ಯೇನೆಪೊಯ ಅಂತಾರಾಷ್ಟ್ರೀಯ ಗುಣಮಟ್ಟ ಹೊಂದಿರುವ ಸಂಸ್ಥೆ: ಗೃಹ ಸಚಿವ ಪರಮೇಶ್ವರ್
ಮಂಗಳೂರು, ಜ.13: ರಾಜ್ಯ ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರು ಯೇನೆಪೊಯ ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆಯ ಆವರಣದಲ್ಲಿ ನೂತನ ಶಸ್ತ್ರ ಚಿಕಿತ್ಸಾ ವಿಭಾಗದ ಸಂಕೀರ್ಣವನ್ನು ಇಂದು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ಯೇನೆಪೊಯ ವಿಶ್ವವಿದ್ಯಾನಿಲಯ ಅತ್ಯಾಧುನಿಕ ಸಂಶೋಧನಾ ವಿಭಾಗಗಳನ್ನು ಹಾಗೂ ವೈದ್ಯಕೀಯ ಸೌಲಭ್ಯಗಳನ್ನು ಹೊಂದಿದ್ದು, ದೇಶದ ಒಂದು ಪ್ರತಿಷ್ಠಿತ ಸಂಸ್ಥೆಯಾಗಿ ಕಾರ್ಯನಿರ್ವಹಿಸುತ್ತಿದೆ. ಯೇನೆಪೊಯ ಸಂಸ್ಥೆ ಅಂತಾರಾಷ್ಟ್ರೀಯ ಗುಣಮಟ್ಟ ಹೊಂದಿರುವ ಸಂಸ್ಥೆಯಾಗಿದೆ ಎಂದು ಶ್ಲಾಘಿಸಿದರು. ವಂಶವಾಹಿನಿಯ ಸಂಶೋಧನೆಯನ್ನು ಕೈಗೆತ್ತಿಕೊಂಡಿರುವ ಯೇನೆಪೊಯ ವಿಶ್ವವಿದ್ಯಾನಿಲಯದ ಸಂಶೋಧನಾ ವಿಭಾಗ ಮುಂದಿನ ದಿನಗಳಲ್ಲಿ ಹಲವು ಆರೋಗ್ಯ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸಾಧ್ಯವಾಗಬಹುದು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಖಾಸಗಿ ವಿಶ್ವವಿದ್ಯಾನಿಲಯದ ಅತ್ಯಾಧುನಿಕ ವೈದ್ಯಕೀಯ ಸಲಕರಣೆಗಳನ್ನು ಹೊಂದಿರುವ ಸಂಸ್ಥೆಗಳ ಪೈಕಿ ಯೇನೆಪೊಯ ಸಂಸ್ಥೆ ದೇಶದ ಪ್ರತಿಷ್ಠಿತ ಸಂಸ್ಥೆಯಾಗಿ ಮೂಡಿ ಬಂದಿದೆ. ಇದಕ್ಕೆ ಸಂಸ್ಥೆಯ ಆಡಳಿತ ಮಂಡಳಿಯ ಬದ್ಧತೆ ಕಾರಣವಾಗಿದೆ ಎಂದು ಪರಮೇಶ್ವರ್ ತಿಳಿಸಿದ್ದಾರೆ.
ರಾಜ್ಯದಲ್ಲಿ ಪೊಲೀಸ್ ಇಲಾಖೆಯಲ್ಲಿ ಅಪರಾಧ ಪತ್ತೆಗಾಗಿ ಡಿಎನ್‌ಎ ಮಾದರಿಯ ಪರೀಕ್ಷೆಗಳನ್ನು ಮಾಡಲು ಹೈದರಾಬಾದ್, ಪುಣೆಗೆ ಸಂಪರ್ಕ ಮಾಡಬೇಕಾಗಿದ್ದು, ಪ್ರಸಕ್ತ ರಾಜ್ಯದಲ್ಲಿ ಈ ಸೌಲಭ್ಯಗಳನ್ನು ಅಭಿವೃದ್ಧಿ ಪಡಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಭಾರತದ ವೈದ್ಯರು ವಿದೇಶದ ದೊಡ್ಡ ದೊಡ್ಡ ಆಸ್ಪತ್ರೆಗಳಲ್ಲಿ ವೈದ್ಯರಾಗಿ ತಜ್ಞರಾಗಿ ಸೇವೆ ಸಲ್ಲಿಸುತ್ತಿರುವುದು ದೇಶಕ್ಕೆ ಹೆಮ್ಮೆಯ ಸಂಗತಿಯಾಗಿದೆ.
ನೋಟು ರದ್ದತಿಯಿಂದಾಗಿ ಸಮಾಜದಲ್ಲಿ ಹಲವು ಸಮಸ್ಯೆಗಳು ಎದರುರಾಗುತ್ತಿದ್ದು, ಇದರ ಪರಿಣಾಮ ಮುಂದಿನ ದಿನಗಳಲ್ಲಿ ಇನ್ನಷ್ಟು ತೀವ್ರಗೊಳ್ಳಲಿದೆ ಎಂದು ಅವರು ಹೇಳಿದರು.