು ಸಮರ್ಪಕವಾಗಿ ಅನುಷ್ಠಾನ ಗೊಳಿಸಲು ಅರಣ್ಯ, ಗಿರಿಜನ ಸಮಗ್ರ ಅಭಿವೃದ್ಧಿ ಹಾಗೂ ಕಂದಾಯ ಇಲಾಖೆಗಳು ಕೈಜೋಡಿಸಿ ಕಾರ್ಯ ನಿರ್ವಹಿಸಬೇಕು. ಅರಣ್ಯ ಹಕ್ಕು ಸೌಲಭ್ಯಕ್ಕಾಗಿ ಸಲ್ಲಿಕೆಯಾಗುವ ಅರ್ಜಿಗಳನ್ನು ತ್ವರಿತವಾಗಿ ವಿಲೇವಾರಿ ಮಾಡಿ ಅಗತ್ಯ ಮೂಲ ಸೌಲಭ್ಯ ಕಲ್ಪಿಸುವಂತೆ ಜಿಲ್ಲಾಧಿಕಾರಿ ತಿಳಿಸಿದರು.
ಸಭೆಯಲ್ಲಿ ಹಾಜರಿದ್ದ ಜಿ.ಪಂ. ಸದಸ್ಯ ಹಾಗೂ ಸಮಿತಿ ನಾಮ ನಿರ್ದೇಶಕ ಸದಸ್ಯ ಕುಡಿಯರ ಕುಮಾರ್ ಮಾತನಾಡಿ, ತಾಲೂಕಿನ ಯಡವ ನಾಡು, ಕಟ್ಟೆಹಾಡಿ, ಗೋಣಿಗದ್ದೆ, ಬೊಮ್ಮಾಡು ಮತ್ತಿತರ ಹಾಡಿಗಳಲ್ಲಿನ ಗಿರಿಜನರಿಗೆ ತ್ವರಿತವಾಗಿ ಅರಣ್ಯ ಹಕ್ಕು ಪತ್ರ ನೀಡುವುರ ಜೊತೆಗೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಬೇಕು ಎಂದು ಸಲಹೆ ನೀಡಿದರು. ಜಿಲ್ಲೆಯಲ್ಲಿ ಹೆಚ್ಚಿನ ಗಿರಿಜನರು ಕಾಡಿನಲ್ಲಿ ವಾಸಿಸುತ್ತಾ ಜೀವನ ನಡೆಸುತ್ತಿದ್ದು, ಇದರಿಂದ ಮುಖ್ಯವಾಗಿ ಶಿಕ್ಷಣ, ಆರೋಗ್ಯ, ವಿದ್ಯುತ್, ರಸ್ತೆ, ಬಸ್ ಮತ್ತಿತರ ಮೂಲ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ. ಇಂತಹ ಆದಿವಾಸಿ ಕುಟುಂಬಗಳಿಗೆ ಅರಣ್ಯ ಹಕ್ಕು ಕಾಯ್ದೆಯಂತೆ ಮೂಲ ಸೌಲಭ್ಯಗಳನ್ನು ತಲುಪಿಸಬೇಕು ಎಂದು ಅವರು ಒತ್ತಾಯಿಸಿದರು.


ಜಿಲ್ಲೆಯಲ್ಲಿ ಸಾಕಷ್ಟು ಆದಿವಾಸಿ ಕುಟುಂಬಗಳಿಗೆ ವೈಯಕ್ತಿಕ ಮತ್ತು ಸಮುದಾಯ ಸೌಲಭ್ಯಗಳನ್ನು ಕಲ್ಪಿಸಬೇಕಿದ್ದು, ಆ ನಿಟ್ಟಿನಲ್ಲಿ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಮುತುವರ್ಜಿ ವಹಿಸಬೇಕು ಎಂದು ಸಮಿತಿ ಸದಸ್ಯೆ ಪಂಕಜಾ ಆಗ್ರಹಿಸಿದರು.


  ಉಪ ವಿಭಾಗಾಧಿಕಾರಿ ನಂಜುಂಡೇ ಗೌಡ, ಜಿಲ್ಲಾ ಸಮಗ್ರ ಗಿರಿಜನ ಅಭಿವೃದ್ಧಿ ಯೋಜನಾಧಿಕಾರಿ ಮಾಯಾದೇವಿ ಗಲಗಲಿ, ಜಿಲ್ಲಾ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳು ಸಭೆಯಲ್ಲಿ ಹಲವಾರು ಮಾಹಿತಿ ನೀಡಿದರು. ಸಭೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News