ಸಿಎಂ ಸಿದ್ದರಾಮಯ್ಯರಿಂದ ರಾಜ್ಯಪಾಲರ ಭೇಟಿ : ನೂತನ ಲೋಕಾಯುಕ್ತರ ನೇಮಕ ಸಂಬಂಧ ಚರ್ಚೆ

Update: 2017-01-23 14:08 GMT

ಬೆಂಗಳೂರು, ಜ. 23: ನೂತನ ಲೋಕಾಯುಕ್ತ ಸ್ಥಾನಕ್ಕೆ ನ್ಯಾ.ವಿಶ್ವನಾಥ್ ಶೆಟ್ಟಿ ಅವರನ್ನು ನೇಮಕ ಸಂಬಂಧ ರಾಜ್ಯ ಸರಕಾರ ಶಿಫಾರಸ್ಸು ಮಾಡಿದ್ದ ಕಡತವನ್ನು ವಾಪಸ್ ಕಳುಹಿಸಿದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಖುದ್ದು ಭೇಟಿ ಮಾಡಿ ಸಮಾಲೋಚನೆ ನಡೆಸಿದರು.

ಸೋಮವಾರ ರಾಜ್ಯಪಾಲ ವಜುಭಾಯಿ ವಾಲಾ ಅವರ 80ನೆ ಹುಟ್ಟುಹಬ್ಬಕ್ಕೆ ಶುಭಾಶಯ ಕೋರುವ ನೆಪದಲ್ಲಿ ರಾಜಭವನಕ್ಕೆ ತೆರಳಿದ್ದ ಸಿದ್ದರಾಮಯ್ಯ, ನೂತನ ಲೋಕಾಯುಕ್ತ ಸ್ಥಾನಕ್ಕೆ ನ್ಯಾಯಮೂರ್ತಿ ವಿಶ್ವನಾಥ ಶೆಟ್ಟಿ ಅವರನ್ನು ನೇಮಿಸುವ ಶಿಫಾರಸ್ಸಿಗೆ ಅನುಮೋದನೆ ನೀಡುವಂತೆ ಮನವಿ ಮಾಡಿಕೊಂಡಿದ್ದಾರೆ ಎಂದು ಗೊತ್ತಾಗಿದೆ.

ಇತ್ತೀಚೆಗಷ್ಟೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಹೈಕೋರ್ಟಿನ ಮುಖ್ಯ ನ್ಯಾಯಮೂರ್ತಿ, ಕಾನೂನು ಸಚಿವ ಜಯಚಂದ್ರ, ವಿಧಾನಸಭೆ ಸ್ಪೀಕರ್ ಕೆ.ಬಿ.ಕೋಳಿವಾಡ, ಸಭಾಪತಿ ಡಿ.ಎಚ್.ಶಂಕರ ಮೂರ್ತಿ, ವಿಪಕ್ಷ ನಾಯಕರಾದ ಜಗದೀಶ್ ಶೆಟ್ಟರ್ ಹಾಗೂ ಕೆ.ಎಸ್.ಈಶ್ವರಪ್ಪ ಉಪಸ್ಥಿತಿಯಲ್ಲಿ ಸಭೆ ನಡೆಸಿ, ಲೋಕಾಯುಕ್ತ ಸ್ಥಾನಕ್ಕೆ ನ್ಯಾ.ವಿಶ್ವನಾಥ್ ಶೆಟ್ಟಿ ಹೆಸರನ್ನು ಅಂತಿಮಗೊಳಿಸಲಾಗಿತ್ತು.

ಆ ಬಳಿಕ ರಾಜ್ಯ ಸರಕಾರ ಅವರ ಹೆಸರನ್ನು ಲೋಕಾಯುಕ್ತ ಸ್ಥಾನಕ್ಕೆ ಶಿಫಾರಸ್ಸು ಮಾಡಿ ರಾಜ್ಯಪಾಲರ ಅಂಕಿತಕ್ಕೆ ರವಾನಿಸಲಾಗಿತ್ತು. ಆದರೆ, ರಾಜ್ಯಪಾಲರ ಆ ಕಡತವನ್ನು ಕೆಲ ಸ್ಪಷ್ಟಣೆ ಕೋರಿ ವಾಪಸ್ ಕಳುಹಿಸಿದ್ದುದನ್ನು ಇಲ್ಲಿ ಸ್ಮರಿಸಬಹುದು. ಆದರೆ, ಸಿಎಂ ಮನವಿಗೆ ರಾಜ್ಯಪಾಲರು ಯಾವುದೇ ಪ್ರತಿಕ್ರಿಯೆ ನೀಡಿಲ್ಲ ಎಂದು ಹೇಳಲಾಗಿದೆ.

ಆರಂಭಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯಪಾಲರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ವಜುಭಾಯಿ ವಾಲಾ ಅವರಿಗೆ ಶಾಲು ಹೊದಿಸಿ, ಪುಪ್ಪಗುಚ್ಚವನ್ನು ನೀಡಿ ಶುಭಾಶಯ ಕೋರಿ ಅಭಿನಂದಿಸಿದರು. ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್, ಮೇಲ್ಮನೆ ಸದಸ್ಯ ವಿ.ಎಸ್.ಉಗ್ರಪ್ಪ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News