ಕನ್ನಡದಲ್ಲಿ ‘ನೀಟ್’ ಪರೀಕ್ಷೆ : ಪ್ರಧಾನಿಗೆ ಸಚಿವೆ ಉಮಾಶ್ರೀ ಪತ್ರ
ಬೆಂಗಳೂರು, ಡಿ.23: ವೈದ್ಯ ಮತ್ತು ದಂತ ವೈದ್ಯ ಕೋರ್ಸುಗಳಿಗೆ ನಡೆಯುವ ರಾಷ್ಟ್ರೀಯ ಅರ್ಹತಾ ಪರೀಕ್ಷೆ(ನೀಟ್)ಯಲ್ಲಿ ಕನ್ನಡ ಮಾಧ್ಯಮವನ್ನು ಕಡೆಗಣಿಸಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವೆ ಉಮಾಶ್ರೀ, ಈ ಸಂಬಂಧ ಪ್ರಧಾನಿ ನರೇಂದ್ರಮೋದಿಗೆ ಶುಕ್ರವಾರ ಪತ್ರ ಬರೆದಿದ್ದಾರೆ.
2 ಸಾವಿರ ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ಭಾಷೆಗೆ ಕೇಂದ್ರ ಸರಕಾರವೆ ಶಾಸ್ತ್ರೀಯ ಸ್ಥಾನಮಾನ ನೀಡಿದೆ. ಅಲ್ಲದೆ, 7 ಕೋಟಿ ಜನರು ಕನ್ನಡ ಭಾಷೆಯನ್ನು ಬಳಸುತ್ತಿದ್ದಾರೆ. ಹೀಗಿರುವಾಗ ಕನ್ನಡ ಮಾಧ್ಯಮದಲ್ಲಿ ನೀಟ್ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸದಿರುವುದು ಸರಿಯಲ್ಲ. ಕನ್ನಡದಲ್ಲಿ ನೀಟ್ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲು ಸಂಬಂಧಪಟ್ಟ ಸಚಿವರಿಗೆ ಸೂಚಿಸುವಂತೆ ಉಮಾಶ್ರೀ ಒತ್ತಾಯಿಸಿದ್ದಾರೆ.
ಅಲ್ಲದೆ, ಕೇಂದ್ರ ಆರೋಗ್ಯ ಸಚಿವರು ಹಾಗೂ ಕೇಂದ್ರ ಮಾನವ ಸಂಪನ್ಮೂಲ ಸಚಿವರಿಗೂ ಪತ್ರ ಬರೆದಿರುವ ಉಮಾಶ್ರೀ, ಕನ್ನಡದಲ್ಲಿ ನೀಟ್ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಬೇಕೆಂದು ಆಗ್ರಹಿಸಿದ್ದಾರೆ.