ಕೇಂದ್ರ ಬಜೆಟ್ ಮುಂದೂಡಲು ಕೋರಿ ಸಲ್ಲಿಸಿದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ನಕಾರ
Update: 2017-01-06 19:29 IST
ಹೊಸದಿಲ್ಲಿ, ಜ.6: ಪಂಚರಾಜ್ಯಗಳ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕೇಂದ್ರ ಸರಕಾರದ ಬಜೆಟ್ ಮಂಡನೆ ಪ್ರಕ್ರಿಯೆಯನ್ನು ಮುಂದೂಡುವಂತೆ ಕೋರಿ ಸಲ್ಲಿಸಲಾಗಿರುವ ಅರ್ಜಿಯ ತುರ್ತು ವಿಚಾರಣೆ ನಡೆಸಬೇಕೆಂಬ ಮನವಿಯನ್ನು ಸುಪ್ರೀಂಕೋರ್ಟ್ ತಳ್ಳಿ ಹಾಕಿದೆ.
ಅಂತಹ ಅವಸರ ಏನಿಲ್ಲ. ಅರ್ಜಿ ವಿಚಾರಣೆಗೆ ಬಂದಾಗ ಕಾನೂನಿನನ್ವಯ ತೀರ್ಪು ನೀಡಲಾಗುತ್ತದೆ ಎಂದು ಮುಖ್ಯ ನ್ಯಾಯಮೂರ್ತಿ ಜೆ.ಎಸ್.ಖೇಕರ್ ಅವರನ್ನೊಳಗೊಂಡ ವಿಭಾಗೀಯ ಪೀಠ ತಿಳಿಸಿದೆ.
ಐದು ರಾಜ್ಯಗಳ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕೇಂದ್ರ ಸರಕಾರದ ಬಜೆಟ್ ಮಂಡನೆ ಪ್ರಕ್ರಿಯೆಯನ್ನು ಮುಂದೂಡುವಂತೆ ಸೂಚಿಸಬೇಕು ಎಂದು ಕೋರಿ ವಕೀಲ ಎಂ.ಎಲ್.ಶರ್ಮ ಎಂಬವರು ಸಾರ್ವಜನಿಕ ಹಿತಾಸಕ್ತಿಯ ದಾವೆ ಹೂಡಿದ್ದರು. ಅಲ್ಲದೆ ಚುನಾವಣೆಯ ಹಿನ್ನೆಲೆಯಲ್ಲಿ ಜಾರಿಗೊಂಡಿರುವ ನೀತಿ ಸಂಹಿತೆಯನ್ನು ಉಲ್ಲಂಘಿಸಿದ ಕಾರಣ ಬಿಜೆಪಿಯ ತಾವರೆ ಚಿಹ್ನೆಯನ್ನು ಹಿಂಪಡೆಯಬೇಕು ಎಂದು ಅರ್ಜಿಯಲ್ಲಿ ಕೋರಲಾಗಿತ್ತು.