ಈರುಳ್ಳಿ ಖರೀದಿ ಕೇಂದ್ರ ಇನ್ನೂ ಒಂದು ವಾರ ಮುಂದುವರಿಕೆ

Update: 2016-11-30 15:10 GMT

ಬೆಳಗಾವಿ (ಸುವರ್ಣ ವಿಧಾನಸೌಧ), ನ.30: ಬೆಂಬಲ ಬೆಲೆ ಯೋಜನೆಯಡಿ ಆರಂಭಿಸಿರುವ ಈರುಳ್ಳಿ ಖರೀದಿ ಕೇಂದ್ರಗಳನ್ನು ಇನ್ನೂ ಒಂದು ವಾರಗಳ ಕಾಲ ಮುಂದುವರಿಸಲು ರಾಜ್ಯ ಸಚಿವ ಸಂಪುಟ ಉಪ ಸಮಿತಿ ತೀರ್ಮಾನಿಸಿದೆ ಎಂದು ಕೃಷಿ ಸಚಿವ ಕೃಷ್ಣ ಭೈರೇಗೌಡ ಇಂದಿಲ್ಲಿ ಪ್ರಕಟಿಸಿದ್ದಾರೆ.

ಬುಧವಾರ ವಿಧಾನಸಭೆಯಲ್ಲಿ ಬಿಜೆಪಿ ಹಿರಿಯ ಸದಸ್ಯ ಗೋವಿಂದ ಎಂ.ಕಾರಜೋಳ ಕಲಾಪ ಆರಂಭದಲ್ಲಿ ಪ್ರಸ್ತಾಪಿಸಿದ ವಿಷಯಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಬೆಂಬಲ ಬೆಲೆ ಯೋಜನೆಯಡಿ ಈರುಳ್ಳಿ ಖರೀದಿ ಕೇಂದ್ರಗಳನ್ನು ಕೇಂದ್ರ ಮತ್ತು ರಾಜ್ಯ ಸರಕಾರ ಜಂಟಿಯಾಗಿ ಆರಂಭಿಸಿದ್ದು, ಕೇಂದ್ರದಿಂದ ಅನುಮತಿ ಪಡೆದುಕೊಳ್ಳಬೇಕಿತ್ತು. ಹೀಗಾಗಿ ಗೊಂದಲ ಸೃಷ್ಟಿಯಾಗಿತ್ತು. ಇದೀಗ ಕೇಂದ್ರದ ಅನುಮತಿ ಪಡೆದುಕೊಳ್ಳುವ ನಿಟ್ಟಿನಲ್ಲಿ ನಮ್ಮ ಅಧಿಕಾರಿಗಳ ತಮ್ಮ ಪ್ರಯತ್ನ ನಡೆಸಿದ್ದಾರೆ ಎಂದರು.

ಆರಂಭದಲ್ಲೆ ವಿಷಯ ಪ್ರಸ್ತಾಪಿಸಿದ ಗೋವಿಂದ ಕಾರಜೋಳ, ಈರುಳ್ಳಿ ಬೆಲೆ ಕುಸಿತದಿಂದ ರೈತರು ಕಂಗಾಲಾಗಿದ್ದು, ಈ ನಡುವೆ ಬೆಂಬಲ ಬೆಲೆಯಡಿ ಈರುಳ್ಳಿ ಖರೀಸುವ ಕೇಂದ್ರಗಳನ್ನು ಸ್ಥಗಿತಗೊಳಿಸಲಾಗಿದೆ. ಇದರಿಂದ ರೈತರು ಕಂಗಾಲಾಗಿ ಪ್ರತಿಭಟನೆ ಮಾರ್ಗ ಹಿಡಿದಿದ್ದಾರೆ. ಸರಕಾರ ಕೂಡಲೇ ರೈತರ ಬೆಂಬಲಕ್ಕೆ ಬರಬೇಕೆಂದು ಒತ್ತಾಯಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News