×
Ad

ದಿಡ್ಡಳ್ಳಿ ಆದಿವಾಸಿಗಳಿಗೆ ಮರು ವಸತಿ ಸೌಕರ್ಯ ಕಲ್ಪಿಸಲು ಸಿಎಂ ಸೂಚನೆ

Update: 2016-12-20 15:23 IST

ಬೆಂಗಳೂರು, ಡಿ.20: ಮಡಿಕೇರಿ ಜಿಲ್ಲೆಯ ದಿಡ್ಡಳ್ಳಿ ಆದಿವಾಸಿಗಳಿಗೆ ಮರು ವಸತಿ ಸೌಕರ್ಯ ಕಲ್ಪಿಸಲು ಶೀಘ್ರವೇ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚನೆ ನೀಡಿದ್ದಾರೆ.

ಆದಿವಾಸಿಗಳ ಪರವಾಗಿ ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ತಮ್ಮನ್ನು ಭೇಟಿ ಮಾಡಿದ ನಿಯೋಗದೊಂದಿಗೆ ಮಾತುಕತೆ ನಡೆಸುವಾಗ ಸ್ಥಳದಲ್ಲಿ ಹಾಜರಿದ್ದ ಸಮಾಜ ಕಲ್ಯಾಣ ಸಚಿವ ಆಂಜನೇಯ ಅವರಿಗೆ ಮುಖ್ಯಮಂತ್ರಿಯವರು ಈ ಸೂಚನೆ ನೀಡಿದರು. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸುವಂತೆ ತಿಳಿಸಿದರು.

ಮುಖ್ಯಮಂತ್ರಿಯವರ ಸೂಚನೆ ಅನ್ವಯ ಸಚಿವರು ಡಿ.24ರಂದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. ಈ ಸಂದರ್ಭದಲ್ಲಿ ಹಾಜರಿರುವಂತೆ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ಸಚಿವರು ಆದೇಶ ನೀಡಿದ್ದಾರೆ.

ಆದಿವಾಸಿಗಳಿಗೆ ಮರು ವಸತಿ ಸೌಕರ್ಯ ಕಲ್ಪಿಸಲು ಸರಕಾರ ಬದ್ಧವಾಗಿದೆ. ಇದಕ್ಕಾಗಿ ಜಾಗವನ್ನು ಗುರುತಿಸಲಾಗಿದೆ. ಆದಷ್ಟು ಬೇಗ ಅವರಿಗೆ ಮರು ವಸತಿ ಸೌಕರ್ಯ ಕಲ್ಪಿಸಲು ಅಧಿಕಾರಿಗಳಿಗೂ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಇದಕ್ಕಾಗಿ ಪರಿಶಿಷ್ಟ ಜಾತಿ ಮತ್ತು ವರ್ಗಗಳ ಅಭಿವೃದ್ಧಿಗೆ ನಿಗಧಿಪಡಿಸಿರುವ ಅನುದಾನವನ್ನು ಬಳಸಿಕೊಳ್ಳುವಂತೆಯೂ ಆದೇಶಿಸಲಾಗಿದೆ ಎಂದು ಮುಖ್ಯಮಂತ್ರಿಯವರು ಹೇಳಿದರು.

ಚಿತ್ರನಟ ಚೇತನ್ ನೇತೃತ್ವದ ನಿಯೋಗ ಮುಖ್ಯಮಂತ್ರಿಯವರನ್ನು ಭೇಟಿ ಮಾಡಿ ಆದಿವಾಸಿಗಳಿಗೆ ತ್ವರಿತವಾಗಿ ಮರು ವಸತಿ ಸೌಕರ್ಯ ಕಲ್ಪಿಸುವಂತೆ ಮನವಿ ಸಲ್ಲಿಸಿತು.

ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಸಚಿವ ಆಂಜನೇಯ ಅವರು, ಆದಿವಾಸಿಗಳಿಗೆ ಮೊದಲ ಹಂತದಲ್ಲಿ ನಿವೇಶನ ಒದಗಿಸಿ ಮನೆಗಳನ್ನು ನಿರ್ಮಿಸಿ ಕೊಡಲಾಗುವುದು. ಬಳಿಕ ವ್ಯವಸ್ಯಾಯಕ್ಕೆ ಜಮೀನು ನೀಡಲಾಗುವುದು. ಈ ಕುರಿತು ಡಿ.24ರಂದು ಆದಿವಾಸಿಗಳೊಂದಿಗೆ ಮಾತುಕತೆ ನಡೆಸುವುದಾಗಿ ಅವರು ಹೇಳಿದರು.

♦♦♦♦♦♦♦♦♦♦♦♦♦♦♦♦♦♦♦♦♦♦♦♦♦

ಈ ಸುದ್ದಿ / ಲೇಖನದ ಬಗ್ಗೆ ನಿಮ್ಮ ಅಭಿಪ್ರಾಯ, ಅನಿಸಿಕೆಯೇನು ?

ಕೆಳಗೆ ಕಮೆಂಟ್ ವಿಭಾಗದಲ್ಲಿ ಬರೆಯಿರಿ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News