ಬಿಜೆಪಿಯ ಮತ್ತೊಂದು ವಿಕೆಟ್ ಪತನ : ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದಿಂದ ಅವ್ವಣ್ಣ ಮ್ಯಾಕೇರಿ ವಜಾ
ಬೆಂಗಳೂರು, ಜ. 13: ರಾಯಣ್ಣ ಬ್ರಿಗೇಡ್‌ನೊಂದಿಗೆ ಗುರುತಿಸಿಕೊಂಡಿದ್ದ, ರಾಜ್ಯ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಕಾರ್ಯಕಾರಣಿ ಸಮಿತಿ ಉಪಾಧ್ಯಕ್ಷ ಸ್ಥಾನದಿಂದ ಅವ್ವಣ್ಣ ಮ್ಯಾಕೇರಿ ಅವರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ವಜಾ ಮಾಡಲಾಗಿದೆ.
ವಿಧಾನ ಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಅವ್ವಣ್ಣ ಮ್ಯಾಕೇರಿ ಅವರನ್ನು ಹಿಂದುಳಿದ ವರ್ಗಗಳ ಮೋರ್ಚಾ ಉಪಾಧ್ಯಕ್ಷ ಸ್ಥಾನದಿಂದ ವಜಾಗೊಳಿಸಿ ಮೋರ್ಚಾ ಅಧ್ಯಕ್ಷ ಬಿ.ಜೆ.ಪುಟ್ಟಸ್ವಾಮಿ ಆದೇಶ ಹೊರಡಿಸಿದ್ದಾರೆ.
ಅವ್ವಣ್ಣ ಮ್ಯಾಕೇರಿ ಕಲಬುರಗಿ ಎಪಿಎಂಸಿ ಮಾಜಿ ಅಧ್ಯಕ್ಷರಾಗಿದ್ದು, ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದರು. ಆ ಹಿನ್ನೆಲೆಯಲ್ಲಿ ಅವರನ್ನು ವಜಾ ಮಾಡಲಾಗಿದೆ ಎಂದು ಗೊತ್ತಾಗಿದೆ.
ಬಿಎಸ್‌ವೈ ಖುಷಿಪಡಿಸಲು ತನ್ನ ವಿರುದ್ಧ ಕ್ರಮ: ಯಡಿಯೂರಪ್ಪ ಅವರನ್ನು ಖುಷಿಪಡಿಸಲು ತನ್ನನ್ನು ಬಿಜೆಪಿ ಹಿಂ.ವರ್ಗಗಳ ಮೋರ್ಚಾ ಉಪಾಧ್ಯಕ್ಷ ಸ್ಥಾನದಿಂದ ಬಿ.ಜೆ.ಪುಟ್ಟಸ್ವಾಮಿ ವಜಾ ಮಾಡಲಾಗಿದೆ. ತಾನು ಯಾವುದೇ ರೀತಿಯ ಪಕ್ಷ ವಿರೋಧಿ ಚಟುವಟಿಕೆ ನಡೆಸಿಲ್ಲ ಎಂದು ಅವ್ವಣ್ಣ ಮ್ಯಾಕೇರಿ ಸ್ಪಷ್ಟಣೆ ನೀಡಿದ್ದಾರೆ.
ಪತ್ರಿಕೆಯೊಂದಿಗೆ ದೂರವಾಣಿಯಲ್ಲಿ ಮಾತನಾಡಿದ ಅವರು, ರಾಯಣ್ಣ ಬ್ರಿಗೇಡ್ ದಲಿತ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣದ ಸಂಘಟನೆ. ಯಾರೇ ಇರಲಿ, ಮತ್ಯಾರೇ ಬರಲಿ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಚಟುವಟಿಕೆಗಳಿಂದ ಹಿಂದೆ ಸರಿಯುವುದಿಲ್ಲ. ಬಿಜೆಪಿ ಪಕ್ಷವನ್ನು ತ್ಯಜಿಸುವುದಿಲ್ಲ ಎಂದು ಪ್ರತಿಕ್ರಿಯೆ ನೀಡಿದರು.