×
Ad

ಉಡುಪಿ: ರಾಷ್ಟ್ರೀಯ ಯುವ ಸಪ್ತಾಹ ಉದ್ಘಾಟನೆ

Update: 2017-01-12 21:05 IST

ಉಡುಪಿ, ಜ.12:ಸ್ವಾಮಿವಿವೇಕಾನಂದರ 154ನೇ ಜನ್ಮದಿನಾಚರಣೆಯ ಅಂಗ ವಾಗಿ ರಾಷ್ಟ್ರೀಯ ಯುವ ಸಪ್ತಾಹದ ಉದ್ಘಾಟನೆ ಹಾಗೂ ಬೃಹತ್ ಯುವ ಜಾಥಾ ಉಡುಪಿ ನಗರದಲ್ಲಿಂದು ನಡೆಯಿತು. ಜಿಲ್ಲಾಡಳಿತ, ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಪೊಲೀಸ್ ಇಲಾಖೆ, ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲಾ ಘಟಕ, ಸಾರ್ವಜನಿಕ ಶಿಕ್ಷಣ ಇಳಾಖೆ, ಸಾರಿಗೆ ಇಲಾಖೆ, ಡಾ.ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ, ಸರಕಾರಿ ಪ್ರಥಮ ದರ್ಜೆ ಕಾಲೇಜು ತೆಂಕನಿಡಿಯೂರು, ಎಂಜಿಎಂ ಕಾಲೇಜು ಉಡುಪಿ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಡುಪಿ, ಬಡಗಬೆಟ್ಟು ಕ್ರೆಡಿಟ್ ಕೋಆಪರೇಟಿವ್ ಸೊಸೈಟಿ ಇವುಗಳ ಸಹಯೋಗದಲ್ಲಿ ಈ ಕಾರ್ಯಕ್ರಮ ನಡೆಯಿತು.

ಉಡುಪಿಯ ಸರಕಾರಿ ಬೋರ್ಡ್ ಹೈಸ್ಕೂಲ್‌ನಿಂದ ಅಜ್ಜರಕಾಡು ಮಹಾತ್ಮ ಗಾಂಧೀ ಜಿಲ್ಲಾ ಕ್ರೀಡಾಂಗಣದವರೆಗೆ ನಡೆದ ಜಾಥಾ ಕಾರ್ಯಕ್ರಮಕ್ಕೆ ಬೆಳಗ್ಗೆ ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಚಾಲನೆ ನೀಡಿದರು. ಇದರಲ್ಲಿ ಜಿಲ್ಲೆಯ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು, ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು, ವಿವಿಧ ಕಲಾತಂಡಗಳು ಭಾಗವಹಿಸಿದ್ದವು.

ಅನಂತರ ಅಜ್ಜರಕಾಡು ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದದಲ್ಲಿ ನಡೆದ ಯುವ ಸಪ್ತಾಹ ಸಮಾರಂಭವನ್ನು ಸಹ ಜಿಲ್ಲಾಧಿಕಾರಿ ಟಿ. ವೆಂಕಟೇಶ್ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಉಡುಪಿ ಜಿಪಂ ಅಧ್ಯಕ್ಷ ದಿನಕರ ಬಾಬು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹೊರತಂದ ಸ್ವಾಮಿ ವಿವೇಕಾನಂದರ ಕುರಿತ ಕಿರುಪುಸ್ತಕವನ್ನು ಬಿಡುಗಡೆಗೊಳಿಸಿದರು.
ಸಾಲಿಗ್ರಾಮ ಡಿವೈನ್ ಪಾರ್ಕ್‌ನ ಸ್ವಾಸ್ಥ ಹೆಲ್ತ್ ಮತ್ತು ರಿಸರ್ಚ್ ಫೌಂಡೇಷನ್‌ನ ವೈದ್ಯಕೀಯ ನಿರ್ದೇಶಕ ಡಾ.ವಿವೇಕ ಉಡುಪಿ ಇವರು ಸ್ವಾಮಿ ವಿವೇಕಾನಂದರ ಕುರಿತು ದಿಕ್ಸೂಚಿ ಭಾಷಣ ಮಾಡಿದರು. ವಿವೇಕಾನಂದರ ಜೀವನದಲ್ಲಿ ಅಂಜಿಕೆ, ಅಶ್ರದ್ದೆ, ಅನಾಸಕ್ತಿ, ಅಚಾತುರ್ಯ ಮತ್ತು ಅಹಂಕಾರ ಗಳಿಗೆ ಸ್ಥಾನ ಇಲ್ಲದಿದ್ದುದರಿಂದ ಅವರಿಗೆ ಮಹಾನ್ ಸಾಧನೆಗಳನ್ನು ಮಾಡಲು ಸಾಧ್ಯವಾಯಿತು. ಯುವ ಜನತೆ ವಿವೇಕಾನಂದರ ಆದರ್ಶ ಮತ್ತು ದೇಶಭಕ್ತಿ ಯನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.

ಕಾರ್ಯಕ್ರಮದಲ್ಲಿ ಉಡುಪಿ ತಾಪಂ ಅಧ್ಯಕ್ಷೆ ನಳಿನಿ ಪ್ರದೀಪ್ ರಾವ್, ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್, ಡಿವೈಎಸ್ಪಿ ಕುಮಾರಸ್ವಾಮಿ, ತಹಶೀಲ್ದಾರ್ ಮಹೇಶ್ಚಂದ್ರ, ಪ್ರಾದೇಶಿಕ ಸಾರಿಗೆ ಅಧಿಕಾರಿ ಗುರುಮೂರ್ತಿ ಕುಲಕರ್ಣಿ, ಸಾಂಖ್ಯಿಕ ಇಲಾಖೆಯ ಅಧಿಕಾರಿ ಶಂಕರಪ್ಪ, ಡಿಡಿಪಿಐ ದಿವಾಕರ ಶೆಟ್ಟಿ, ಡಾ.ಜಿ.ಶಂಕರ್ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲ ಡಾ. ಜಗದೀಶ ರಾವ್, ಬಡಗಬೆಟ್ಟು ಕ್ರೆಡಿಟ್ ಕೋಆಪರೇಟಿವ್ ಬ್ಯಾಂಕ್‌ನ ಉಪಾಧ್ಯಕ್ಷ ಉಮಾನಾಥ್ ಮತ್ತಿತರರು ಉಪಸ್ಥಿತರಿದ್ದರು.

 ಅಪರ ಜಿಲ್ಲಾಧಿಕಾರಿ ಅನುರಾಧ ಸ್ವಾಗತಿಸಿದರು. ಪೌರಾಯುಕ್ತ ಮಂಜುನಾಥಯ್ಯ ವಂದಿಸಿದರು. ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ.ರೋಶನ್‌ಕುಮಾ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News