×
Ad

ಪ್ಲಾಸ್ಟಿಕ್ ಬಳಕೆಯ ನಿಯಂತ್ರಣ ಹಾಗೂ ತ್ಯಾಜ್ಯ ವಿಲೇವಾರಿ ಬಗ್ಗೆ ಬೃಹತ್ ಜನಾಂದೋಲನಕ್ಕೆ ಯು.ಟಿ.ಖಾದರ್ ಚಾಲನೆ

Update: 2017-01-23 21:44 IST

ಕೊಣಾಜೆ, ಜ. 23: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ, ಬಂಟ್ವಾಳ ತಾಲೂಕು ಪಂಚಾಯಿತಿ, ಕುರ್ನಾಡು ಗ್ರಾಮ ಪಂಚಾಯಿತಿ ಹಾಗೂ ಸ್ವಯಂಸೇವಾ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಜನಪ್ರತಿನಿಧಿಗಳು ಹಾಗೂ ಶಾಲಾ ವಿದ್ಯಾರ್ಥಿಗಳ ಸಹಭಾಗಿತ್ವದೊಂದಿಗೆ ಮುಡಿಪುವಿನಲ್ಲಿ ಸೋಮವಾರ ಪ್ಲಾಸ್ಟಿಕ್ ಬಳಕೆಯ ನಿಯಂತ್ರಣ ಮತ್ತು ಸಮರ್ಪಕ ಘನತ್ಯಾಜ್ಯ ವಿಲೇವಾರಿ ಬಗ್ಗೆ ಬೃಹತ್ ಜನಾಂದೋಲನಕ್ಕೆ ಸಚಿವ ಯು.ಟಿ.ಖಾದರ್ ಚಾಲನೆ ನೀಡಿದರು.

  ಬಳಿಕ ಮಾತನಾಡಿದ ಅವರು, ದೇಶದಲ್ಲಿ ಭ್ರಷ್ಟಾಚಾರದಂತಹ ಪಿಡುಗು ನಮ್ಮನ್ನು ಕಾಡುತ್ತಿದೆಯೋ ಅದೇ ರೀತಿಯಲ್ಲಿ ಪ್ಲಾಸ್ಟಿಕ್ ಮತ್ತು ತ್ಯಾಜ್ಯದ ಸಮಸ್ಯೆಯಿಂದಲೂ ಸಮಾಜ ನಲುಗಿ ಹೋಗಿದೆ. ಪರಿಸ್ಥಿತಿ ಹೀಗೆ ಮುಂದುವರಿದರೆ ಅಥವಾ ನಾವು ಪ್ಲಾಸ್ಟಿಕ್‌ಬಗ್ಗೆ ಎಚ್ಚೆತ್ತುಕೊಳ್ಳದಿದ್ದರೆ ಅಪಾಯ ಖಂಡಿತ. ಆದ್ದರಿಂದ ವಿದ್ಯಾರ್ಥಿ ಯುವ ಸಮುದಾಯ ಈ ನಿಟ್ಟಿನಲ್ಲಿ ಸಮಾಜದಲ್ಲಿ ಜಾಗೃತಿ ಮೂಡಿಸುವುದರೊಂದಿಗೆ ಉತ್ತಮ ಸಮಾಜವನ್ನು ನಿರ್ಮಾಣ ಮಾಡುವ ಸಂಕಲ್ಪ ತೊಡಬೇಕು ಎಂದು ಹೇಳಿದರು.

ಬಂಟ್ವಾಳ ತಾಲೂಕು ಪಂಚಾಯಿತಿ ಅಧ್ಯಕ್ಷ ಚಂದ್ರಹಾಸ ಕರ್ಕೇರ ಮಾತನಾಡಿ, ಮುಡಿಪು ದಿನದಿಂದ ದಿನಕ್ಕೆ ಅಭಿವೃದ್ಧಿ ಹೊಂದುತ್ತಿರುವ ಪ್ರದೇಶವಾಗಿದ್ದು ಈ ನಿಟ್ಟಿನಲ್ಲಿ ಭಾಗದಲ್ಲಿ ಪ್ಲಾಸ್ಟಿಕ್ ಬಗ್ಗೆಯೂ ಜಾಗೃತಿ ಹುಟ್ಟಿಸುವ ಅನಿವಾರ್ಯತೆ ಇದೆ ಎಂದು ಹೇಳಿದರು.

ಜಿಲ್ಲಾ ಪಂಚಾಯಿತಿ ಸದಸ್ಯೆ ಮಮತಾ ಗಟ್ಟಿ ಮಾತನಾಡಿ, ಪ್ಲಾಸ್ಟಿಕ್ ಹಾಗೂ ತ್ಯಾಜ್ಯದ ಸಮಸ್ಯೆಯ ಬಗ್ಗೆ ಮುಡಿಪುವಿನಲ್ಲಿ ನಡೆಯುವ ಜನಾಂದೋಲನ ಮಾದರಿಯಾಗಿದ್ದು ಇದಕ್ಕೆ ವಿದ್ಯಾರ್ಥಿಗಳು ಸೇರಿದಂತೆ ಎಲ್ಲರೂ ಕೈಜೋಡಿಸಿದ್ದಾರೆ ಎಂದರು.

ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಸಂತೋಷ್ ಕುಮಾರ್ ಬೋಳಿಯಾರ್ ಮಾತನಾಡಿ, ಈ ಜನಾಂದೋಲನವು ಕೇವಲ ಒಂದು ದಿನಕ್ಕೆ ಮಾತ್ರ ಸೀಮಿತವಾಗಿರದೆ ರಾಜಕೀಯ ರಹಿತವಾಗಿ ನಡೆದು ಸ್ವಚ್ಚಭಾರತ್ ಶ್ರೇಷ್ಠ ಭಾರತವಾಗಿ ಮೂಡಿಬರಲಿ ಎಂದು ಹಾರೈಸಿದರು.

ಕಾರ್ಯಕ್ರಮದಲ್ಲಿ ಶೀನ ಶೆಟ್ಟಿ, ಜನಶಿಕ್ಷಣ ಟ್ರಸ್ಟ್‌ನ ಕೃಷ್ಣ ಮೂಲ್ಯ, ತಾಲೂಕು ಪಂಚಾಯಿತಿ ಉಪಾಧ್ಯಕ್ಷ ಅಬ್ಬಾಸ್ ಆಲಿ ಅಮ್ಮೆಂಬಳ ಸಹಕಾರಿ ಬ್ಯಾಂಕ್‌ನ ರಾಜಾರಾಂ ಭಟ್, ತಾಲೂಕು ಪಂಚಾಯಿತಿ ಸದಸ್ಯ ನವೀನ್ ಪಾದಲ್ಪಾಡಿ, ಕುರ್ನಾಡು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶೈಲಜಾ, ರಮೇಶ್ ಶೇಣವ, ಸಂತೋಷ್ ಕುಮಾರ್ ಶೆಟ್ಟಿ, ಜಲೀಲ್ ಮೋಂಟುಗೋಳಿ, ನಾಸೀರ್ ನಡುಪದವು, ದೇವದಾಸ್ ಭಂಡಾರಿ ಮೊದಲಾದವರು ಉಪಸ್ಥಿತರಿದ್ದರು.

ಜನಾಂದೋಲನ ಜಾಥವು ಮುಡಿಪು ಸರಕಾರಿ ಕಾಲೇಜಿನಿಂದ ಮುಡಿಪು ಪೇಟೆಯವರೆಗೆ ನಡೆಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News