ಉಡುಪಿ: ಗೃಹರಕ್ಷಕ ದಳ ವಲಯ ಮಟ್ಟದ ವೃತ್ತಿಪರ ಕ್ರೀಡಾಕೂಟಕ್ಕೆ ಚಾಲನೆ

Update: 2017-01-07 18:53 GMT

ಉಡುಪಿ, ಜ.7: ಉಡುಪಿ ಜಿಲ್ಲಾ ಗೃಹರಕ್ಷಕ ದಳದ ವತಿಯಿಂದ ಉಡುಪಿ ಚಂದು ಮೈದಾನದಲ್ಲಿ ಹಮ್ಮಿಕೊಳ್ಳಲಾದ ಮೂರು ದಿನಗಳ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಚಿಕ್ಕಮಗಳೂರು ಜಿಲ್ಲೆಗಳನ್ನೊಳಗೊಂಡ ವಲಯ ಮಟ್ಟದ ವೃತ್ತಿಪರ ಕ್ರೀಡಾಕೂಟವನ್ನು ಉಡುಪಿ ಜಿಲ್ಲಾಕಾರಿ ಕೆ.ಟಿ.ವೆಂಕಟೇಶ್ ಉದ್ಘಾಟಿಸಿದರು.

ಈ ವೇಳೆ ಮಾತನಾಡಿದ ಅವರು, ಕ್ರೀಡೆಯಿಂದ ದೈಹಿಕ ಹಾಗೂ ಮಾನಸಿಕವಾಗಿ ಆರೋಗ್ಯವಂತರಾಗಿ ಚಟುವಟಿಕೆಯಿಂದ ಇರಲು ಸಾಧ್ಯ. ಸರಕಾರ ಕ್ರೀಡೆಗೆ ಉತ್ತಮ ರೀತಿಯ ಪ್ರೋತ್ಸಾಹ ನೀಡುತ್ತಿದ್ದು, ಒಲಿಂಪಿಕ್ಸ್‌ನಲ್ಲಿ ಚಿನ್ನ ಗೆಲ್ಲುವ ಕ್ರೀಡಾಪಟುಗೆ 5 ಕೋ.ರೂ., ಬೆಳ್ಳಿ ಪದಕ ವಿಜೇತರಿಗೆ 3ಕೋ.ರೂ. ಹಾಗೂ ಕಂಚಿನ ಪದಕ ಪಡೆದವರಿಗೆ 2ಕೋ.ರೂ. ಪ್ರೋತ್ಸಾಹಧನ ಘೋಷಿಸಿದೆ. ಪ್ರತೀ ಜಿಲ್ಲೆಯಲ್ಲಿ ಕ್ರೀಡಾ ಹಾಸ್ಟೆಲ್‌ಗಳನ್ನು ಸ್ಥಾಪಿಸಿ ಗ್ರಾಮೀಣ ಪ್ರದೇಶದ ಮಕ್ಕಳಿಗೆ ಕ್ರೀಡಾ ತರಬೇತಿ ನೀಡಲಾಗುತ್ತಿದೆ ಎಂದರು.

ಅಂತಾರಾಷ್ಟ್ರೀಯ ಅಥ್ಲೆಟಿಕ್ ಕ್ರೀಡಾಪಟು ರೋಹಿತ್ ಕುಮಾರ್ ಕಟೀಲು, ಬಡಗುಬೆಟ್ಟು ಕ್ರೆಡಿಟ್ ಕೋಆಪರೇಟಿವ್ ಸೊಸೈಟಿಯ ಜನರಲ್ ಮೆನೇಜರ್ ಜಯಕರ ಶೆಟ್ಟಿ ಇಂದ್ರಾಳಿ ಮಾತನಾಡಿದರು. ಗೃಹ ರಕ್ಷಕದಳದ ಜಿಲ್ಲಾ ಕಮಾಂಡೆಂಟ್ ಡಾ.ಕೆ.ಪ್ರಶಾಂತ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.

ಕಳೆದ ಬಾರಿಯ ಚಾಂಪಿಯನ್ ಉತ್ತರ ಕನ್ನಡ ಜಿಲ್ಲೆಯ ನಾಗರಾಜ್ ಕ್ರೀಡಾಜ್ಯೋತಿ ಬೆಳಗಿಸಿದರು. ಬ್ರಹ್ಮಾವರ ಘಟಕಾಕಾರಿ ಮಂಜುನಾಥ್ ಶೆಟ್ಟಿಗಾರ್ ಪ್ರತಿಜ್ಞಾ ವಿ ಬೋಸಿದರು. ಡೆಪ್ಯುಟಿ ಕಮಾಂಡೆಂಟ್ ರಮೇಶ್ ಸ್ವಾಗತಿಸಿದರು. ಸೆಕೆಂಡ್ ಇನ್ ಕಮಾಂಡ್ ಕೆ.ಸಿ.ರಾಜೇಶ್ ವಂದಿಸಿದರು. ಸಾಯಿನಾಥ್ ಉದ್ಯಾವರ ಕಾರ್ಯಕ್ರಮ ನಿರೂಪಿಸಿದರು. ಕ್ರೀಡಾಕೂಟದಲ್ಲಿ ನಾಲ್ಕು ಜಿಲ್ಲೆಗಳ ತಲಾ 35 ಮಂದಿಯಂತೆ ಒಟ್ಟು 140 ಮಂದಿ ಕ್ರೀಡಾಪಟುಗಳು ಪಾಲ್ಗೊಂಡಿದ್ದು, ಇವರಲ್ಲಿ 50 ಮಂದಿ ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News